ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಚರ್ಚೆ ನಿಜ: ಸಚಿವ ಸತೀಶ್ ಜಾರಕಿಹೊಳಿ
ಸಚಿವ ಸಂಪುಟ ವಿಸ್ತರಣೆಯ ಗೊಂದಲಗಳ ಕುರಿತು ಪ್ರತಿಕ್ರಿಯಿಸಿದ ಅವರು, "ಸಂಪುಟ ವಿಸ್ತರಣೆ ನಮ್ಮ ಕೈಯಲ್ಲಿಲ್ಲ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಸ್ಪಷ್ಟನೆ ನೀಡಬೇಕು ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.
ಡಿಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಸಚಿವ ಸತೀಶ್ ಜಾರಕಿಹೊಳಿ
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಸ್ಥಾನದ ಬದಲಾವಣೆ ಕುರಿತು ಪಕ್ಷದೊಳಗೆ ಚರ್ಚೆ ನಡೆಯುತ್ತಿರುವುದು ಸತ್ಯ. ಆದರೆ, ಈ ಬಗ್ಗೆ ಅಂತಿಮ ತೀರ್ಮಾನವನ್ನು ಹೈಕಮಾಂಡ್ ತೆಗೆದುಕೊಳ್ಳಲಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ.
ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಪಕ್ಷದಲ್ಲಿ ಯಾವುದೇ ವಿಚಾರದ ಬಗ್ಗೆ ಚರ್ಚೆ ನಡೆಸಲು ಕಡಿವಾಣವಿಲ್ಲ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆಯೂ ಚರ್ಚೆಗಳು ನಡೆಯುತ್ತಿವೆ. ಆದರೆ, ಈ ವಿಷಯದಲ್ಲಿ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರವೇ ಅಂತಿಮವಾಗಿರುತ್ತದೆ" ಎಂದು ಹೇಳಿದರು.
ಸಂಪುಟ ವಿಸ್ತರಣೆ ಸಿಎಂಗೆ ಬಿಟ್ಟ ವಿಚಾರ
ಸಚಿವ ಸಂಪುಟ ವಿಸ್ತರಣೆಯ ಗೊಂದಲಗಳ ಕುರಿತು ಪ್ರತಿಕ್ರಿಯಿಸಿದ ಅವರು, "ಸಂಪುಟ ವಿಸ್ತರಣೆ ನಮ್ಮ ಕೈಯಲ್ಲಿಲ್ಲ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಸ್ಪಷ್ಟನೆ ನೀಡಬೇಕು. ಆಗ ಮಾತ್ರ ಎಲ್ಲಾ ಊಹಾಪೋಹಗಳಿಗೆ ತೆರೆ ಬೀಳಲಿದೆ. ಸಿಎಂ ಅವರು ದೆಹಲಿಯಲ್ಲಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರೊಂದಿಗೆ ಏನು ಚರ್ಚಿಸಿದ್ದಾರೆ ಎಂಬುದು ನನಗೆ ತಿಳಿದಿಲ್ಲ," ಎಂದರು.
ದೆಹಲಿ ಭೇಟಿಗೆ ರಾಜಕೀಯ ಕಾರಣವಿಲ್ಲ
ತಮ್ಮ ಇತ್ತೀಚಿನ ದೆಹಲಿ ಭೇಟಿಯ ಕುರಿತು ಸ್ಪಷ್ಟನೆ ನೀಡಿದ ಸಚಿವರು, "ವಾಯುವ್ಯ ಸಾರಿಗೆ ನಿಗಮದ ನೂತನ ಉಪಾಧ್ಯಕ್ಷರಾಗಿ ನೇಮಕಗೊಂಡಿರುವ ಸುನೀಲ ಹನುಮಣ್ಣವರ ಅವರೊಂದಿಗೆ ಪಕ್ಷದ ಮುಖಂಡ ಸುರ್ಜೇವಾಲಾ ಅವರನ್ನು ಭೇಟಿ ಮಾಡಿದ್ದೇವೆ ಅಷ್ಟೇ. ಇದರಲ್ಲಿ ಬೇರೆ ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ," ಎಂದು ತಿಳಿಸಿದರು.
ಬಿಹಾರ ಚುನಾವಣೆ ಬಗ್ಗೆ ಆತ್ಮಾವಲೋಕನ
ಇದೇ ವೇಳೆ, ಬಿಹಾರ ಚುನಾವಣಾ ಫಲಿತಾಂಶದ ಬಗ್ಗೆ ಮಾತನಾಡಿದ ಅವರು, "ಬಿಹಾರದಲ್ಲಿ ನಮ್ಮ ಲೆಕ್ಕಾಚಾರ ತಪ್ಪಾಗಿದೆ. ಈ ಫಲಿತಾಂಶದ ಬಗ್ಗೆ ನಾವು ಆತ್ಮಾವಲೋಕನ ಮಾಡಿಕೊಳ್ಳುತ್ತೇವೆ," ಎಂದು ಒಪ್ಪಿಕೊಂಡರು.