ಕೇಂದ್ರಕ್ಕೆ ರಾಜ್ಯ ಸರ್ಕಾರ ಸೆಡ್ಡು: ಸಿಬಿಐ ತನಿಖೆಗೆ ಇದ್ದ ʼಸಾಮಾನ್ಯ ಒಪ್ಪಿಗೆʼ ವಾಪಸ್‌ ಪಡೆದ ಸಚಿವ ಸಂಪುಟ

ಕೇಂದ್ರ ಸರ್ಕಾರ ತನ್ನ ಅಧೀನದ ತನಿಖಾ ಸಂಸ್ಥೆಗಳನ್ನು ವಿವೇಚನೆಯಿಂದ ಬಳಸುತ್ತಿಲ್ಲ ಎಂಬುದು ಸ್ಪಷ್ಟವಾದ ಕಾರಣ ಸಿಬಿಐಗೆ ನೀಡಿದ್ದ ಸಾಮಾನ್ಯ ಒಪ್ಪಿಗೆಯನ್ನು (ಜನರಲ್‌ ಕನ್ಸೆಂಟ್) ಹಿಂಪಡೆಯಲು ತೀರ್ಮಾನಿಸಲಾಗಿದೆ;

Update: 2024-09-26 16:08 GMT

ಮಹತ್ವದ ಬೆಳವಣಿಗೆಯಲ್ಲಿ ರಾಜ್ಯದಲ್ಲಿನ ಪ್ರಕರಣಗಳನ್ನು ತನಿಖೆ ಮಾಡಲು ಸಿಬಿಐಗೆ ನೀಡಿದ್ದ ಸಾಮಾನ್ಯ ಒಪ್ಪಿಗೆಯನ್ನು ಹಿಂಪಡೆಯುವುದಾಗಿ ರಾಜ್ಯ ಸರ್ಕಾರ ಘೋಷಿಸಿದೆ. ಸಚಿವ ಸಂಪುಟಸಭೆಯಲ್ಲಿ ಈ ಮಹತ್ವದ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಆ ಮೂಲಕ ರಾಜ್ಯದ ಪ್ರಕರಣಗಳಲ್ಲಿ ಸಿಬಿಐ ತನಿಖೆ ನಡೆಸುವುದನ್ನು ತಡೆಯಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ವಿಶ್ಲೇಷಿಸಲಾಗಿದೆ.

ದೆಹಲಿ ವಿಶೇಷ ಪೊಲೀಸ್ ಸ್ಥಾಪನೆ ಕಾಯ್ದೆ 1946ರ ಅಡಿ ಕರ್ನಾಟಕ ರಾಜ್ಯದಲ್ಲಿ ಕ್ರಿಮಿನಲ್ ಪ್ರಕರಣಗಳ ತನಿಖೆಗೆ ಸಿಬಿಐಗೆ ಸಾಮಾನ್ಯ ಒಪ್ಪಿಗೆ ನೀಡುವ ಅಧಿಸೂಚನೆಯನ್ನು ಹಿಂಪಡೆಯಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌.ಕೆ ಪಾಟೀಲ್ ಹೇಳಿದ

ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು.

