ಪ್ರಕರಣ ದುರ್ಬಲಗೊಳಿಸಲು ಕುಮಾರಸ್ವಾಮಿ ಯತ್ನ: ಸಿಎಂ ಸಿದ್ದರಾಮಯ್ಯ ಆರೋಪ

Update: 2024-05-24 10:05 GMT

ಪ್ರಜ್ವಲ್‌ ಪ್ರಕರಣದಲ್ಲಿ ಅತ್ಯಾಚಾರದ ವಿಡಿಯೊ ಹರಿದಾಡಿತು ಎನ್ನುವುದಕ್ಕಿಂತ, ಅತ್ಯಾಚಾರ ಎಸಗಿದ್ದೇ ಘೋರ ಅಪರಾಧ. ಅತ್ಯಾಚಾರ ಎಸಗಿರುವ ಗಂಭೀರ ಸಂಗತಿಯನ್ನು ದುರ್ಬಲಗೊಳಿಸಲು ಕುಮಾರಸ್ವಾಮಿ, ವಿಡಿಯೋ ಹರಿಬಿಟ್ಟದ್ದೇ ದೊಡ್ಡದು ಎಂಬಂತೆ ಡಿ.ಕೆ. ಶಿವಕುಮಾರ್ ಹಾಗೂ ಮತ್ತೊಬ್ಬರ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರಿನ ತಮ್ಮ ನಿವಾಸದ ಬಳಿ ಶುಕ್ರವಾರ ಮಾಧ್ಯಮದವರ ಜೊತೆ ಸಿದ್ದರಾಮಯ್ಯ ಮಾತನಾಡಿದರು. ಈ ವೇಳೆ ಪ್ರಜ್ವಲ್ ರೇವಣ್ಣ ಅವರ ಪ್ರಕರಣದಲ್ಲಿ ಡಿ.ಕೆ.ಶಿವಕುಮಾರ್ ಅವರ ಆಡಿಯೋ ಇರುವುದರಿಂದ ಅವರನ್ನೇ ವಿಚಾರಣೆ ಮಾಡಬೇಕೆಂದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆಗ್ರಹ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಕುಮಾರಸ್ವಾಮಿ ಅವರ ಅಣ್ಣನ ಮಗ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿದ್ದಾನೆ. ಅತ್ಯಾಚಾರದ ವಿಡಿಯೊ ಹರಿದಾಡಿತು ಎನ್ನುವುದಕ್ಕಿಂತ, ಅತ್ಯಾಚಾರ ಮಾಡಿರುವುದೇ ಘೋರ ಅಪರಾಧ. ಅತ್ಯಾಚಾರದ ಸಂಗತಿಯನ್ನು ದುರ್ಬಲಗೊಳಿಸಲು ಡಿ.ಕೆ. ಶಿವಕುಮಾರ್ ಹಾಗೂ ಮತ್ತೊಬ್ಬರ ಮೇಲೆ ಹೇಳುತ್ತಿದ್ದಾರೆ. ಅವರು ಈ ನೆಲದ ಕಾನೂನಿಗೆ ಗೌರವ ಕೊಡಬೇಕು ಎಂದು ಹೇಳಿದರು.

ದೇವೇಗೌಡರು ಪ್ರಜ್ವಲ್ ರೇವಣ್ಣ ಅವರನ್ನು ಕುಟುಂಬದಿಂದ ಹೊರಹಾಕುತ್ತೇವೆ ಎಂದಿರುವ ಬಗ್ಗೆ ಪ್ರತಿಕ್ರಿಯಿಸಿ, ಇವರಿಗೆ ಗೊತ್ತಿಲ್ಲದೆ ಪ್ರಜ್ವಲ್ ರೇವಣ್ಣ ಹೊರಟು ಹೋಗಿದ್ದಾರಾ? ಎಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.

ಕುಮಾರಸ್ವಾಮಿ ಅವರು ಮೊದಲಿನಿಂದಲೂ ಪ್ರಜ್ವಲ್ ರೇವಣ್ಣ ನಮ್ಮ ಸಂಪರ್ಕದಲ್ಲಿ ಇಲ್ಲ ಎಂದು ಹೇಳಿಕೆ ನೀಡಿದ್ದಾರೆ, ಹಾಗಾದರೆ ನನ್ನ ಮಗನಿಗೆ ಮತ ನೀಡಿ ಎಂದು ಪ್ರಚಾರ ಮಾಡಿದ್ದು ಸಂಪರ್ಕವೂ, ಅಲ್ಲವೋ ಎಂದು ಪ್ರಶ್ನಿಸಿದರು.

ಎಸ್‌ಐಟಿ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿ, ʻʻನಮಗೆ ಎಸ್‌ಐಟಿ ಬಗ್ಗೆ ಸಂಪೂರ್ಣ ವಿಶ್ವಾಸವಿದೆ. ಕುಮಾರಸ್ವಾಮಿ ಕಾಲದಲ್ಲಿ ಎಷ್ಟು ಪ್ರಕರಣಗಳನ್ನು ಎಸ್‌ಐಟಿಗೆ ವಹಿಸಿದ್ದಾರೆ ಎನ್ನುವ ಬಗ್ಗೆ ನನಗೆ ತಿಳಿದಿಲ್ಲ. ಎಸ್‌ಐಟಿ ರಚನೆ ಮಾಡುವುದು ಪ್ರಕರಣದ ಬಗ್ಗೆ ಗಮನವನ್ನು ಕೇಂದ್ರೀಕರಿಸಲು" ಎಂದರು.

ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದು ಮಾಡಬೇಕು ಎಂದು ಮೋದಿಯವರಿಗೆ ಪತ್ರ ಬರೆದಿದ್ದೇವೆ. ಆದರೆ ಈವರೆಗೆ ಅವರಿಂದ ಪ್ರತಿಕ್ರಿಯೆ ಬಂದಿಲ್ಲ. ಎಲ್ಲರಿಗೂ ಪ್ರಧಾನಮಂತ್ರಿಗಳ ಕಚೇರಿಯಿಂದ ಕೂಡಲೇ ಉತ್ತರ ದೊರಕುತ್ತದೆ ಎಂದು ನಂಬಿರುವುದೇ ನಿಮ್ಮ ತಪ್ಪು. ಏಕೆಂದರೆ ನಾವು ಬರೆದಿರುವ ಅನೇಕ ಪತ್ರಗಳಿಗೆ ಅವರು ಉತ್ತರ ಕೊಟ್ಟಿಲ್ಲ. ಮೋದಿಯವರು ಸೆಲೆಕ್ಟಿವ್ ಎಂದು ಹೇಳುವುದಿಲ್ಲ. ಆದರೆ, ಚುನಾಯಿತ ಸರ್ಕಾರದ ಮುಖ್ಯಮಂತ್ರಿಯೊಬ್ಬರು ಪ್ರಧಾನಿಗಳಿಗೆ ಪತ್ರ ಬರೆದಾಗ ಸ್ವಾಭಾವಿಕವಾಗಿ ಉತ್ತರ ಕೊಡುತ್ತಾರೆ ಎಂಬ ನಂಬಿಕೆ ಇದೆ. ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದು ಮಾಡಲು ಬರೆದ ಮೊದಲ ಪತ್ರಕ್ಕೆ ಉತ್ತರ ಕೊಟ್ಟಿಲ್ಲ. ಎರಡನೇ ಪತ್ರಕ್ಕೆ ಉತ್ತರ ಕೊಡುತ್ತಾರೇನೋ ನೋಡೋಣ ಎಂದರು.

Tags:    

Similar News