ವಿವಿಧ ಹುದ್ದೆಗಳಿಗೆ ನೇಮಕಾತಿ | ಪಠ್ಯಕ್ರಮದಂತೆ ಪರೀಕ್ಷೆ ತಯಾರಿಗೆ ಕೆಇಎ ಸೂಚನೆ

ಕೃಷಿ ಮಾರಾಟ ಇಲಾಖೆ, ತಾಂತ್ರಿಕ ಶಿಕ್ಷಣ ಇಲಾಖೆ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ, ವಾಯವ್ಯ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ ಸಂಸ್ಥೆಗಳಲ್ಲಿ ನೇಮಕಾತಿ ಪ್ರಕ್ರಿಯೆ ನಡೆಯಲಿದೆ.;

Update: 2025-01-03 14:24 GMT
ಕರ್ನಾಟಕ ಪರೀಕ್ಷಾ ಪ್ರಾಧಿಕಾರ

ರಾಜ್ಯ ಸರ್ಕಾರದ ವಿವಿಧ ಇಲಾಖೆ ಹಾಗೂ ನಿಗಮಗಳಲ್ಲಿ 747 ವಿವಿಧ ವೃಂದದ ಹುದ್ದೆಗಳ ಭರ್ತಿಗೆ ನೇಮಕಾತಿ ಪ್ರಕ್ರಿಯೆ ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಸಿದ್ಧತೆ ನಡೆಸಿದೆ. ವಿವಿಧ ವೃಂದದ ಹುದ್ದೆಗಳ ಭರ್ತಿಗಾಗಿ ಇಲಾಖೆ ಹಾಗೂ ನಿಗಮಗಳು ಪ್ರಾಧಿಕಾರಕ್ಕೆ ಕೋರಿಕೆ ಸಲ್ಲಿಸಿದ್ದವು. ಆದರೆ, ಈ ಬಗ್ಗೆ ಸರ್ಕಾರ ಇನ್ನೂ ಅಂತಿಮ ಅಧಿಸೂಚನೆ ಹೊರಡಿಸಿಲ್ಲ. ಆದಾಗ್ಯೂ ಪರೀಕ್ಷೆಗೆ ಸಿದ್ಧತೆ ಆರಂಭಿಸುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಭ್ಯರ್ಥಿಗಳಿಗೆ ಸಲಹೆ ನೀಡಿದೆ. ಕೆಇಎ ವೆಬ್‌ಸೈಟ್‌ನಲ್ಲಿ ನೀಡಿರುವ ನಿಗದಿತ ಪಠ್ಯಕ್ರಮದ ಪ್ರಕಾರ ಪರೀಕ್ಷೆಗೆ ಸಿದ್ಧತೆ ನಡೆಸುವಂತೆ ಸೂಚಿಸಿದೆ. 

ಯಾವ ಇಲಾಖೆ ಹುದ್ದೆಗಳ ಭರ್ತಿ

ಕೃಷಿ ಮಾರಾಟ ಇಲಾಖೆ, ತಾಂತ್ರಿಕ ಶಿಕ್ಷಣ ಇಲಾಖೆ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ, ವಾಯವ್ಯ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ ಸಂಸ್ಥೆಗಳಲ್ಲಿ ನೇಮಕಾತಿ ಪ್ರಕ್ರಿಯೆ ನಡೆಯಲಿದೆ.

ವಿವಿಧ ಇಲಾಖೆ ಹಾಗೂ ನಿಗಮಗಳ ಕೋರಿಕೆಯಂತೆ ಸಂಕ್ಷಿಪ್ತ ಅಧಿಸೂಚನೆ ಹೊರಡಿಸಲಾಗಿತ್ತು. ಆದರೆ, ಕೆಲ ಇಲಾಖೆ ಹಾಗೂ ನಿಗಮಗಳು ವಿವರವಾದ ಅಧಿಸೂಚನೆ ಹೊರಡಿಸಲು ಸಮಯ ಕೋರಿದ ಹಿನ್ನೆಲೆಯಲ್ಲಿ ನೇಮಕಾತಿ ಪ್ರಕ್ರಿಯೆಗೆ ತಡೆ ನೀಡಲಾಗಿದೆ. ಈ ಸಂಬಂಧ ವಿವರವಾದ ಅಧಿಸೂಚನೆ ಹೊರಡಿಸಿದ ಬಳಿಕ ಅರ್ಜಿ ಆಹ್ವಾನಿಸಿ, ಲಿಖಿತ ಪರೀಕ್ಷೆ ನಡೆಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಒಳ ಮೀಸಲಾತಿ ಇತ್ಯರ್ಥವಾಗುವವರೆಗೂ ತಡೆ

ಇನ್ನೊಂದೆಡೆ ರಾಜ್ಯ ಸರ್ಕಾರವು ಒಳಮೀಸಲಾತಿ ಸಂಬಂಧ ತೀರ್ಮಾನ ತೆಗೆದುಕೊಳ್ಳುವವರೆಗೂ ನೇಮಕಾತಿ ಪ್ರಕ್ರಿಯೆಗೆ ತಡೆ ನೀಡಿ ಸುತ್ತೋಲೆ ಹೊರಡಿಸಿದೆ. ಹೀಗಾಗಿ ಸರ್ಕಾರ ಅನುಮತಿ ದೊರೆತ ನಂತರ ಆದಷ್ಟು ಬೇಗ ಪರೀಕ್ಷೆ ನಡೆಸಲಾಗುತ್ತದೆ. ಆಕಾಂಕ್ಷಿ ಅಭ್ಯರ್ಥಿಗಳು ನಿಗದಿತ ಪಠ್ಯಕ್ರಮದ ಪ್ರಕಾರ ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಪ್ರಸನ್ನ  ಸಲಹೆ ನೀಡಿದ್ದಾರೆ.

ಕೆಲವು ಹುದ್ದೆಗಳ ಮೀಸಲಾತಿ, ವರ್ಗೀಕರಣ ಹಾಗೂ ಅಧಿಸೂಚನೆಗಳಲ್ಲಿನ ನಿಬಂಧನೆಗಳನ್ನು ಪರಿಷ್ಕರಿಸಲು ಇಲಾಖೆ ಹಾಗೂ ನಿಗಮಗಳು ಸಮಯಾವಕಾಶ ಕೋರಿ ಪ್ರಾಧಿಕಾರಕ್ಕೆ ಕೋರಿಕೆ ಸಲ್ಲಿಸಿವೆ. ಇನ್ನೂ ಕೆಲವು ಇಲಾಖೆಗಳು ಹಣಕಾಸು ಇಲಾಖೆಯ ಅನುಮತಿ ಪಡೆಯಬೇಕು ಎನ್ನುವ ಕಾರಣ ನೀಡಿವೆ. ಹೀಗಾಗಿ ಅರ್ಜಿ ಆಹ್ವಾನಿಸಿಲ್ಲ ಎಂದು ಮಾಹಿತಿ ನೀಡಿದ್ದಾರೆ.

Tags:    

Similar News