ಕೊಡಗಿನಲ್ಲಿ ಭಾರೀ ಮಳೆ; ಹಾರಂಗಿ ಜಲಾಶಯ ಬಹುತೇಕ ಭರ್ತಿ

ಹಾರಂಗಿ ಜಲಾಶಯದಿಂದ 4,000 ಕ್ಯೂಸೆಕ್ ನೀರು ಬಿಡುಗಡೆಯಾಗುತ್ತಿರುವ ಹಿನ್ನೆಲೆಯಲ್ಲಿ, ಜಿಲ್ಲಾಡಳಿತವು ಕಾವೇರಿ ನದಿ ಪಾತ್ರದಲ್ಲಿ ವಾಸಿಸುವ ಜನರಿಗೆ ಎಚ್ಚರಿಕೆ ನೀಡಿದೆ.;

Update: 2025-06-15 06:27 GMT

ಚಿತ್ರ ಕೃಪೆ- ವಿರೇನ್​ ಪಟೇಲ್​ ಎಕ್ಸ್ ಖಾತೆಯಿಂದ

ಕೊಡಗು ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕುಶಾಲನಗರ ಸಮೀಪದ ಹಾರಂಗಿ ಜಲಾಶಯಕ್ಕೆ ನೀರಿನ ಒಳಹರಿವು ಗಣನೀಯವಾಗಿ ಹೆಚ್ಚಾಗಿದೆ.ಜಲಾಶಯವು ಬಹುತೇಕ ಭರ್ತಿಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ 4,000 ಕ್ಯೂಸೆಕ್ ನೀರನ್ನು ಕಾವೇರಿ ನದಿಗೆ ಹರಿಸಲಾಗುತ್ತಿದೆ.

ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಪ್ರಸ್ತುತ 2,852 ಅಡಿಗಳಷ್ಟು ನೀರು ಸಂಗ್ರಹವಾಗಿದೆ. ಪೂರ್ಣ ಸಾಮರ್ಥ್ಯಕ್ಕೆ ತಲುಪಲು ಕೇವಲ 7 ಅಡಿಗಳು ಮಾತ್ರ ಬಾಕಿ ಉಳಿದಿವೆ. 8.5 ಟಿಎಂಸಿ ಸಾಮರ್ಥ್ಯದ ಈ ಜಲಾಶಯದಲ್ಲಿ ಸುಮಾರು 1 ಟಿಎಂಸಿ ಹೂಳು ತುಂಬಿರುವ ಕಾರಣ, ಪ್ರಸ್ತುತ ನೀರಿನ ಸಂಗ್ರಹಣಾ ಸಾಮರ್ಥ್ಯ 7.5 ಟಿಎಂಸಿಗೆ ಇಳಿದಿದೆ. ಒಳಹರಿವಿನ ಪ್ರಮಾಣ ಹೆಚ್ಚಾಗುತ್ತಿರುವುದರಿಂದ, ಜಲಾಶಯದ ಮಟ್ಟವನ್ನು ನಿಯಂತ್ರಿಸುವ ಸಲುವಾಗಿ ಜಲಾಶಯದ ನಾಲ್ಕು ಕ್ರೆಸ್ಟ್ ಗೇಟ್‌ಗಳನ್ನು ತೆರೆದು ನೀರನ್ನು ಕಾವೇರಿ ನದಿಗೆ ಹರಿಸಲಾಗುತ್ತಿದೆ.

ನದಿ ಪಾತ್ರದ ಜನರಿಗೆ ಎಚ್ಚರಿಕೆ

ಹಾರಂಗಿ ಜಲಾಶಯದಿಂದ 4,000 ಕ್ಯೂಸೆಕ್ ನೀರು ಬಿಡುಗಡೆಯಾಗುತ್ತಿರುವ ಹಿನ್ನೆಲೆಯಲ್ಲಿ, ಜಿಲ್ಲಾಡಳಿತವು ಕಾವೇರಿ ನದಿ ಪಾತ್ರದಲ್ಲಿ ವಾಸಿಸುವ ಜನರಿಗೆ ಎಚ್ಚರಿಕೆ ನೀಡಿದೆ. ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗುವ ಸಾಧ್ಯತೆಯಿರುವುದರಿಂದ, ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಮತ್ತು ನದಿಯ ದಡಕ್ಕೆ ತೆರಳದಂತೆ ಸೂಚಿಸಿದೆ. ಕೊಡಗಿನ ಸಾರ್ವಜನಿಕರು ಈ ಸಂದರ್ಭದಲ್ಲಿ ಹೆಚ್ಚು ಜಾಗರೂಕರಾಗಿರುವಂತೆ ಜಿಲ್ಲಾಡಳಿತ ಮನವಿ ಮಾಡಿದೆ. 

Tags:    

Similar News