ರಾಜ್ಯ ಕಾಂಗ್ರೆಸ್‌ನಲ್ಲಿ ಹೊಸ ತಲ್ಲಣ; ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಸತೀಶ್ ಜಾರಕಿಹೊಳಿ ಆಗ್ರಹ
ಎಐಸಿಸಿ ನಿಯಮಗಳಲ್ಲಿ ಒಬ್ಬರಿಗೆ ಒಂದು ಹುದ್ದೆ ಎಂಬ ನಿಯಮವಿದೆ. ಆದರೆ ರಾಜ್ಯದಲ್ಲಿ ಒಬ್ಬರಿಗೆ ಎರಡು ಹುದ್ದೆ ನೀಡಿರುವುದೇಕೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೆಸರೇಳದೆ ಸಚಿವ ಸತೀಶ್ ಜಾರಕಿಹೊಳಿ ಪ್ರಶ್ನಿಸಿದ್ದಾರೆ.;
ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಹಾಗೂ ಸಚಿವ ಸತೀಶ್ ಜಾರಕಿಹೊಳಿ
ರಾಜ್ಯ ರಾಜಕಾರಣದಲ್ಲಿ ದಿನಕ್ಕೊಂದು ಹೊಸ ಬೆಳವಣಿಗೆಗಳು ನಡೆಯುತ್ತಿದ್ದು, ಶಾಸಕರ ದೂರಿನ ಹಿನ್ನೆಲೆಯಲ್ಲಿ ಸಚಿವರ ಜೊತೆ ಪ್ರತ್ಯೇಕ ಸಭೆಗಳನ್ನು ನಡೆಸುತ್ತಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರ ಬಳಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಕೆಪಿಸಿಸಿ ಅಧ್ಯಕ್ಷರನ್ನು ಬದಲಾವಣೆ ಮಾಡುವಂತೆ ಆಗ್ರಹಿಸಿದ್ದಾರೆ.
ಮಂಗಳವಾರ (ಜುಲೈ 16) ಸುರ್ಜೇವಾಲರೊಂದಿಗೆ ಚರ್ಚೆ ನಡೆಸಿದ ಸಚಿವ ಸತೀಶ್ ಜಾರಕಿಹೊಳಿ, ಎಐಸಿಸಿ ನಿಯಮಗಳ ಪ್ರಕಾರ 'ಒಬ್ಬರಿಗೆ ಒಂದು ಹುದ್ದೆ' ಎಂಬ ನಿಯಮವಿದೆ. ಆದರೆ ರಾಜ್ಯದಲ್ಲಿ ಒಬ್ಬರಿಗೆ ಎರಡು ಹುದ್ದೆಗಳನ್ನು ನೀಡಿರುವುದು ಏಕೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಹೆಸರನ್ನು ನೇರವಾಗಿ ಪ್ರಸ್ತಾಪಿಸದೆ ಪ್ರಶ್ನಿಸಿದ್ದಾರೆ. ಈ ಪ್ರಶ್ನೆಗೆ ಸುರ್ಜೇವಾಲ ಯಾವುದೇ ಪ್ರತಿಕ್ರಿಯೆ ನೀಡದೆ, ಈ ಕುರಿತು ಹೈಕಮಾಂಡ್ ನಿರ್ಧಾರ ಕೈಗೊಳ್ಳಲಿದೆ ಎಂದು ತಿಳಿಸಿದ್ದಾರೆ. ರಾಜ್ಯ ವಿಧಾನಸಭೆ ಚುನಾವಣೆ ನಡೆಸುವಾಗ ಡಿ.ಕೆ. ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿದ್ದರು. ಮುಖ್ಯಮಂತ್ರಿಯಾಗುವ ಆಸೆ ವ್ಯಕ್ತಪಡಿಸಿದ್ದ ಡಿಕೆಶಿಗೆ ಹೈಕಮಾಂಡ್ ಉಪಮುಖ್ಯಮಂತ್ರಿ ಸ್ಥಾನ ನೀಡುವ ಜೊತೆಗೆ ಪಕ್ಷದ ಅಧ್ಯಕ್ಷರಾಗಿಯೂ ಮುಂದುವರಿಯಲು ಸೂಚಿಸಿತ್ತು.
