ಅತ್ಯಾಚಾರ ಸಂತ್ರಸ್ತೆ ಅಪಹರಣ | ಎಚ್‌ಡಿ ರೇವಣ್ಣ ಜಾಮೀನು ಅಬಾಧಿತ, ಎಸ್‌ಐಟಿ ಮನವಿ ವಜಾಗೊಳಿಸಿದ ಹೈಕೋರ್ಟ್
ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ ಅವರಿಗೆ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ರಾಜ್ಯ ಪೊಲೀಸ್ ವಿಶೇಷ ತನಿಖಾ ತಂಡ (ಎಸ್‌ಐಟಿ) ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಬುಧವಾರ ವಜಾಗೊಳಿಸಿದೆ.;
ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಅತ್ಯಾಚಾರಕ್ಕೆ ಒಳಗಾಗಿದ್ದ ಸಂತ್ರಸ್ತೆಯ ಅಪಹರಣ ಪ್ರಕರಣದ ಆರೋಪಿ, ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ ಅವರಿಗೆ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ರಾಜ್ಯ ಪೊಲೀಸ್ ವಿಶೇಷ ತನಿಖಾ ತಂಡ (ಎಸ್‌ಐಟಿ) ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಬುಧವಾರ ವಜಾಗೊಳಿಸಿದೆ.
ಈ ಹಿಂದೆ ಈ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿ ಆದೇಶವನ್ನು ಕಾಯ್ದಿರಿಸಿತ್ತು. ಬುಧವಾರ ಆದೇಶವನ್ನು ಪ್ರಕಟಿಸಿದ ನ್ಯಾಯಮೂರ್ತಿಗಳು ಎಸ್‌ಐಟಿ ಅರ್ಜಿಯನ್ನು ವಜಾ ಮಾಡಿದ್ದಾರೆ.
ಎಚ್ ಡಿ ರೇವಣ್ಣ ಅವರಿಗೆ ವಿಶೇಷ ನ್ಯಾಯಾಲಯವು ಮೇ 13 ರಂದು ಜಾಮೀನು ನೀಡಿತ್ತು. ಮೇ 31 ರಂದು ಎಸ್‌ಐಟಿ ಇದನ್ನು ಪ್ರಶ್ನಿಸಿತ್ತು. ಎಸ್‌ಐಟಿ ಪರ ವಾದ ಮಂಡಿಸಿದ್ದ ವಿಶೇಷ ಪ್ರಾಸಿಕ್ಯೂಟರ್, ಹಿರಿಯ ವಕೀಲ ರವಿವರ್ಮ ಕುಮಾರ್, ಆರೋಪಿಗೆ ಜಾಮೀನು ನೀಡುವಾಗ ಅಧೀನ ನ್ಯಾಯಾಲಯ ಸೂಕ್ತ ಕ್ರಮ ಅನುಸರಿಸಿಲ್ಲ. ಸಂತ್ರಸ್ತೆ ಮಹಿಳೆಯರನ್ನು ಅಪಹರಿಸಿ ಏಳನೇ ಆರೋಪಿಯ ಮನೆಯಲ್ಲಿಡಲಾಗಿತ್ತು. ಆತನಿಗೂ ಆಕೆಗೂ ಯಾವುದೇ ಸಂಬಂಧ ಇರಲಿಲ್ಲ. ಆ ಆರೋಪಿಯ ಮನೆಯಲ್ಲಿ ಮಹಜರು ನಡೆಸಿದಾಗ, ಆಕೆಯ ಕೂದಲು ದೊರೆತಿದೆ ಎನ್ನುವುದನ್ನು ನ್ಯಾಯಾಲಯದ ಗಮನಕ್ಕೆ ತಂದಿದ್ದರು.
ರೇವಣ್ಣ ಪರ ವಾದ ಮಂಡಿಸಿದ್ದ ಹಿರಿಯ ವಕೀಲ ಸಿ ವಿ ನಾಗೇಶ್, ಇಡೀ ಘಟನೆಗೆ ಐ ಪಿಸಿ ಸೆ.364 ಎ ಅನ್ವಯವಾಗುವುದಿಲ್ಲ. ಇಡೀ ಪ್ರಕರಣದಲ್ಲಿ ಯಾವುದೇ ಆರೋಪಿಯು ಸಂತ್ರಸ್ತೆಗೆ ಯಾವುದೇ ರೀತಿಯ ಹಾನಿ ಉಂಟು ಮಾಡಿಲ್ಲ, ಬೆದರಿಕೆ ಹಾಕಿಲ್ಲ ಎಂಬುದನ್ನು ವಿಚಾರಣಾ ನ್ಯಾಯಾಲಯ ತನ್ನ ಆದೇಶದಲ್ಲಿ ಸ್ಪಷ್ಟವಾಗಿ ದಾಖಲಿಸಿದೆ ಎಂದು ವಾದ ಮಂಡಿಸಿದ್ದರು.
ರೇವಣ್ಣ ಅವರ ಸಂಬಂಧಿ ಹಾಗೂ ಈ ಪ್ರಕರಣದ ಸಹ ಆರೋಪಿ ಎನ್ನಲಾದ ಸತೀಶ್ ಬಾಬಣ್ಣ ಅವರಿಗೂ ಕರ್ನಾಟಕ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಇತರ ಐವರು ಸಹ ಆರೋಪಿಗಳಿಗೂ ಜಾಮೀನು ನೀಡಲಾಗಿದೆ.