"ಒಂದು ರಾಷ್ಟ್ರ- ಒಂದು ಚುನಾವಣೆ": ಸಿದ್ದರಾಮಯ್ಯ ವಿರೋಧ; ವಿಧಾನಮಂಡಲದಲ್ಲಿ ಗೊತ್ತುವಳಿ ಮಂಡಿಸಲು ಚಿಂತನೆ

ಕೇರಳ ಸರ್ಕಾರ ಈಗಾಗಲೇ ‘’ಒಂದು ರಾಷ್ಟ್ರ, ಒಂದು ಚುನಾವಣೆ’’ ಪ್ರಸ್ತಾವವನ್ನು ವಿರೋಧಿಸಿ ಗೊತ್ತುವಳಿಯನ್ನು ಅಂಗೀಕರಿಸಿ ಕೇಂದ್ರ ಸರ್ಕಾರಕ್ಕೆ ಕಳಿಸಿಕೊಟ್ಟಿದೆ. ಅದೇ ಮಾದರಿ ಅನುಸರಿಸಲು ಕರ್ನಾಟಕ ಸರ್ಕಾರವೂ ಚಿಂತಿಸಿದೆ.

Update: 2024-12-13 03:55 GMT

ಕೇರಳ ಸರ್ಕಾರ ಈಗಾಗಲೇ ‘’ಒಂದು ರಾಷ್ಟ್ರ, ಒಂದು ಚುನಾವಣೆ’’ ಪ್ರಸ್ತಾವವನ್ನು ವಿರೋಧಿಸಿ ಗೊತ್ತುವಳಿಯನ್ನು ಅಂಗೀಕರಿಸಿ ಕೇಂದ್ರ ಸರ್ಕಾರಕ್ಕೆ ಕಳಿಸಿಕೊಟ್ಟಿದೆ. ಅದೇ ಮಾದರಿಯಲ್ಲಿ ಕರ್ನಾಟಕ ಸರ್ಕಾರವೂ  ವಿಧಾನಮಂಡಲದಲ್ಲಿ ಗೊತ್ತುವಳಿ ಮಂಡಿಸಿ ಕೇಂದ್ರಕ್ಕೆ ಕಳುಹಿಸಿಕೊಡಲು ಚಿಂತನೆ ನಡೆಸಿದೆ.

ಕೇಂದ್ರ ಸಚಿವ ಸಂಪುಟ ಗುರುವಾರ ಒಪ್ಪಿಗೆ ನೀಡಿರುವ ‘ಒಂದು ರಾಷ್ಟ್ರ, ಒಂದು ಚುನಾವಣೆ’’ ಮಸೂದೆ ಸಂಸದೀಯ ಪ್ರಜಾಪ್ರಭುತ್ವ ಮತ್ತು ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾಗಿರುವುದು ಮಾತ್ರವಲ್ಲ, ಇದರ ಹಿಂದೆ ರಾಜ್ಯಗಳ ಹಕ್ಕುಗಳನ್ನು ಮೊಟಕುಗೊಳಿಸುವ ದುರಾಲೋಚನೆ ಕೂಡಾ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ.

"ನಮ್ಮ ಸರ್ಕಾರ ಕೂಡಾ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಜೊತೆ ಸಮಾಲೋಚನೆ ನಡೆಸಿ ‘’ಒಂದು ರಾಷ್ಟ್ರ, ಒಂದು ಚುನಾವಣೆ’’ ಮಸೂದೆ ವಿರುದ್ದ ಬಹುಮತದ ಗೊತ್ತುವಳಿಯನ್ನು ಅಂಗೀಕರಿಸಿ ಕೇಂದ್ರ ಸರ್ಕಾರಕ್ಕೆ ಕಳಿಸಿಕೊಡಲಾಗುವುದು," ಎಂದು  ಸಿದ್ದರಾಮಯ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. " ನರೇಂದ್ರ ಮೋದಿ ಸರ್ಕಾರ ಸರ್ವಾಧಿಕಾರಿ ಧೋರಣೆಯಿಂದ ಈ ಮಸೂದೆಯನ್ನು ದೇಶದ ಮೇಲೆ ಹೇರಲು ಹೊರಟಿದೆ," ಎಂದು ಟೀಕಿಸಿದ್ದಾರೆ.

