ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆ ವಿರೋಧಿಸಿ ತಮಿಳುನಾಡು ಹೋರಾಟ: ಸಿಎಂ ಬೆಂಬಲ; ಕಾಂಗ್ರೆಸ್‌ಗೆ ಗೊಂದಲ
Delimitation | ಮಾ. 22 ರಂದು ತಮಿಳು ನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಕರೆದಿರುವ ಸಮಾವೇಶದಲ್ಲಿ ಭಾಗವಹಿಸುವ ಸಂಬಂಧ ಸಮಾನ ದುಃಖಿತ ರಾಜ್ಯ ಕರ್ನಾಟಕದಿಂದ ಮಿಶ್ರ ಅಭಿಪ್ರಾಯ ಕೇಳಿ ಬಂದಿದೆ.;
ಕೇಂದ್ರ ಸರ್ಕಾರದ ಉದ್ದೇಶಿತ ಲೋಕಸಭಾ ಕ್ಷೇತ್ರ ಪುನರ್ವಿಂಗಡಣೆ ಹಾಗೂ ಅದರಿಂದ ದಕ್ಷಿಣ ರಾಜ್ಯಗಳಿಗೆ ಆಗುವ ಅಪಾಯದ ಕುರಿತು ಮಾ. 22 ರಂದು ತಮಿಳು ನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಕರೆದಿರುವ ಸಮಾವೇಶದಲ್ಲಿ ಭಾಗವಹಿಸುವ ಸಂಬಂಧ ಸಮಾನ ದುಃಖಿತ ರಾಜ್ಯ ಕರ್ನಾಟಕದಿಂದ ಮಿಶ್ರ ಅಭಿಪ್ರಾಯ ಕೇಳಿ ಬಂದಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಟಾಲಿನ್ ಅವರ ಉದ್ದೇಶಿತ ದಕ್ಷಿಣ ರಾಜ್ಯಗಳ ಸಮಾವೇಶಕ್ಕೆ ಬೆಂಬಲ ವ್ಯಕ್ತಪಡಿಸಿದರೆ, ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಪಕ್ಷದ ಹೈಕಮಾಂಡ್ ಜತೆ ಚರ್ಚಿಸಿ ನಿರ್ಧಾರ ಕೈಗೊಳ್ಳುವುದಾಗಿ ಹೇಳಿದ್ದಾರೆ. ಇದು ದಕ್ಷಿಣ ರಾಜ್ಯಗಳ ಮೇಲೆ ಹಿಂದಿ ಭಾಷಾ ಹೇರಿಕೆ ಹಾಗೂ ಇತರ ರಾಷ್ಟ್ರೀಯ ವಿಚಾರಗಳಲ್ಲಿ ತನ್ನ ನಿಲುವುಗಳಿಂದ ವಿರೋಧ ಕಟ್ಟಿಕೊಂಡಿರುವ ರಾಷ್ಟ್ರೀಯ ಪಕ್ಷ ಕಾಂಗ್ರೆಸ್‌ಗೆ ರಾಜ್ಯಮಟ್ಟದಲ್ಲಿ ತೆಗೆದುಕೊಳ್ಳಬೇಕಾದ ನಿಲುವುಗಳ ಬಗ್ಗೆ ಗೊಂದಲವಿರುವುದನ್ನು ಎತ್ತಿ ತೋರಿಸುತ್ತದೆ.
