Karnataka By-Election | ಕ್ಷೇತ್ರ ಹಂಚಿಕೆ ಫೈನಲ್: ಶಿಗ್ಗಾವಿ, ಸಂಡೂರು ಬಿಜೆಪಿಗೆ, ಚನ್ನಪಟ್ಟಣ ಜೆಡಿಎಸ್‌ಗೆ?

ಶಿಗ್ಗಾವಿ ಹಾಗೂ ಸಂಡೂರು ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಯನ್ನು ಕಣಕ್ಕಿಳಿಸಿ, ಚನ್ನಪಟ್ಟಣ ಕ್ಷೇತ್ರದಿಂದ ಎನ್‌ಡಿಎ ಅಭ್ಯರ್ಥಿಯನ್ನಾಗಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿಗೆ ಟಿಕೆಟ್ ನೀಡುವುದು ಬಹುತೇಕ ಖಚಿತವಾಗಿದೆ.

Update: 2024-10-19 12:26 GMT

ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷಗಳಿಗೆ ಕಗ್ಗಂಟಾಗಿದ್ದ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಅಭ್ಯರ್ಥಿ ಆಯ್ಕೆ ಗೊಂದಲ ಕೊನೆಗೂ ಬಗೆಹರಿಯುವ ಹಂತ ತಲುಪಿದೆ.

ಶಿಗ್ಗಾವಿ ಹಾಗೂ ಸಂಡೂರು ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಯನ್ನು ಕಣಕ್ಕಿಳಿಸಿ, ಚನ್ನಪಟ್ಟಣ ಕ್ಷೇತ್ರದಿಂದ ಎನ್‌ಡಿಎ ಅಭ್ಯರ್ಥಿಯನ್ನಾಗಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಅವರಿಗೆ ಟಿಕೆಟ್ ನೀಡಲು ಬಿಜೆಪಿ ಮತ್ತು ಜೆಡಿಎಸ್‌ ವರಿಷ್ಠರು ಒಮ್ಮತಕ್ಕೆ ಬಂದಿದ್ದಾರೆ ಎನ್ನಲಾಗಿದೆ.

ಉಪ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಗಳನ್ನು ಶತಾಯಗತಾಯ ಗೆಲ್ಲಿಸುವ ಕಾರ್ಯತಂತ್ರದ ಭಾಗವಾಗಿ ರಾಜ್ಯ ಬಿಜೆಪಿ ನಾಯಕರು ಈ ಮಹತ್ವದ ತೀರ್ಮಾನ ತೆಗೆದುಕೊಂಡಿದ್ದು, ರಾಷ್ಟ್ರೀಯ ಅಧ್ಯಕ್ಷ ಜೆ. ಪಿ ನಡ್ಡಾ ಅವರ ಅನುಮೋದನೆ ಮಾತ್ರ ಬಾಕಿ ಇದೆ ಎಂದು ಮೂಲಗಳು ತಿಳಿಸಿವೆ.

ರಾಜ್ಯ ಬಿಜೆಪಿ ಘಟಕದ ನಿರ್ಧಾರವನ್ನು ವರಿಷ್ಠರಿಗೆ ತಲುಪಿಸಲು ಈಗಾಗಲೇ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ದೆಹಲಿಗೆ ತೆರಳಿದ್ದು, ಸಂಜೆ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಿ ರಾಜ್ಯ ನಾಯಕರ ನಿರ್ಧಾರ ತಿಳಿಸಲಿದ್ದಾರೆ ಎನ್ನಲಾಗಿದೆ.

ಈ ಮಧ್ಯೆ ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಶನಿವಾರ ಸಂಜೆ ಬೆಂಗಳೂರಿನಲ್ಲಿ ಬಿಜೆಪಿ ನಾಯಕರಾದ ಬಿ.ಎಸ್.ಯಡಿಯೂರಪ್ಪ, ವಿಧಾನಸಭಾ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರೊಂದಿಗೆ ಮಾತುಕತೆ ನಡೆಸಲಿದ್ದು, ಮೂರೂ ಕ್ಷೇತ್ರಗಳನ್ನು ಗೆಲ್ಲಿಸಿಕೊಂಡು ಬರಲು ಅನುಸಬೇಕಾದ ಯೋಜಿತ ಕಾರ್ಯತಂತ್ರಗಳ ಕುರಿತು ಸಮಾಲೋಚನೆ ನಡೆಸಲಿದ್ದಾರೆ ಎಂದು ಮೂಲಗಳು ಹೇಳಿವೆ.

