ಗ್ಯಾರಂಟಿ ಯೋಜನೆಗಳು ದೇಶಕ್ಕೆ ಮಾದರಿ: ಥಾವರ್‌ ಚಂದ್‌ ಗೆಹ್ಲೋಟ್

ಇಡೀ ದೇಶಕ್ಕೆ ಕರ್ನಾಟಕ ಸರ್ಕಾರದ ಗ್ಯಾರಂಟಿ ಮಾದರಿಯಾಗಿವೆ. ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಬಡವರಿಗೆ ತೃಪ್ತಿ ನೀಡಿವೆ ಎಂದು ಬಜೆಟ್‌ ಅಧಿವೇಶನದ ಭಾಷಣದಲ್ಲಿ ರಾಜ್ಯಪಾಲರು ಬಣ್ಣಿಸಿದ್ದಾರೆ

Update: 2024-02-12 10:26 GMT
ಥಾವರ್‌ ಚಂದ್‌ ಗೆಹ್ಲೋಟ್‌ (ಫೋಟೋ: rajbhavan.karnataka.gov.in)

ಬೆಂಗಳೂರು: ಇಡೀ ದೇಶಕ್ಕೆ ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳು ಮಾದರಿಯಾಗಿವೆ ಎಂದು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಸರ್ಕಾರದ ಕಾರ್ಯಕ್ರಮಗಳನ್ನು ಬಣ್ಣಿಸಿದ್ದಾರೆ.

ಕರ್ನಾಟಕ ವಿಧಾನ ಮಂಡಲದ ಬಜೆಟ್ ಅಧಿವೇಶನದ ಆರಂಭದ ದಿನ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಿದ ಅವರು, ಇಡೀ ದೇಶಕ್ಕೆ ಕರ್ನಾಟಕ ಸರ್ಕಾರದ ಗ್ಯಾರಂಟಿ ಮಾದರಿಯಾಗಿವೆ. ಶಕ್ತಿ, ಅನ್ನಭಾಗ್ಯ, ಯುವನಿಧಿ, ಗೃಹಲಕ್ಷ್ಮೀ, ಗೃಹಜ್ಯೋತಿ ಯಶಸ್ವಿಯಾಗಿ ಜಾರಿಗೊಳಿಸಲಾಗಿದೆ. ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಬಡವರಿಗೆ ತೃಪ್ತಿ ನೀಡಿವೆ ಎಂದಿದ್ದಾರೆ.

ಹೆಚ್ಚುತ್ತಿರುವ ಆರ್ಥಿಕ ಅಸಮಾನತೆಯಿಂದಾಗಿ ಸಂಕಷ್ಟದಲ್ಲಿರುವ ಬಡವರಿಗೆ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಸಾಂತ್ವನವನ್ನು ಒದಗಿಸಿವೆ. ಈ ಯೋಜನೆಗಳಿಂದಾಗಿ 1.2 ಕೋಟಿಗೂ ಹೆಚ್ಚು ಜನರು ಬಡತನ ರೇಖೆಯಿಂದ ಮಧ್ಯಮ ವರ್ಗದ ಸ್ಥಿತಿಗೆ ತಲುಪುತ್ತಿವೆ. ಸರ್ಕಾರದ ಒಂದು ನಿರ್ಣಯದಿಂದ ರಾಜ್ಯದ 5 ಕೋಟಿಗೂ ಹೆಚ್ಚು ಜನರ ಆರ್ಥಿಕ ಸ್ಥಿತಿ ಅಲ್ಪ ಅವಧಿಯಲ್ಲೇ ಸುಧಾರಿಸಿರುವುದು ಜಾಗತಿಕ ದಾಖಲೆ ಎಂದು ಹೇಳಿದರು.

ನನ್ನ ಸರ್ಕಾರ ಭವಿಷ್ಯದತ್ತ ದೃಷ್ಟಿ ನೆಟ್ಟಿರುವ ಸರ್ಕಾರ. ಈ ಎಂಟು ತಿಂಗಳಲ್ಲಿ 77,000 ಕೋಟಿಗೂ ಹೆಚ್ಚು ಬಂಡವಾಳವು ರಾಜ್ಯಕ್ಕೆ ಹರಿದು ಬಂದಿದೆ. ಜನವರಿ ತಿಂಗಳ ಅಂತ್ಯದವರೆಗೆ ನಮ್ಮ ರಾಜ್ಯದ ಜಿಎಸ್‌ಟಿ ಸಂಗ್ರಹಣೆಯ ಬೆಳವಣಿಗೆ ದರವು ಇಡೀ ದೇಶದಲ್ಲಿಯೇ ಪ್ರಥಮ ಸ್ಥಾನದಲ್ಲಿದೆ. ಬರಗಾಲವಿದ್ದರೂ ರಸ್ತೆ, ನೀರು, ಶಿಕ್ಷಣ, ಆರೋಗ್ಯ, ಕೃಷಿ, ತೋಟಗಾರಿಕೆ, ಹೈನುಗಾರಿಕೆ, ಕೈಗಾರಿಕೆ ಮುಂತಾದ ಕ್ಷೇತ್ರಗಳಲ್ಲಿ ರಾಜ್ಯವು ದಾಖಲಾರ್ಹ ಮಟ್ಟದಲ್ಲಿ ಅಭಿವೃದ್ಧಿ ಸಾಧಿಸುತ್ತಿದೆ ಎಂದು ಅವರು ತಿಳಿಸಿದರು.