ದೆಹಲಿ ವಿಶೇಷ ಪೊಲೀಸ್ ಸ್ಥಾಪನೆ (ಡಿಎಸ್‌ಪಿಇ) ಕಾಯಿದೆ 1946ರ ಸೆಕ್ಷನ್ 6ರ ಪ್ರಕಾರ, ಸಿಬಿಐ ತನ್ನ ಅಧಿಕಾರ ವ್ಯಾಪ್ತಿಯಲ್ಲಿ ತನಿಖೆ ನಡೆಸಲು ಆಯಾ ರಾಜ್ಯ ಸರ್ಕಾರಗಳಿಂದ ಒಪ್ಪಿಗೆ ಪಡೆಯಬೇಕು. ಕೇಂದ್ರ ಸರ್ಕಾರ ತನ್ನ ಅಧೀನದ ತನಿಖಾ ಸಂಸ್ಥೆಗಳನ್ನು ವಿವೇಚನೆಯಿಂದ ಬಳಸುತ್ತಿಲ್ಲ ಎಂಬುದು ಸ್ಪಷ್ಟವಾದ ಕಾರಣ ಸಿಬಿಐಗೆ ನೀಡಿದ್ದ ಸಾಮಾನ್ಯ ಒಪ್ಪಿಗೆಯನ್ನು (ಜನರಲ್‌ ಕನ್ಸೆಂಟ್) ಹಿಂಪಡೆಯಲು ತೀರ್ಮಾನಿಸಲಾಗಿದೆ. ಪ್ರಕರಣವಾರು ನಾವು ಪರಿಶೀಲಿಸುತ್ತೇವೆ. ಅಗತ್ಯಬಿದ್ದರೆ ಸಿಬಿಐ ತನಿಖೆಗೆ ಒಪ್ಪಿಸುತ್ತೇವೆ ಎಂದು ತಿಳಿಸಿದರು.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಪ್ರಕರಣದಲ್ಲಿ ತನಿಖೆ ಎದುರಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ರಕ್ಷಿಸಲು ಈ ರೀತಿ ಮಾಡಲಾಗುತ್ತಿದೆಯೇ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಪಾಟೀಲ್, ‘ಸಿಎಂ ಮೇಲೆ ಲೋಕಾಯುಕ್ತ ತನಿಖೆಗೆ ನ್ಯಾಯಾಲಯದ ಆದೇಶವಿದೆ. ಹಾಗಾಗಿ ಅಂತಹ ಪ್ರಶ್ನೆಯೇ ಉದ್ಭವಿಸಲ್ಲ. ಕೇಂದ್ರೀಯ ತನಿಖಾ ಸಂಸ್ಥೆಯನ್ನು ಹಲವು ಪ್ರಕರಣಗಳಲ್ಲಿ ದುರುಪಯೋಗಪಡಿಸಿಕೊಳ್ಳೂತ್ತಿದೆ ಎಂಬ ಆತಂಕ ವ್ಯಕ್ತವಾದ ಹಿನ್ನೆಲೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದರು.

ಗಣಿಗಾರಿಕೆ: ಆರೋಪಪಟ್ಟಿ ಸಲ್ಲಿಸಲು ಸಿಬಿಐ ನಿರಾಕರಣೆ

ರಾಜ್ಯ ಸರ್ಕಾರ ಸಿಬಿಐಗೆ ನೀಡಿದ್ದ ಹಲವು ಪ್ರಕರಣಗಳಲ್ಲಿ ಚಾರ್ಜ್‌ಶೀಟ್ ಸಲ್ಲಿಕೆಯಾಗಿಲ್ಲ. ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ತನಿಖಾ ಸಂಸ್ಥೆ ಸಿಬಿಐ, ಆರೋಪಪಟ್ಟಿ ಸಲ್ಲಿಸಲು ನಿರಾಕರಿಸಿರುವುದು ನಮ್ಮ ಮುಂದಿದೆ ಎಂದು ಸಮಜಾಯಿಷಿ ನೀಡಿದರು.

ವಾಲ್ಮೀಕಿ ನಿಗಮದ ಅನುದಾನ ದುರ್ಬಳಕೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕೆಂಬ ಬೇಡಿಕೆಯನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಈ ರೀತಿ ಮಾಡಿದೆಯೇ ಎಂಬ ಮತ್ತೊಂದು ಪ್ರಶ್ನೆಗೆ ಉತ್ತರಿಸಿದ ಸಚಿವರು, ವಿಷಯ ನ್ಯಾಯಾಲಯದಲ್ಲಿರುವುದರಿಂದ ಅದಕ್ಕೂ ಇದಕ್ಕೂ ಯಾವುದೇ ಸಂಬಂಧವಿಲ್ಲ. ನ್ಯಾಯಾಲಯ ನಿರ್ಧರಿಸುತ್ತದೆ ಎಂದು ಹೇಳಿದರು.

Tags:    

Similar News