ಇನ್ನು ಚನ್ನಪಟ್ಟಣ ಕ್ಷೇತ್ರದಿಂದ ಪಕ್ಷದ ಟಿಕೆಟ್‌ಗಾಗಿ ಪಟ್ಟು ಹಿಡಿದಿರುವ ಸಿ.ಪಿ.ಯೋಗೇಶ್ವರ್ ಬಂಡಾಯ ಸಾರುವ ಸಾಧ್ಯತೆ ಇದ್ದು, ಅವರನ್ನು ಮನವೊಲಿಸಿ ಉಳಿಸಿಕೊಳ್ಳುವ ಕುರಿತಂತೆಯೂ ಮಾತುಕತೆ ನಡೆಯಲಿದೆ ಎಂದು ಮೂಲಗಳು ಹೇಳಿವೆ.

ಮುರುಗೇಶ್ ನಿರಾಣಿಗೆ ಶಿಗ್ಗಾವಿ ಟಿಕೆಟ್?

ಶಿಗ್ಗಾವಿ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಮುರುಗೇಶ್ ನಿರಾಣಿ ಅವರಿಗೆ ಟಿಕೆಟ್ ಸಿಗುವುದು ಖಚಿತವಾಗಿದೆ. ಇಲ್ಲಿಯವರೆಗೆ ಶಿಗ್ಗಾವಿ ಕ್ಷೇತ್ರದಿಂದ ಭರತ್ ಬೊಮ್ಮಾಯಿ ಸ್ಪರ್ಧೆಗೆ ಲಾಬಿ ನಡೆಸುತ್ತಿದ್ದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರೇ ಇದೀಗ ತಮ್ಮ ಮಗನನ್ನು ಕಣಕ್ಕಿಳಿಸದಿರಲು ನಿರ್ಧರಿಸಿದ್ದಾರೆ. ಶಿಗ್ಗಾವಿಯಲ್ಲಿ ಯಾರು ಅಭ್ಯರ್ಥಿ, ಯಾರು ಗೆಲ್ಲುತ್ತಾರೆ ಎನ್ನುವ ಆಧಾರದ ಮೇಲೆ ಅಭ್ಯರ್ಥಿಯನ್ನು ನಿರ್ಧರಿಸಲಾಗುವುದು ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ನವದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಭರತ್ ಬೊಮ್ಮಾಯಿ ಸ್ಪರ್ಧೆ ಕುರಿತಂತೆ ಸ್ಥಳೀಯ ನಾಯಕರ ನಡುವೆ ಯಾವ ಮಾತುಕತೆಯಾಗಿದೆಯೊ ಗೊತ್ತಿಲ್ಲ. ಆದರೆ, ನಾನು ಇಷ್ಟು ವರ್ಷ ಅಲ್ಲಿ ಉತ್ತಮ ಕೆಲಸ ಮಾಡಿರುವುದರಿಂದ ಜನರು ನನ್ನ ಮಗನ ಹೆಸರು ಹೇಳಿರಬಹುದು. ಆದರೆ, ನಾನು ವೈಯಕ್ತಿಕ ಕಾರಣದಿಂದ ನನ್ನ ಮಗನಿಗೆ ಟಿಕೆಟ್ ಬೇಡ ಎಂದು ಹೇಳಿದ್ದೇನೆ. ಉಳಿದ ವಿಷಯವನ್ನು ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರೊಂದಿಗೆ ಚರ್ಚಿಸುತ್ತೇನೆ ಎಂದು ಹೇಳಿದ್ದಾರೆ.

ಸಂಡೂರಿನಲ್ಲಿ ಶ್ರೀರಾಮುಲು ಅವರಿಗೆ ಟಿಕೆಟ್ ನೀಡಲು ರಾಜ್ಯ ಬಿಜೆಪಿ ನಾಯಕರು ತೀರ್ಮಾನಿಸಿದ್ದಾರೆ ಎನ್ನಲಾಗಿದೆ.

ಒಟ್ಟಾರೆ ಅಭ್ಯರ್ಥಿ ಆಯ್ಕೆ ಕಗ್ಗಂಟು ಬಗೆಹರಿಯುವ ಹಂತ ತಲುಪಿದ್ದು, ವರಿಷ್ಠರ ಅಧಿಕೃತ ಘೋಷಣೆ ಬಾಕಿ ಉಳಿದಿದೆ ಎಂದು ಮೂಲಗಳು ಸ್ಪಷ್ಟಪಡಿಸಿವೆ.

Tags:    

Similar News