ಕಾಂಗ್ರೆಸ್‌ನಲ್ಲಿ ಬಣ ರಾಜಕೀಯ ಮತ್ತು ಹೊಸ ವಾದ-ಪ್ರತಿವಾದ
ಸರ್ಕಾರ ರಚನೆಯಾಗಿ ವರ್ಷಗಳು ಉರುಳಿದಂತೆ ರಾಜ್ಯ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಣ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬಣಗಳು ಸಕ್ರಿಯವಾಗಿ ವಿಭಿನ್ನ ಹೇಳಿಕೆಗಳನ್ನು ನೀಡುತ್ತಿವೆ. ಇತ್ತೀಚೆಗೆ ಕೆಲವು ಶಾಸಕರು ಡಿಕೆಶಿ ಮುಖ್ಯಮಂತ್ರಿಯಾಗಬೇಕು ಎಂದು ಹೇಳಿಕೆ ನೀಡಿದರೆ, ಸ್ವತಃ ಸಿದ್ದರಾಮಯ್ಯನವರೇ "ನಾನೇ ಪೂರ್ಣಾವಧಿ ಮುಖ್ಯಮಂತ್ರಿ" ಎಂದು ಹೇಳಿಕೆ ನೀಡಿದ್ದರು. ಇದೀಗ ಸಿಎಂ ಬಣದಲ್ಲಿ ಗುರುತಿಸಿಕೊಂಡಿರುವ ಸಚಿವ ಸತೀಶ್ ಜಾರಕಿಹೊಳಿ, ರಾಜ್ಯ ಉಸ್ತುವಾರಿ ಸುರ್ಜೇವಾಲ ಬಳಿ ಕೆಪಿಸಿಸಿ ಅಧ್ಯಕ್ಷರನ್ನು ಬದಲಾಯಿಸುವಂತೆ ಬಹಿರಂಗವಾಗಿ ಹೇಳಿಕೆ ನೀಡಿರುವುದು ರಾಜ್ಯ ರಾಜಕಾರಣದಲ್ಲಿ ಮತ್ತಷ್ಟು ಸಂಚಲನ ಮೂಡಿಸಿದೆ.
ಸುರ್ಜೇವಾಲ ಸಭೆಗೆ ಗೈರಾದ ಸಚಿವ ರಾಜಣ್ಣ
ರಾಜ್ಯದಲ್ಲಿ ಕಳೆದ ಎರಡು ದಿನಗಳಿಂದ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲ ಸಚಿವರ ಜೊತೆ ಪ್ರತ್ಯೇಕ ಸಭೆಗಳನ್ನು ನಡೆಸಿ ಅಗತ್ಯ ಸಲಹೆ ಸೂಚನೆಗಳನ್ನು ನೀಡುತ್ತಿದ್ದಾರೆ. ಆದರೆ ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರು ಉಸ್ತುವಾರಿಯನ್ನು ಭೇಟಿಯಾಗದೆ ಬುಧವಾರ (ಜುಲೈ 17) ಬೆಳಗಿನ ಜಾವ 2 ಗಂಟೆಗೆ ಯೂರೋಪ್ ಪ್ರವಾಸಕ್ಕೆ ತೆರಳಿದ್ದಾರೆ. ಇದು ಪೂರ್ವನಿಯೋಜಿತ ಪ್ರವಾಸ ಎಂದು ಅವರು ಮುಖ್ಯಮಂತ್ರಿಗಳಿಗೆ ಮಾಹಿತಿ ನೀಡಿದ್ದಾರೆ.