ರಾಜ್ಯದಲ್ಲಿ ಲೈಂಗಿಕ ಅಲ್ಪಸಂಖ್ಯಾತರು ಮತ್ತು ದೇವದಾಸಿ ಮಹಿಳೆಯರ ಸಮೀಕ್ಷೆಗೆ ಸಿದ್ದತೆ
ರಾಜ್ಯಾದ್ಯಂತ ಎಲ್ಲಾ ತಾಲೂಕು ಹಾಗೂ ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಲೈಂಗಿಕ ಅಲ್ಪಸಂಖ್ಯಾತರ ಸಮೀಕ್ಷೆ ನಡೆಯಲಿದೆ.;
ಮುಖ್ಯಮಂತ್ರಿ ಸಿದ್ದರಾಮಯ್ಯ ಸಮೀಕ್ಷೆಯ ಪೋಸ್ಟರ್ ಬಿಡುಗಡೆ ಮಾಡಿದರು.
ರಾಜ್ಯ ಸರ್ಕಾರವು ಸೆಪ್ಟೆಂಬರ್ 15ರಿಂದ ಲೈಂಗಿಕ ಅಲ್ಪಸಂಖ್ಯಾತರು ಹಾಗೂ ದೇವದಾಸಿ ಮಹಿಳೆಯರ ಸಮೀಕ್ಷೆ ನಡೆಸಲು ನಿರ್ಧರಿಸಿದೆ.
ಈ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಕಚೇರಿ ಪ್ರಕಟಣೆ ಬಿಡುಗಡೆ ಮಾಡಿದ್ದು, ಸಮೀಕ್ಷೆಗಳ ಉದ್ದೇಶ ಲೈಂಗಿಕ ಅಲ್ಪಸಂಖ್ಯಾತರು ಹಾಗೂ ದೇವದಾಸಿ ಮಹಿಳೆಯರ ಸಾಮಾಜಿಕ-ಆರ್ಥಿಕ ಸ್ಥಿತಿಗತಿಗಳ ಕುರಿತು ನಿಖರವಾದ ಮಾಹಿತಿಯನ್ನು ಸಂಗ್ರಹಿಸಿ, ಅವರಿಗೆ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಪುನರ್ವಸತಿ ಒದಗಿಸುವುದಾಗಿದೆ ಎಂದು ತಿಳಿಸಿದೆ.
ರಾಜ್ಯಾದ್ಯಂತ ಎಲ್ಲಾ ತಾಲೂಕು ಹಾಗೂ ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಲೈಂಗಿಕ ಅಲ್ಪಸಂಖ್ಯಾತರ ಸಮೀಕ್ಷೆ ನಡೆಯಲಿದೆ. ಈ ಸಮೀಕ್ಷೆಯನ್ನು ತೃತೀಯ ಲಿಂಗಿಗಳೇ ನಡೆಸಲಿದ್ದು, ಮೊಬೈಲ್ ಅಪ್ಲಿಕೇಶನ್ ಮೂಲಕ ಮಾಹಿತಿಯನ್ನು ದಾಖಲಿಸಲಾಗುತ್ತದೆ. ಜಿಲ್ಲಾಧಿಕಾರಿಗಳ ನೇತೃತ್ವದ ಸಮಿತಿಗಳು ಹಾಗೂ ಲೈಂಗಿಕ ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಗಳ ಪ್ರತಿನಿಧಿಗಳು ಈ ಪ್ರಕ್ರಿಯೆಯನ್ನು ಮೇಲ್ವಿಚಾರಣೆ ಮಾಡಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ದೇವದಾಸಿ ಮಹಿಳೆಯರ ಮರುಸಮೀಕ್ಷೆ 15 ಜಿಲ್ಲೆಗಳಾದ ಬೆಳಗಾವಿ, ವಿಜಯಪುರ, ಬಾಗಲಕೋಟೆ, ರಾಯಚೂರು, ಕೊಪ್ಪಳ, ಧಾರವಾಡ, ಹಾವೇರಿ, ಗದಗ, ಕಲಬುರಗಿ, ಯಾದಗಿರಿ, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ಬಳ್ಳಾರಿ ಮತ್ತು ವಿಜಯನಗರದಲ್ಲಿ ಜರುಗಲಿದೆ. ಈ ಸಮೀಕ್ಷೆಯನ್ನು ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿಗಳ ಕಚೇರಿಗಳಲ್ಲಿ ನಡೆಸಲಾಗುವುದು. ದೇವದಾಸಿ ಪುನರ್ವಸತಿ ಯೋಜನಾ ಘಟಕದ ಅಧಿಕಾರಿ ಮಟ್ಟದ ಸಿಬ್ಬಂದಿ ಸಮೀಕ್ಷೆಯಲ್ಲಿ ಭಾಗವಹಿಸಲಿದ್ದಾರೆ.
ಈ ಎರಡೂ ಸಮೀಕ್ಷೆಗಳನ್ನು 45 ದಿನಗಳಲ್ಲಿ ಪೂರ್ಣಗೊಳಿಸಲಾಗುವುದಾಗಿ ಪ್ರಕಟಣೆ ತಿಳಿಸಿದೆ. ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮೀಕ್ಷೆಯ ಪೋಸ್ಟರ್‌ಗಳನ್ನು ಬಿಡುಗಡೆ ಮಾಡಿದ್ದು, ಸಮೀಕ್ಷೆಗಳು ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಆಶ್ರಯದಲ್ಲಿ ನಡೆಯಲಿವೆ.