ತಮಿಳುನಾಡಿನ ಅರಣ್ಯ ಸಚಿವರಾದ ಡಾ.ಕೆ.ಪೊನ್ನುಮುಡಿ ಮತ್ತು ರಾಜ್ಯಸಭಾ ಸದಸ್ಯರಾದ ಮೊಹಮದ್ ಅಬ್ದುಲ್ಲಾ ಇಸ್ಮಾಯಿಲ್ ಅವರು ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಕೇಂದ್ರ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ಮತ್ತು ದಕ್ಷಿಣ ರಾಜ್ಯಗಳ ವಿರೋಧಿ ನಿಲುವನ್ನು ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ಕುರಿತು ಚರ್ಚಿಸಿದರು. ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆ ಹಾಗೂ ಕೇಂದ್ರದಿಂದ ದಕ್ಷಿಣ ರಾಜ್ಯಗಳ ಅವಗಣನೆ ಮತ್ತಿತರ ಸಂಗತಿಗಳ ವಿಚಾರದಲ್ಲಿ ಧ್ವನಿ ಎತ್ತುವಂತೆ, ಹಾಗೂ ತಮಿಳುನಾಡಿನ ಪ್ರತಿಭಟನೆ ಜೊತೆಗೆ ನಿಲ್ಲುವಂತೆ ಚರ್ಚಿಸಿದ್ದಾರೆ. ಹಾಗೂ ಸ್ವತಃ ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಅವರು ದೂರವಾಣಿ ಮೂಲಕ ಸಿದ್ದರಾಮಯ್ಯ ಅವರ ಜತೆ ಮಾತುಕತೆ ನಡೆಸಿದ್ದಾರೆ.
ಈ ಹಿನ್ನೆಲೆಯಲ್ಲಿ ಪ್ರಮುಖವಾಗಿ ಒಂದು ಕಾಲದಲ್ಲಿ ಪ್ರಾದೇಶಿಕ ಪಕ್ಷದ ನಾಯಕರಾಗಿದ್ದ, ಈಗ ಕಾಂಗ್ರೆಸ್‌ನಲ್ಲಿದ್ದರೂ ಕರ್ನಾಟಕದ ಪರ ಆಗಾಗ ದನಿ ಎತ್ತುತ್ತಿರುವ ಸಿದ್ದರಾಮಯ್ಯ ಅವರು ತಮಿಳುನಾಡು ಸರ್ಕಾರದ ನಿಯೋಗ ಮತ್ತು ಮುಖ್ಯಮಂತ್ರಿ ಸ್ಟಾಲಿನ್ ಅವರ ಜೊತೆಗೆ ಚರ್ಚಿಸುವ ವೇಳೆ ದಕ್ಷಿಣ ರಾಜ್ಯಗಳ ಪ್ರತಿರೋಧಕ್ಕೆ ಬೆಂಬಲ ಸೂಚಿಸಿದರು. ಕರ್ನಾಟಕದ ಹಿತಾಸಕ್ತಿಗೆ ವಿರುದ್ಧವಾದ, ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುವ, ಸಂವಿಧಾನದ ಒಕ್ಕೂಟ ತತ್ವಕ್ಕೆ ವಿರುದ್ಧವಾದ ಕೇಂದ್ರ ಸರ್ಕಾರದ ಎಲ್ಲಾ ನಡೆಗಳನ್ನೂ ತಾವು ಮುಲಾಜಿಲ್ಲದೆ ಖಂಡಿಸುತ್ತೇವೆ. ಈ ವಿಚಾರದಲ್ಲಿ ಹೋರಾಟಕ್ಕೂ ಬೆಂಬಲ ನೀಡುತ್ತೇವೆ ಎಂದು ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ.
ಚರ್ಚಿಸಿ ನಿರ್ಧಾರ
ಚೆನ್ನೈನಲ್ಲಿ ನಡೆಯಲಿರುವ ಕ್ಷೇತ್ರ ಪುನರ್ವಿಂಗಡಣೆ ವಿರೋಧಿ ಸಭೆಯಲ್ಲಿ ಭಾಗವಹಿಸುವ ಸಂಬಂಧ ಹೈಕಮಾಂಡ್ ಜೊತೆ ಚರ್ಚಿಸಿ ನಿರ್ಧರಿಸುವುದಾಗಿ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ತಮಿಳುನಾಡು ಅರಣ್ಯ ಸಚಿವ ಪೊನ್ನುಮುಡಿ ಮತ್ತು ರಾಜ್ಯಸಭಾ ಸದಸ್ಯ ಎಂ.ಎಂ. ಅಬ್ದುಲ್ಲಾ ಡಿಸಿಎಂ ಅವರ ಬಳಿಯೂ ಚರ್ಚಿಸಿದ್ದರು.
