Mysore Muda Case | ಸಿಬಿಐ ತನಿಖೆಗೆ ಕೋರಿದ್ದ ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್

ಮುಡಾ ಹಗರಣದ ತನಿಖೆಯನ್ನು ಸಿಬಿಐಗೆ ವರ್ಗಾಯಿಸಬೇಕು ಎಂದು ಕೋರಿ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಡಿಸೆಂಬರ್ 10ಕ್ಕೆ ಮುಂದೂಡಿದೆ.;

Update: 2024-11-26 08:32 GMT
ಸಿದ್ದರಾಮಯ್ಯ ವಿರುದ್ಧ ಸಿಬಿಐ ತನಿಖೆಗೆ ಕೋರಿದ್ದ ಅರ್ಜಿ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್‌ ಮುಂದೂಡಿದೆ.
Click the Play button to listen to article

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ತನಿಖೆಯನ್ನು ಸಿಬಿಐಗೆ ವರ್ಗಾಯಿಸಬೇಕು ಎಂದು ಕೋರಿ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಡಿಸೆಂಬರ್ 10ಕ್ಕೆ ಮುಂದೂಡಿದೆ. 

ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣಕ್ಕೆ ಸಂಬಂಧಿಸಿಂತೆ ಇಡಿ ಹಾಗೂ ಲೋಕಾಯುಕ್ತ ಪೊಲೀಸರು ತನಿಖೆ ನಡೆಸುತ್ತಿದ್ದು, ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೋರಿ ದೂರುದಾರ ಸ್ನೇಹಮಯಿ ಕೃಷ್ಣ ಅರ್ಜಿ ಸಲ್ಲಿಸಿದ್ದರು. ಮುಡಾದಿಂದ ಪರಿಹಾರ ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಹಗರಣದ ಕುರಿತು ಲೋಕಾಯುಕ್ತ ಪೊಲೀಸರು ನಡೆಸುತ್ತಿರುವ ತನಿಖೆಯ ನ್ಯಾಯಸಮ್ಮತವಾಗಿಲ್ಲ ಎಂದಿರುವ ಸ್ನೇಹಮಯಿ ಕೃಷ್ಣ, ಪ್ರಕರಣದ ಕುರಿತು ಕೇಂದ್ರೀಯ ತನಿಖಾ ದಳ(ಸಿಬಿಐ)ದಿಂದ ತನಿಖೆ ನಡೆಸಬೇಕೆಂದು ಅರ್ಜಿ ಸಲ್ಲಿದ್ದರು. ಲೋಕಾಯುಕ್ತ ಪೊಲೀಸರ ಮೇಲೆ ತಮಗೆ ನಂಬಿಕೆ ಇಲ್ಲ ಹಾಗಾಗಿ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಅವರು ತಮ್ಮ ಅರ್ಜಿಯಲ್ಲಿ ಕೋರಿದ್ದರು. 

ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಮಂಗಳವಾರ ಅರ್ಜಿಯ ವಿಚಾರಣೆಯನ್ನು ಕೈಗೆತ್ತಿಕೊಂಡರು. ವಿಚಾರಣೆ ಆರಂಭವಾದ ಸಂದರ್ಭದಲ್ಲಿ ಜಮೀನಿನ ಮೂಲ ಮಾಲೀಕ ದೇವರಾಜು ಪರ ಹಿರಿಯ ವಕೀಲ ದುಶ್ಯಂತ್ ದವೆ, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದ ರಾಜ್ಯಪಾಲರ ಆದೇಶ ಎತ್ತಿ ಹಿಡಿದಿರುವ ಏಕಸದಸ್ಯ ಪೀಠದ ಆದೇಶವನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲಾಗಿದೆ. ಈ ಅರ್ಜಿಯ ವಿಚಾರಣೆ ಡಿಸೆಂಬರ್ 5ಕ್ಕೆ ನಿಗದಿಯಾಗಿದೆ. ಈ ನಿಟ್ಟಿನಲ್ಲಿ ಸಿಬಿಐ ತನಿಖೆ ಕೋರಿರುವ ಅರ್ಜಿಯ ವಿಚಾರಣೆಯನ್ನು ಡಿಸೆಂಬರ್ 5ರ ನಂತರ ನಿಗದಿಪಡಿಸಬೇಕು ಎಂದು ಪೀಠಕ್ಕೆ ಮನವಿ ಮಾಡಿದರು.

ಈ ವೇಳೆ ದೂರುದಾರ/ಅರ್ಜಿದಾರ ಸ್ನೇಹಮಯಿ ಕೃಷ್ಣ ಪರ ವಕೀಲ ಕೆ.ಜಿ.ರಾಘವನ್, ವಿಚಾರಣೆ ಮುಂದೂಡುವುದಕ್ಕೂ ಮುನ್ನ ತನಿಖೆ ನಡೆಸಿರುವುದಕ್ಕೆ ಸಂಬಂಧಿಸಿದಂತೆ ದಾಖಲೆಗಳನ್ನು ಒಮ್ಮೆ ಪರಿಶೀಲಿಸಬೇಕು ಎಂದು ಮನವಿ ಮಾಡಿದರು. ಇದಕ್ಕೆ ದುಶ್ಯಂತ್ ದವೆ, ಇದು ಅನ್ಯಾಯದ ನಡೆ, ಸರಿಯಾದ ಕ್ರಮವಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಈ ವೇಳೆ ಪೀಠ, ಇಂದು ಅರ್ಜಿ ವಿಚಾರಣೆ ನಡೆಸುತ್ತಿಲ್ಲ. ಹೀಗಾಗಿ ದಾಖಲೆ ಪರಿಶೀಲನೆ ನಡೆಸುವ ಅಗತ್ಯವಿಲ್ಲ ಎಂದು ತಿಳಿಸಿ ವಿಚಾರಣೆಯನ್ನು ಡಿಸೆಂಬರ್ 10ಕ್ಕೆ ಮುಂದೂಡಿತು. 

ಸಿದ್ದರಾಮಯ್ಯನವರ ಪತ್ನಿ ಪಾರ್ವತಿ ಅವರಿಗೆ ಜಮೀನಿನ ಪರಿಹಾರವಾಗಿ ನಿವೇಶನ ಹಂಚಿಕೆ ಮಾಡಲಾಗಿತ್ತು. ನಿವೇಶನ ಹಂಚಿಕೆ ಪ್ರಕ್ರಿಯೆಯಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ಸ್ನೇಹಮಯಿ ಕೃಷ್ಣ ದೂರು ನೀಡಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು ದಾಖಲಿಸಿಕೊಂಡಿದ್ದು, ಇತ್ತೀಚೆಗೆ ಮುಡಾ ಕಚೇರಿ ಸೇರಿದಂತೆ ಬೆಂಗಳೂರು ಮತ್ತು ಮೈಸೂರಿನ ಹಲವು ಸ್ಥಳಗಳಲ್ಲಿ ಶೋಧ ನಡೆಸಿದೆ. ಈ ಆರೋಪವನ್ನು ಸಿಎಂ ಸಿದ್ದರಾಮಯ್ಯ ಅಲ್ಲಗಳೆದಿದ್ದಾರೆ. ಈ ತಿಂಗಳ ಆರಂಭದಲ್ಲಿ ಲೋಕಾಯುಕ್ತರು ಮುಖ್ಯಮಂತ್ರಿಯನ್ನು ವಿಚಾರಣೆಗೆ ಕರೆದಿದ್ದರು.

Tags:    

Similar News