ನಾಳೆಯಿಂದ ವಿಧಾನ ಮಂಡಲ ಅಧಿವೇಶನ| ಮುಡಾ, ವಾಲ್ಕೀಕಿ ನಿಗಮ ಹಗರಣ; ʼಕೈʼಕಟ್ಟಿಹಾಕಲು ಬಿಜೆಪಿ- ಜೆಡಿಎಸ್ ಸಜ್ಜು
ಮಾಜಿ ಮುಖ್ಯಮಂತ್ರಿಗಳಾದ ಬಿಜೆಪಿಯ ಬಸವರಾಜ ಬೊಮ್ಮಾಯಿ ಮತ್ತು ಜೆಡಿಎಸ್‌ನ ಎಚ್.ಡಿ. ಕುಮಾರಸ್ವಾಮಿ, ಕೋಟಾ ಶ್ರೀನಿವಾಸ ಪೂಜಾರಿ ಲೋಕಸಭಾ ಚುನಾವಣೆಯಲ್ಲಿ ಗೆದ್ದು ಸಂಸದರಾಗಿರುವುದರಿಂದ ಕಾಂಗ್ರೆಸ್ ಕಟ್ಟಿಹಾಕುವ ಸಾಮರ್ಥ್ಯ ಇದ್ದ ಪ್ರಮುಖ ನಾಯಕರ ಗೈರು ಎದ್ದು ಕಾಣಲಿದೆ.
ಜುಲೈ 15ರಿಂದ (ಸೋಮವಾರ) ಜುಲೈ26 ರವರೆಗೆ ರಾಜ್ಯ ವಿಧಾನಮಂಡಲದ ಅಧಿವೇಶನ ಪ್ರಾರಂಭವಾಗುತ್ತಿದ್ದು,ಈ ಬಾರಿ ಆಡಳಿತ ಪಕ್ಷ ಕಾಂಗ್ರೆಸ್ ಉಭಯ ಸದನಗಳಲ್ಲಿ (ವಿಧಾನಸಭೆ ಮತ್ತು ವಿಧಾನ ಪರಿಷತ್) ವಾಲ್ಮೀಕಿ ನಿಗಮ ಹಗರಣ ಹಾಗೂ ಮುಡಾ ಹಗರಣ, ಗ್ಯಾರಂಟಿ ಯೋಜನೆಗಳಿಗೆ ಪರಿಶಿಷ್ಟ ಜಾತಿ, ವರ್ಗಗಳ ಕಲ್ಯಾಣ ನಿಧಿಯನ್ನು ಉಪಯೋಗಿಸಿರುವುದೂ ಸೇರಿದಂತೆ ಹಲವು ವಿಷಯಗಳಲ್ಲಿ ವಿರೋಧ ಪಕ್ಷಗಳ ಪ್ರತಿರೋಧವನ್ನು ಎದುರಿಸಲಿದೆ.
ಅದರಲ್ಲೂ ಈ ಬಾರಿ ಬಿಜೆಪಿ-ಜೆಡಿಎಸ್ ಎನ್‌ಡಿಕೆ ಮಿತ್ರಪಕ್ಷಗಳಾಗಿದ್ದು, ಜಂಟಿಯಾಗಿ ಕಾಂಗ್ರೆಸ್ ಸರ್ಕಾರದ ವಿರುದ್ಧ ತೊಡೆತಟ್ಟಲಿವೆ. ಪ್ರಮುಖವಾಗಿ ವಾಲ್ಮೀಕಿ ನಿಗಮ ಹಗರಣದಲ್ಲಿ ಅಧಿಕಾರಿಯ ಆತ್ಮಹತ್ಯೆ ಹಾಗೂ ಕೋಟ್ಯಂತರ ಹಣವನ್ನು ಅನಧಿಕೃತ ವ್ಯಕ್ತಿಗಳ ಖಾತೆಗಳಿಗೆ ವರ್ಗಾವಣೆ ಮಾಡಿರುವ ವಿಚಾರ ಉಭಯ ಸದನಗಳಲ್ಲಿ ಪ್ರತಿನಿಧಿಸಲಿವೆ. ಬಿಜೆಪಿ ಮತ್ತು ಜೆಡಿಎಸ್ ಎರಡೂ ಪಕ್ಷಗಳು ಕಾಂಗ್ರೆಸ್ ಅನ್ನು ಕಟ್ಟಿಹಾಕಲು ರಣತಂತ್ರ ರೂಪಿಸಿವೆ. ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಅವರ ಪತ್ನಿಗೆ ನಿವೇಶನಗಳು ಹಂಚಿಕೆಯಾಗಿರುವ ಪ್ರಕರಣದಲ್ಲಿ ಮುಖ್ಯಮಂತ್ರಿ ಅವರನ್ನು ಇಕ್ಕಟ್ಟಿಗೆ ಸಿಲುಕಿಸಲು ವಿರೋಧ ಪಕ್ಷಗಳು ಸಿದ್ಧವಾಗಿವೆ.