ತಮಿಳುನಾಡು ಸರ್ಕಾರದ ನಿಯೋಗ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಕ್ಷೇತ್ರ ಪುನರ್ವಿಂಗಡಣೆ ಸಂಬಂಧ ಹೋರಾಟಕ್ಕೆ ಆಹ್ವಾನ ನೀಡಿತು.
ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್, “ಕೇಂದ್ರದ ಲೋಕಸಭಾ ಕ್ಷೇತ್ರ ಪುನರ್ವಿಂಗಡಣೆ ಪ್ರಕ್ರಿಯೆಯ ವಿರುದ್ಧ ಪ್ರತಿಭಟನೆ ನಡೆಸುವಲ್ಲಿ ತಮಿಳುನಾಡು ಸಿಎಂ ಸ್ಟಾಲಿನ್ ಮುಂಚೂಣಿಯಲ್ಲಿದ್ದಾರೆ, ಕ್ಷೇತ್ರ ಪುನರ್ವಿಂಗಡಣೆ, ಕರ್ನಾಟಕ, ತಮಿಳುನಾಡು, ಕೇರಳ, ಆಂಧ್ರಪ್ರದೇಶ ಮತ್ತು ತೆಲಂಗಾಣಕ್ಕೆ ಲೋಕಸಭಾ ಸ್ಥಾನಗಳ ಸಂಖ್ಯೆಯನ್ನು ಕಡಿಮೆ ಮಾಡುತ್ತದೆ," ಎಂದು ಅಭಿಪ್ರಾಯಪಟ್ಟರು.
ಆದರೂ, "ತಮಿಳುನಾಡಿನ ಆಡಳಿತ ಪಕ್ಷ ಡಿಎಂಕೆ ನಮ್ಮ ಮೈತ್ರಿಕೂಟದ ಪಾಲುದಾರ ಪಕ್ಷ. ಕ್ಷೇತ್ರ ಪುನರ್ವಿಂಗಡಣೆಯ ಬಗ್ಗೆ ಅವರ ನಿಲುವಿಗೆ ನಾವು ಸಮ್ಮತಿಸುತ್ತೇವೆ. ಆದರೆ, ನಾವು ರಾಷ್ಟ್ರೀಯ ಪಕ್ಷವಾಗಿರುವುದರಿಂದ, ನಮ್ಮ ಪಕ್ಷದ ಹೈಕಮಾಂಡ್ ಜೊತೆ ಇದನ್ನು ಚರ್ಚಿಸಬೇಕಾಗಿದೆ. ನಾವು ಹೈಕಮಾಂಡ್ ಸಲಹೆ ಪಡೆದ ನಂತರ ಮುಂದಿನ ಕ್ರಮಗಳ ಬಗ್ಗೆ ನಿರ್ಧರಿಸುತ್ತೇವೆ," ಎಂದವವರು ಸ್ಪಷ್ಟಪಡಿಸಿದ್ದಾರೆ.
