ಸಿಎಂ ಕುರ್ಚಿ ಕಾದಾಟ| ನಾಳೆ ರಾಹುಲ್‌ಗೆ ಖರ್ಗೆ ವರದಿ; ನಾಯಕತ್ವ ಬದಲಾವಣೆ ಚರ್ಚೆಗೆ ಇತಿಶ್ರೀ?

ನಾಯಕತ್ವ ಬದಲಾವಣೆ ಚರ್ಚೆಗಳು ಗರಿಗೆದರಿರುವ ಸಮಯದಲ್ಲಿಯೇ ಮಲ್ಲಿಕಾರ್ಜುನ ಖರ್ಗೆ ಅವರು ಸಿಎಂ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಪ್ರತ್ಯೇಕವಾಗಿ ಸುದೀರ್ಘ ಚರ್ಚೆ ನಡೆಸಿದ್ದಾರೆ.

Update: 2025-11-24 13:44 GMT

ರಾಜ್ಯ ಕಾಂಗ್ರೆಸ್‌ನಲ್ಲಿ ಸಿಎಂ ಕುರ್ಚಿಗಾಗಿ ಕಳೆದ ಎರಡು ದಿನಗಳಿಂದ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳು ಕ್ಷಣ ಕ್ಷಣಕ್ಕೂ ರೋಚಕ ತಿರುವು ಪಡೆಯುತ್ತಿವೆ.

ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ನಡುವಿನ ಕುರ್ಚಿ ಕಾದಾಟದ ಕುರಿತಂತೆ ಸರಣಿ ಸಭೆ ನಡೆಸಿ ಅಭಿಪ್ರಾಯ ಸಂಗ್ರಹಿಸಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನಾಳೆ (ಮಂಗಳವಾರ) ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ರಾಜ್ಯ ನಾಯಕರಿಂದ ಸಂಗ್ರಹಿಸಿದ ಅಭಿಪ್ರಾಯಗಳ ವರದಿಯನ್ನು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರಿಗೆ ಸಲ್ಲಿಸಿ, ಮಹತ್ವದ ಮಾತುಕತೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕುತೂಹಲ ಮೂಡಿಸಿದ ರಾಹುಲ್ ಜತೆ ಮಾತುಕತೆ

ನಾಯಕತ್ವ ಬದಲಾವಣೆ ಚರ್ಚೆಗಳು ಗರಿಗೆದರಿರುವ ಸಮಯದಲ್ಲಿಯೇ ಮಲ್ಲಿಕಾರ್ಜುನ ಖರ್ಗೆ ಅವರು ಸಿಎಂ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಪ್ರತ್ಯೇಕವಾಗಿ ಸುದೀರ್ಘ ಚರ್ಚೆ ನಡೆಸಿದ್ದಾರೆ. ಇಲ್ಲದೇ ಹಲವು ಸಚಿವರ ಜತೆಗೂ ಸಂವಾದ ನಡೆಸಿದ್ದು, ಎಲ್ಲರ ಅಭಿಪ್ರಾಯಗಳನ್ನು ವರದಿ ರೂಪದಲ್ಲಿ ಸಂಗ್ರಹಿಸಿದ್ದಾರೆ. ಈ ವರದಿಯನ್ನು ರಾಹುಲ್‌ ಗಾಂಧಿಗೆ ಅವರಿಗೆ ಸಲ್ಲಿಸಿ ಯಾವ ನಿರ್ಧಾರ ಕೈಗೊಳ್ಳಬಹುದು ಎಂಬುದರ ಕುರಿತು ಚರ್ಚೆ ನಡೆಸಲಿದ್ದಾರೆ.

ರಾಹುಲ್‌ರಿಂದ ಅಂತಿಮ ನಿರ್ಣಯ ಸಾಧ್ಯತೆ

ರಾಹುಲ್ ಗಾಂಧಿ ಅವರು ವಿದೇಶ ಪ್ರವಾಸದಿಂದ ನಾಳೆ ಅಥವಾ ನಾಡಿದ್ದು ವಾಪಸ್ಸಾಗುವ ಸಾಧ್ಯತೆ ಇದೆ. ಸಿಎಂ ಬದಲಾವಣೆ ಕುರಿತಂತೆ ಖರ್ಗೆ ಅವರು ನೀಡುವ ವರದಿ ಆಧರಿಸಿ ಅಂತಿಮ ನಿರ್ಣಯ ತೆಗೆದುಕೊಳ್ಳುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ನಾಳೆ ರಾಹುಲ್‌ ಗಾಂಧಿ ಅವರು ವಾಪಸಾದರೆ ಅವರೊಂದಿಗೆ ಮಲ್ಲಿಕಾರ್ಜುನ ಖರ್ಗೆ ಅವರು ಪ್ರತ್ಯೇಕ ಸಭೆ ನಡೆಸಿ ಚರ್ಚಿಸಲಿದ್ದಾರೆ. ಅಗತ್ಯ ಬಿದ್ದರೆ ಸಿಎಂ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್‌ ಅವರನ್ನು ದೆಹಲಿಗೆ ಕರೆಸಿಕೊಂಡು ಮಾತುಕತೆ ನಡೆಸುವ ಸಾಧ್ಯತೆಯೂ ಇದೆ ಎಂದು ಮೂಲಗಳು ತಿಳಿಸಿವೆ.

ಖರ್ಗೆ ಜತೆಗಿನ ಮಾತುಕತೆ ವೇಳೆ ಕರ್ನಾಟಕ ಕಾಂಗ್ರೆಸ್ನ ಆಂತರಿಕ ಅಸಮಾಧಾನ, ನಾಯಕತ್ವ ಬದಲಾವಣೆ ಕುರಿತ ಒತ್ತಡ, ಸಚಿವರ ಅಸಮಾಧಾನ ಮತ್ತು ಪಕ್ಷ ಸಂಘಟನೆಗೆ ತಲೆದೋರುವ ಬಿಕ್ಕಟ್ಟು ಕುರಿತಂತೆ ಚರ್ಚೆ ನಡೆಸಲಿದ್ದಾರೆ. ಹೀಗಾಗಿ ರಾಹುಲ್‌ ಗಾಂಧಿ ನಿರ್ಣಯದತ್ತ ಎಲ್ಲರ ಚಿತ್ತ ನೆಟ್ಟಿದೆ. ಒಂದು ವೇಳೆ ರಾಹುಲ್ ಗಾಂಧಿ ಅವರು ನಾಯಕತ್ವ ಬದಲಾವಣೆ ಬಗ್ಗೆ ನಿಖರ ಸಂದೇಶ ನೀಡದಿದ್ದರೆ, ಗೊಂದಲ ಮುಂದುವರಿಯುವ ಸಾಧ್ಯತೆಯೂ ಇದೆ ಎನ್ನಲಾಗಿದೆ.

ನಾಯಕತ್ವ ಬದಲಾವಣೆ ವಿಚಾರದಲ್ಲಿ ಹೈಕಮಾಂಡ್‌ ಮಧ್ಯಪ್ರವೇಶ ಮಾಡಿ, ಸಿಎಂ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್‌ ಅವರ ಮನವೊಲಿಸುವ ಸಾಧ್ಯತೆ ಇದೆ. ಸಂಪುಟ ಪುನಾರಚನೆಗೆ ಒತ್ತು ನೀಡಿ, ನಾಯಕತ್ವದ ಬದಲಾವಣೆಯನ್ನು ತಾತ್ಕಾಲಿಕವಾಗಿ ಮುಂದೂಡಬಹುದು ಎನ್ನಲಾಗಿದೆ.

Tags:    

Similar News