Karnataka Bandh | ಕರ್ನಾಟಕ ಬಂದ್: ರಾಜ್ಯಾದ್ಯಂತ ಬಿಗಿ ಭದ್ರತೆ, ಬೆಂಗಳೂರಿನಲ್ಲಿ ಬೆಳಿಗ್ಗೆ ರ್‍ಯಾಲಿ

ಬೆಳಗಾವಿಯಲ್ಲಿ ನಡೆದ ಬಸ್‌ ಕಂಡೆಕ್ಟರ್‌ ಮೇಲಿನ ಹಲ್ಲೆ ಖಂಡಿಸಿ ಕನ್ನಡ ಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್​ಗೆ ಬೆಂಗಳೂರು, ಬೆಳಗಾವಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.;

Update: 2025-03-22 05:25 GMT

ಕರ್ನಾಟಕ ಬಂದ್‌ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಬೆಳಗಾವಿಯಲ್ಲಿ ನಡೆದ ಬಸ್‌ ಕಂಡೆಕ್ಟರ್‌ ಮೇಲಿನ ಹಲ್ಲೆ ಖಂಡಿಸಿ ಕನ್ನಡ ಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್​ಗೆ ಬೆಂಗಳೂರು, ಬೆಳಗಾವಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ವಾಹನ ಸಂಚಾರ ವಿರಳವಾಗಿದೆ. ಕೆಲವು ಪ್ರದೇಶಗಳಲ್ಲಿ ಆಟೋ ಹಾಗೂ ಖಾಸಗಿ ಬಸ್ ಸಂಚಾರ ಸ್ಥಗಿತವಾಗಿದೆ. ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್ ಸಂಚಾರ ಎಂದಿನಂತೆಯೇ ಇದೆ. 

ಮೆಜೆಸ್ಟಿಕ್ ಮೆಟ್ರೋ ನಿಲ್ದಾಣಕ್ಕೆ ಬಿಗಿ ಭದ್ರತೆ

ಪ್ರತಿಭಟನಾಕಾರರು ಮೆಟ್ರೋ ನಿಲ್ದಾಣಕ್ಕೆ ಮುತ್ತಿಗೆ ಹಾಕುವ ಎಚ್ಚರಿಕೆ ನೀಡಿರುವ ಕಾರಣ ಮೆಜೆಸ್ಟಿಕ್​ ಮೆಟ್ರೋ ನಿಲ್ದಾಣಕ್ಕೆ ಬಿಗಿ ಭದ್ರತೆ ಕಲ್ಪಿಸಲಾಗಿದೆ. 1 ಕೆಎಸ್ಆರ್​​ಪಿ ತುಕಡಿ ನಿಯೋಜನೆ ಮಾಡಲಾಗಿದೆ. ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನೆ ಕಾವು ಹೆಚ್ಚಾಗುವ ಸಾಧ್ಯತೆ ಇದ್ದು, ಭದ್ರತೆಗೆ 100 ಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದೆ. ಓರ್ವ ಎಸಿಪಿ, ಇಬ್ಬರು ಇನ್ಸ್​ಪೆಕ್ಟರ್, 6 ಸಬ್ ಇನ್ಸ್​ಪೆಕ್ಟರ್ ನೇತೃತ್ವದಲ್ಲಿ ಭದ್ರತೆ ಒದಗಿಸಲಾಗಿದೆ.