ತೆರಿಗೆ ಹಂಚಿಕೆ: ನ್ಯಾಯ ಸಿಗುತ್ತಿಲ್ಲ

ವಿವಿಧ ಮೂಲಗಳಿಂದ ಸಿಗಬೇಕಾದಷ್ಟು ಸಂಪನ್ಮೂಲಗಳು ಸಿಗುತ್ತಿಲ್ಲ. ದೇಶದಲ್ಲಿಯೇ ಅತಿ ಹೆಚ್ಚು ತೆರಿಗೆ ಸಂಗ್ರಹಿಸಿ ಕೊಡುವ ರಾಜ್ಯಗಳಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಆದರೆ ತೆರಿಗೆಯ ಪಾಲು ಪಡೆಯುವ ವಿಚಾರದಲ್ಲಿ 10ನೇ ಸ್ಥಾನದಲ್ಲಿದೆ. ಈ ಹಿನ್ನಲೆಯಲ್ಲಿ ನಮಗೆ ನ್ಯಾಯ ಮತ್ತು ನ್ಯಾಯಯುತವಾಗಿ ಸಿಗಬೇಕಾದ ಪಾಲನ್ನು ಪಡೆಯಲು ನನ್ನ ಸರ್ಕಾರವು ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡುತ್ತಿದೆ.

ಹೊಸ ಸರ್ಕಾರ ರಚನೆಯಾದ ನಂತರ ಕಂದಾಯ ಇಲಾಖೆಯ ಜಿಲ್ಲಾಧಿಕಾರಿ ಉಪವಿಭಾಗಾಧಿಕಾರಿಗಳಲ್ಲಿ ಒಟ್ಟು 93,350 ಪ್ರಕರಣಗಳು ಬಾಕಿ ಇದ್ದು, ಈ ಪೈಕಿ 2024 ರ ಫೆಬ್ರವರಿ 5 ರ ವರೆಗೆ 84,253 ಪ್ರಕರಣಗಳನ್ನು ಇತ್ಯರ್ಥ ಮಾಡಲಾಗಿದೆ. 5787 ಪ್ರಕರಣಗಳು ಬಾಕಿ ಉಳಿದಿವೆ ಎಂದು ಅವರು ತಿಳಿಸಿದರು.

ಬಸವಣ್ಣನವರನ್ನು ನಾಡಿನ ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದ್ದೇವೆ. ಮನುವಾದದ ವಿರುದ್ಧ ಚಳವಳಿ ರೂಪಿಸಿ ಸಮಾನತೆಯ ಕನಸನ್ನು ಬಿತ್ತಿದ್ದರು ಬಸವಣ್ಣ. ಅಲ್ಲಮಪ್ರಭು, ಬಸವಣ್ಣನವರನ್ನು ಸ್ಫೂರ್ತಿದಾಯಕವಾಗಿ ತೆಗೆದುಕೊಳ್ಳಬೇಕಿದೆ ಎಂದು ಅವರು ಹೇಳಿದ್ದಾರೆ.

ಸಂವಿಧಾನದ ಪ್ರಕಾರ ಚುನಾವಣೆಗಳಲ್ಲಿ ಧರ್ಮ, ಜಾತಿ ಬಳಕೆಗೆ ನಿರ್ಬಂಧಗಳಿವೆ. ಯಾವುದೇ ಚಟುವಟಿಕೆಗಳು ಸಂವಿಧಾನಕ್ಕೆ ಅನುಗುಣವಾಗಿರೋದನ್ನ ಖಚಿತಪಡಿಸಿಕೊಳ್ಳಬೇಕು. ಸಾಂವಿಧಾನಿಕ ಸಂಸ್ಥೆಗಳು ಯಾವುದೇ ಕಾರಣಕ್ಕೂ ದುರ್ಬಲವಾಗದಂತೆ ರಕ್ಷಿಸಬೇಕು. ನಮಗೆ ಸಂವಿಧಾನವೇ ರಾಷ್ಟ್ರೀಯ ಧರ್ಮ. ಸಂವಿಧಾನವನ್ನು ನಾವು ರಕ್ಷಿಸಿದರೆ ಸಂವಿಧಾನವು ನಮ್ಮನ್ನು ರಕ್ಷಿಸುತ್ತದೆ ಎಂದು ರಾಜ್ಯಪಾಲರು ನುಡಿದಿದ್ದಾರೆ.

Tags:    

Similar News