ರಾಜ್ಯದ ತೆರಿಗೆ ಪಾಲು| ಶೇ 60 ನೀಡಲು 16ನೇ ಹಣಕಾಸು ಆಯೋಗಕ್ಕೆ ಕರ್ನಾಟಕ ಶಿಫಾರಸು

Update: 2024-08-29 08:44 GMT

ಕೇಂದ್ರದಿಂದ ಸಿಗಬೇಕಾದ ಪಾಲಿನ ಹಂಚಿಕೆ ಸಂದರ್ಭದಲ್ಲಿ ಹಂಚಿಕೊಳ್ಳುವ ಬಾಬ್ತಿನಲ್ಲಿ ರಾಜ್ಯಗಳಿಗೆ ತಮ್ಮ ದೇಣಿಗೆಯ ಶೇ.60ರಷ್ಟನ್ನು ನೀಡಬೇಕೆಂದು 16ನೇ ಹಣಕಾಸು ಆಯೋಗಕ್ಕೆ ಕರ್ನಾಟಕ ಸರ್ಕಾರ ಶಿಫಾರಸು ಮಾಡಿದೆ.

ಬೆಂಗಳೂರಿನಲ್ಲಿ ಗುರುವಾರ ನಡೆದ 16ನೇ ಹಣಕಾಸು ಆಯೋಗದ ಅಧ್ಯಕ್ಷ ಡಾ.ಅರವಿಂದ ಪನಗಾರಿಯಾ ಜತೆ ನಡೆಸಿದ ಸಭೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ದಕ್ಷತೆ ಮತ್ತು ನಿರ್ವಹಣೆಗೆ ಸೂಕ್ತ ಪುರಸ್ಕಾರ ನೀಡುವ ಬಗ್ಗೆ ಆಯೋಗ ದಿಟ್ಟ ನಿಲುವು ತಳೆಯಬೇಕು. ಕೇಂದ್ರ ಮತ್ತು ರಾಜ್ಯಗಳ ನಡುವಣ ಆರ್ಥಿಕ ಸಂಬಂಧ ಅತ್ಯಂತ ಮಹತ್ವವಾಗಿರುವ ಇಂದಿನ ಸಂದರ್ಭದಲ್ಲಿ, 16ನೇ ಹಣಕಾಸು ಆಯೋಗ ಮಾಡುವ ಶಿಫಾರಸ್ಸುಗಳು, ಸುಸ್ಥಿರ ಮತ್ತು ಸಮಗ್ರ ಅಭಿವೃದ್ಧಿ ಸಾಧಿಸುವ ನಿಟ್ಟಿನಲ್ಲಿ ಪ್ರಮುಖ ಪಾತ್ರ ವಹಿಸಲಿದೆ ಎಂದು ಹೇಳಿದರು.

ಬಲಿಷ್ಠ ಭಾರತ ನಿರ್ಮಾಣಕ್ಕೆ ಬಲಿಷ್ಠ ಕರ್ನಾಟಕ ನಿರ್ಣಾಯಕವಾಗಿದೆ. ರಾಷ್ಟ್ರೀಯ ಜಿಡಿಪಿ ಮತ್ತು ಒಟ್ಟು ತೆರಿಗೆ ಆದಾಯಕ್ಕೆ ರಾಜ್ಯಗಳು ನೀಡುವ ಉತ್ತಮ ದೇಣಿಗೆ , ದೇಶ ನಿರ್ಮಾಣ ಕಾರ್ಯದಲ್ಲಿ ಅನೇಕ ವಿಧದಲ್ಲಿ ನೆರವಾಗುತ್ತದೆ. ದೇಶದ ನಿರ್ಮಾಣಕ್ಕೆ ಕೊಡುಗೆ ಹೆಮ್ಮೆಯಿಂದ ಕೊಡುಗೆ ನೀಡುತ್ತಿರುವ ಏಳು ಕೋಟಿ ಕನ್ನಡಿಗರು ಆಶೋತ್ತರಗಳನ್ನೂ ಹೊಂದಿದ್ದಾರೆ. ಸಂಪನ್ಮೂಲಗಳ ಹಂಚಿಕೆಯಲ್ಲಿ ಸಮತೋಲಿತ ಮತ್ತು ನ್ಯಾಯಯುತವಾದ ಹಾದಿಯನ್ನು ಆಯೋಗ ಶಿಫಾರಸು ಮಾಡುವುದನ್ನು ಅವರು ಎದುರು ನೋಡುತ್ತಿದ್ದಾರೆ ಎಂದು ಹೇಳಿದರು.