"ಹಲವಾರು ದೋಷಗಳಿಂದ ಕೂಡಿರುವ ಈಗಿನ ಚುನಾವಣಾ ವ್ಯವಸ್ಥೆಯನ್ನು ಸುಧಾರಣೆಗೊಳಪಡಿಸುವ ತುರ್ತು ಅಗತ್ಯ ಇರುವ ಈ ಸಂದರ್ಭದಲ್ಲಿ ಇಂತಹ ಮಸೂದೆಗಳು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಇನ್ನಷ್ಟು ದುರ್ಬಲಗೊಳಿಸಲಿದೆ. ಇಂತಹದ್ದೊಂದು ಮುಖ್ಯವಾದ ಮಸೂದೆಗೆ ಕೇಂದ್ರ ಸಚಿವ ಸಂಪುಟದ ಒಪ್ಪಿಗೆ ಪಡೆಯುವ ಮೊದಲು ವಿರೋಧಪಕ್ಷಗಳು ಮತ್ತು ರಾಜ್ಯ ಸರ್ಕಾರಗಳ ಜೊತೆ ಸಮಾಲೋಚನೆ ನಡೆಸಬೇಕಾಗಿತ್ತು," ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

"ಲೋಕಸಭೆ ಇಲ್ಲವೇ ವಿಧಾನಸಭೆಯಲ್ಲಿ ಆಡಳಿತಾರೂಢ ಪಕ್ಷ ವಿಶ್ವಾಸಮತ ಗಳಿಸಲು ಸೋತುಹೋಗುವ ಸಂದರ್ಭದಲ್ಲಿ ಎದುರಾಗುವ ಬಿಕ್ಕಟ್ಟಿಗೆ ಈ ಪ್ರಸ್ತಾವದಲ್ಲಿ ಪರಿಹಾರವೇ ಇಲ್ಲ ಎಂದರು ಇಂತಹ ಸಂದರ್ಭದಲ್ಲಿ ಮಧ್ಯಂತರ ಚುನಾವಣೆಯೊಂದೇ ಯೋಗ್ಯ ಪರಿಹಾರ. ಇದರ ಬದಲಿಗೆ ಸದನದಲ್ಲಿ ವಿಶ್ವಾಸ ಮತ ಗಳಿಸಲು ವಿಫಲವಾದ ಅಲ್ಪಸಂಖ್ಯಾತ ಪಕ್ಷ ಅಧಿಕಾರದಲ್ಲಿ ಮುಂದುವರಿಯಲು ಅವಕಾಶ ನೀಡಿದರೆ ಅದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಬಗೆಯುವ ದ್ರೋಹವಾಗುತ್ತದೆ," ಎಂದು ಹೇಳಿದ್ದಾರೆ.

ಹೊಸ ಚುನಾವಣಾ ವ್ಯವಸ್ಥೆ ಜಾರಿಗೆ ಬರಬೇಕಾದರೆ ಮೊದಲು ಪ್ರಜಾಪ್ರತಿನಿಧಿ ಕಾಯ್ದೆಗೆ ತಿದ್ದುಪಡಿ ಮಾಡಬೇಕಾಗಿದೆ. ಇದರ ಜೊತೆಗೆ ಸಂವಿಧಾನದ ಕನಿಷ್ಠ ಐದು ವಿಧಿಗಳಿಗೆ ತಿದ್ದುಪಡಿ ತರಬೇಕಾಗಿದೆ. ಇಡೀ ದೇಶದಲ್ಲಿ ಒಂದೇ ಬಾರಿ ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಗಳನ್ನು ನಡೆಸುವ ಶಕ್ತಿ-ಸಾಮರ್ಥ್ಯ ನಮ್ಮ ಈಗಿನ ಚುನಾವಣಾ ಆಯೋಗಕ್ಕೆ ಇಲ್ಲ. ನರೇಂದ್ರ ಮೋದಿ ಸರ್ಕಾರ ತನ್ನ ವೈಫಲ್ಯವನ್ನು ಮುಚ್ಚಿಕೊಳ‍್ಳಲು ಆಗಾಗ ಇಂತಹ ಗಿಮಿಕ್ ಗಳನ್ನು ಪ್ರದರ್ಶಿಸುತ್ತದೆ ಎಂದು ಸಿದ್ದರಾಮಯ್ಯ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

Tags:    

Similar News