ಕ್ಷೇತ್ರ ಪುನರ್ವಿಂಗಡಣೆ
ಕರ್ನಾಟಕ ಮತ್ತು ತಮಿಳುನಾಡು ಸೇರಿದಂತೆ ದಕ್ಷಿಣ ರಾಜ್ಯಗಳು ಉತ್ತರದ ಹಲವು ರಾಜ್ಯಗಳಿಗಿಂತ ಜನಸಂಖ್ಯಾ ಬೆಳವಣಿಗೆಯನ್ನು ಹೆಚ್ಚು ಪರಿಣಾಮಕಾರಿಯಾಗಿ ನಿಯಂತ್ರಿಸುವಲ್ಲಿ ಯಶಸ್ವಿಯಾಗಿವೆ. ಆದಾಗ್ಯೂ, ಈ ಯಶಸ್ಸು ಕೇವಲ ಜನಸಂಖ್ಯಾ ಅಂಕಿಅಂಶಗಳನ್ನು ಆಧರಿಸಿದ ಕ್ಷೇತ್ರ ಪುನರ್ವಿಂಗಡಣೆಯಿಂದ ದಕ್ಷಿಣ ರಾಜ್ಯಗಳಿಗೆ ಹಿನ್ನಡೆಯನ್ನುಂಟುಮಾಡಬಹುದು, ಏಕೆಂದರೆ ಇದು ಈ ರಾಜ್ಯಗಳಿಗೆ ಸಂಸದೀಯ ಸ್ಥಾನಗಳ ಕಡಿತಕ್ಕೆ ಕಾರಣವಾಗಬಹುದು. ತಮಿಳುನಾಡಿನ ನಿಲುವನ್ನು ಬೆಂಬಲಿಸುವ ಮೂಲಕ, ಪರಿಣಾಮಕಾರಿ ಜನಸಂಖ್ಯಾ ನಿಯಂತ್ರಣವನ್ನು ನಿರ್ವಹಿಸಿದ ರಾಜ್ಯಗಳ ಮೇಲೆ ಆಗುತ್ತಿರುವ ಅನ್ಯಾಯವನ್ನು ಎದುರಿಸುವ ತಮಿಳುನಾಡಿನ ಹೋರಾಟಕ್ಕೆ ಸಿದ್ದರಾಮಯ್ಯ ಬೆಂಬಲಿಸಿದ್ದಾರೆ.
ಕೇಂದ್ರದಿಂದ ರಾಜ್ಯಕ್ಕೆ ಸಿಗಬೇಕಾದ ಅನುದಾನಗಳು, ತೆರಿಗೆ ಹಂಚಿಕೆ ಮತ್ತಿತರ ವಿಷಯಗಳ ಬಗ್ಗೆ ಪ್ರತಿಭಟಿಸುತ್ತಲೇ ಇರುವ ಸಿದ್ದರಾಮಯ್ಯ ಅವರ ನಿಲುವು ಕಾಂಗ್ರೆಸ್ ಪಕ್ಷದೊಳಗೆ ಏನು ಪರಿಣಾಮ ಬೀರುತ್ತದೆ ಎಂಬುದರ ಬಗ್ಗೆ ಚರ್ಚೆ ಆರಂಭವಾಗಿದೆ. ಆದರೂ, ತಮಿಳುನಾಡಿನ ನಡೆಯನ್ನು ಬೆಂಬಲಿಸುವ ಬಗ್ಗೆ ಕಾಂಗ್ರೆಸ್‌ನೊಳಗಿನ ಭಿನ್ನಾಭಿಪ್ರಾಯ ಎದ್ದು ಕಾಣುತ್ತಿದೆ. ರಾಷ್ಟ್ರೀಯ ಘಟಕವಾಗಿ ಪಕ್ಷ ಎದುರಿಸುತ್ತಿರುವ ಸಂದಿಗ್ಧತೆಯನ್ನು ಕೂಡಾ ಅದು ಎತ್ತಿ ತೋರಿಸುತ್ತದೆ. ಅಂತಹ ಸಮಸ್ಯೆಗಳು ಉದ್ಭವಿಸಿದಾಗ ರಾಜ್ಯಗಳಲ್ಲಿ ಪ್ರಾದೇಶಿಕ ಪಕ್ಷಗಳ ಪ್ರಾಮುಖ್ಯತೆಯನ್ನು ಹಾಗೂ ಒಕ್ಕೂಟ ವ್ಯವಸ್ಥೆಯಲ್ಲಿ ರಾಜ್ಯಗಳ ಮಹತ್ವವನ್ನು ಎತ್ತಿತೋರಿಸುತ್ತಿರುವ ಬೆಳವಣಿಗೆ ಇದಾಗಿದೆ.