ಶಾಂತಿಯುತ ಪ್ರತಿಭಟನೆ ಹಾಗೂ ಸಾರ್ವಜನಿಕ ಅನಾನುಕೂಲತೆಯನ್ನು ಕಡಿಮೆ ಮಾಡಲು ಪೊಲೀಸರು ಗೃಹರಕ್ಷಕರು ಮತ್ತು ನಗರ ಸಶಸ್ತ್ರ ಮೀಸಲು ಘಟಕವನ್ನು ನಿಯೋಜಿಸಿ ಎಲ್ಲೂ ಶಾಂತಿ ಕೆದಡದಂತೆ ಭದ್ರತಾ ಕ್ರಮಗಳನ್ನು ಜಾರಿಗೊಳಿಸಲಾಗಿದೆ. ಮಂಡ್ಯದಲ್ಲಿ ಕನ್ನಡ ಪರ ಸಂಘಟನೆಗಳು 12 ಗಂಟೆಗಳ ಬಂದ್ ಆರಂಭಿಸಿದ್ದು, ಪ್ರತಿಭಟನಾಕಾರರು ಸಂಜಯ ವೃತ್ತದಲ್ಲಿ ಜಮಾಯಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. 

ತುಮಕೂರಿನಲ್ಲಿ ಕನ್ನಡ ಪರ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಹುಲ್ಲನ್ನು ತಲೆ ಮೇಲೆ ಹೊತ್ತುಕೊಂಡು ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. 

ಮೈಸೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

ಮೈಸೂರು ಜಿಲ್ಲೆಯಲ್ಲಿ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಹುತೇಕ ಸಂಘಟನೆಗಳಿಂದ ನೈತಿಕ ಬೆಂಬಲ ವ್ಯಕ್ತವಾಗಿದೆ. ಹೋಟೆಲ್ ಮಾಲೀಕರ ಸಂಘ, ಖಾಸಗಿ ಬಸ್ ಮಾಲೀಕರ ಸಂಘ, ಮೈಸೂರು ಜಿಲ್ಲಾ ವಕೀಲರ ಸಂಘ ಸೇರಿ ಹಲವರಿಂದ ನೈತಿಕ ಬೆಂಬಲ ವ್ಯಕ್ತವಾಗಿದೆ. ಸಾರಿಗೆ ಸಂಚಾರ ಎಂದಿನಂತೆಯೇ ಇರಲಿದೆ. ಹೋಟೆಲ್‌ಗಳಲ್ಲಿ ಕಪ್ಪು ಪಟ್ಟಿ ಧರಿಸಿ ಕೆಲಸ ಮಾಡಲಾಗುತ್ತಿದೆ. ಮೈಸೂರು ಗ್ರಾಮಾಂತರ ಬಸ್ ನಿಲ್ದಾಣದ ಬಳಿ ಕನ್ನಡ ಪರ ಸಂಘಟನೆಗಳು ಬೆಳ್ಳಂಬೆಳಗ್ಗೆಯೇ ಪ್ರತಿಭಟನೆ ನಡೆಸುತ್ತಿವೆ.

ಮಂಗಳೂರಿನಲ್ಲಿ ಸಹಜ ಸ್ಥಿತಿ

ಕನ್ನಡ ಪರ ಸಂಘಟನೆಗಳು ಬಂದ್‌ಗೆ ಕರೆ ನೀಡಿದರೂ, ಮಂಗಳೂರಿನಲ್ಲಿ ದೈನಂದಿನ ಜೀವನವು ಅಡೆತಡೆಯಿಲ್ಲದೆ ಮುಂದುವರೆದಿದೆ. ಸಾರ್ವಜನಿಕ ಸಾರಿಗೆ ಸೇವೆಗಳು ಕಾರ್ಯನಿರ್ವಹಿಸುತ್ತಿದ್ದು, ಬಸ್‌ಗಳು ತಮ್ಮ ನಿಗದಿತ ಮಾರ್ಗಗಳಲ್ಲಿ ಚಲಿಸುತ್ತಿವೆ. ವಾಣಿಜ್ಯ ಮಳಿಗೆಗಳು ಮತ್ತು ಚಿಲ್ಲರೆ ಮಾರಾಟ ಮಳಿಗೆಗಳು ಯಾವುದೇ ಅಡೆತಡೆಯಿಲ್ಲದೆ ತಮ್ಮ ವ್ಯಾಪಾರ ಚಟುವಟಿಕೆಗಳನ್ನು ನಡೆಸುತ್ತಿದ್ದಾರೆ. 

Tags:    

Similar News