ಹಂಚಿಕೆ ಮಾಡುವ ಬಾಬ್ತಿನಲ್ಲಿ (central divisible pool) ಕನಿಷ್ಟ ಶೇ.50ರಷ್ಟು ಪಾಲನ್ನು ಸಂಬಂಧಿಸಿದ ರಾಜ್ಯಗಳಿಗೆ ನಿಗದಿಪಡಿಸಬೇಕು. ಸೆಸ್‌ ಮತ್ತು ಸರ್ಚಾರ್ಜ್‌ ಒಟ್ಟು ತೆರಿಗೆ ಆದಾಯದ ಶೇ.5ಕ್ಕೆ ಮಿತಿಗೊಳಿಸಬೇಕು. ಇದಕ್ಕಿಂತ ಹೆಚ್ಚಾಗುವ ಯಾವುದೇ ಮೊತ್ತವನ್ನು ಹಂಚಿಕೊಳ್ಳುವ ಬಾಬ್ತಿಗೆ ಪರಿಗಣಿಸಬೇಕು. ಕೇಂದ್ರ ಸರ್ಕಾರದ ತೆರಿಗೆಯೇತರ ಆದಾಯವನ್ನು ಹಂಚಿಕೊಳ್ಳುವ ತೆರಿಗೆ ಬಾಬ್ತಿನ ವ್ಯಾಪ್ತಿಗೆ ತರುವ ಕುರಿತು ಸಂವಿಧಾನಕ್ಕೆ ಅಗತ್ಯ ತಿದ್ದುಪಡಿ ತರಬೇಕೆಂದು ಮನವಿ ಮಾಡಿದರು.

ಪ್ರಾದೇಶಿಕ ಅಸಮಾನತೆ

ಕರ್ನಾಟಕ ಪ್ರಾದೇಶಿಕ ಅಸಮಾನತೆಯನ್ನು ಎದುರಿಸುತ್ತಿದ್ದು, ಈ ಬಗ್ಗೆ ಕೇಂದ್ರ ಸರ್ಕಾರ ಹೆಚ್ಚಿನ ಗಮನಹರಿಸಬೇಕಾಗಿದೆ ಎಂದು ಗಮನಸೆಳೆದ ಮುಖ್ಯಮಂತ್ರಿ, ಪ್ರಾದೇಶಿಕ ಅಸಮಾನತೆಗೆ ಕಲ್ಯಾಣ ಕರ್ನಾಟಕದ ಪ್ರದೇಶವನ್ನು ಉದಾಹರಿಸಿದರಲ್ಲದೆ ರಾಜ್ಯ ನಗರೀಕರಣದ ಸವಾಲುಗಳನ್ನು ಎದುರಿಸುತ್ತಿವೆ ಎಂದರು.

ಮುಂದಿನ ಐದು ವರ್ಷಗಳ ಅವಧಿಯಲ್ಲಿ ಬೆಂಗಳೂರು ಅಭಿವೃದ್ಧಿಗೆ ರೂ.55586 ಕೋಟಿ ರೂ. ಬಂಡವಾಳ ಅಗತ್ಯವಿದೆ. ಇದರಲ್ಲಿ ನಾವು ಕೇಂದ್ರದಿಂದ ನಾವು ರೂ.27793 ಕೋಟಿ ಅನುದಾನ ಒದಗಿಸಲು ಮನವಿ ಮಾಡುತ್ತೇವೆ. ಇದೇ ರೀತಿ ಕಲ್ಯಾಣ ಕರ್ನಾಟಕದ ಅಸಮತೋಲನ ನಿವಾರಣೆ ಮಾಡಲು ರಾಜ್ಯ ರೂ. 25 ಸಾವಿರ ಕೋಟಿ ಹೂಡಿಕೆ ಮಾಡುತ್ತಿದ್ದು, ಇದಕ್ಕೆ ಮುಂದಿನ ಐದು ವರ್ಷಗಳ ಅವಧಿಯಲ್ಲಿ 16ನೇ ಹಣಕಾಸು ಆಯೋಗ ರೂ.25 ಸಾವಿರ ಕೋಟಿ ಹೊಂದಾಣಿಕೆ ಅನುದಾನ ಒದಗಿಸಬೇಕೆಂದು ಸಿದ್ದರಾಮಯ್ಯ ಮನವಿ ಮಾಡಿದರು. ಅತ್ಯಂತ ಸೂಕ್ಷ್ಮ ಪ್ರದೇಶವಾಗಿರುವ ಪಶ್ಚಿಮ ಘಟ್ಟ ವಲಯದಲ್ಲಿ ಪರಿಣಾಮಕಾರಿಯಾಗಿ ವಿಪತ್ತು ನಿರ್ವಹಣೆ ಮತ್ತು ಪರಿಹಾರ ಮತ್ತು ಪುನರ್‌ ವಸತಿಯನ್ನು ಖಾತ್ರಿಪಡಿಸಲು ರೂ. 10ಸಾವಿರ ಕೋಟಿ ಅನುದಾನ ಒದಗಿಸಬೇಕು ಎಂದು ಅವರು ಹೇಳಿದರು.

Tags:    

Similar News