ಆದರೆ, ಮಾಜಿ ಮುಖ್ಯಮಂತ್ರಿಗಳಾದ ಬಿಜೆಪಿಯ ಬಸವರಾಜ ಬೊಮ್ಮಾಯಿ ಮತ್ತು ಜೆಡಿಎಸ್‌ನ ಎಚ್.ಡಿ. ಕುಮಾರಸ್ವಾಮಿ ಇಬ್ಬರೂ ಲೋಕಸಭಾ ಚುನಾವಣೆಯಲ್ಲಿ ಗೆದ್ದು ಸಂಸದರಾಗಿರುವುದರಿಂದ ಕಾಂಗ್ರೆಸ್ ಕಟ್ಟಿಹಾಕುವ ಸಾಮರ್ಥ್ಯ ಇದ್ದ ಉಭಯ ನಾಯಕರ ಗೈರು ಎದ್ದು ಕಾಣಲಿದೆ ಎಂದು ಭಾವಿಸಲಾಗಿದೆ. ಆದರೆ, ಬಿಜೆಪಿಯ ವಿರೋಧ ಪಕ್ಷ ನಾಯಕ ಆರ್. ಅಶೋಕ್ ಅವರ ಜತೆ ಅವರದೇ ಪಕ್ಷದ ನಾಯಕರಾದ ಬಸನಗೌಡ ಪಾಟೀಲ ಯತ್ನಾಳ್, ಅರವಿಂದ ಬೆಲ್ಲದ ಮತ್ತಿತರರು ಒಗ್ಗಟ್ಟಾಗಿ ಶಕ್ತಿ ಪ್ರದರ್ಶನ ಮಾಡಲಿದ್ದಾರೆಯೇ ಎಂಬುದು ಸದನ ಸಂದರ್ಭದಲ್ಲಿ ಎದ್ದುಕಾಣಲಿದೆ.
ಮೇಲ್ಮನೆಯಲ್ಲಿ ನೂತನ ಸದಸ್ಯ ಸಿ.ಟಿ. ರವಿ ಅವರು ಅಧಿಕೃತ ವಿರೋಧ ಪಕ್ಷ ನಾಯಕರಲ್ಲವಾದರೂ ಸಂಸದನಾಗಿ ಆಯ್ಕೆಯಾಗಿರುವ ಇನ್ನೊಬ್ಬ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ಸ್ಥಾನದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಯತ್ನಿಸುತ್ತಾರೆಯೇ ಎಂಬುದನ್ನು ಗಮನಿಸಬೇಕಾಗಿದೆ.
ಮುಖ್ಯಮಂತ್ರಿ ಸಭೆ
ಇದಕ್ಕೂ ಮೊದಲು ಪೂರ್ವಭಾವಿಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳೊಂದಿಗೆ ಇಂದು (ಭಾನುವಾರ) ಸಭೆ ನಡೆಸಿದ್ದಾರೆ. ಅಧಿವೇಶನದಲ್ಲಿ ಚರ್ಚೆಯಾಗುವ ವಿಷಯಗಳಿಗೆ ಸಮರ್ಪಕ ಉತ್ತರ ನೀಡಲು ಸಿದ್ಧರಾಗಿರುವಂತೆ ಹಾಗೂ ಅಧಿವೇಶನದಲ್ಲಿ ಖುದ್ದು ಹಾಜರಿದ್ದು, ಸಚಿವರಿಗೆ ತಮ್ಮ ಇಲಾಖೆಗಳ ವಿಷಯಗಳ ಕುರಿತ ಮಾಹಿತಿ ಒದಗಿಸಬೇಕು ಎಂದು ಅಧಿಕಾರಿಗಳಿಗೆ ಸಿಎಂ ನಿರ್ದೇಶನ ನೀಡಿದ್ದಾರೆ.
ಭಾನುವಾರ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನ ಮಂಡಲ ಅಧಿವೇಶನಕ್ಕೆ ಪೂರ್ವಭಾವಿಯಾಗಿ ಎಲ್ಲ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು/ ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳ ಸಭೆ ನಡೆಸಿ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಸಿದರು.
ಈ ವೇಳೆ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಕೆಲವು ಸೂಚನೆಗಳನ್ನು ನೀಡಿದ್ದು, ʻʻಈ ಬಾರಿ ಸಂಪೂರ್ಣ ಬಜೆಟ್‌ಗೆ ಮಾರ್ಚ್‌ನಲ್ಲಿಯೇ ಅನುಮೋದನೆ ದೊರೆತಿದೆ ಹಾಗಾಗಿ ಇದು ಬಜೆಟ್ ಬಗ್ಗೆ ಚರ್ಚಿಸುವ ಅಧಿವೇಶನ ಅಲ್ಲ. ಯಾವಾಗಲೂ ಮಾರ್ಚ್‌ನಲ್ಲಿ ಲೇಖಾನುದಾನ ಪಡೆದು, ಮಳೆಗಾಲದ ಅಧಿವೇಶನದಲ್ಲಿ ಪೂರ್ಣ ಬಜೆಟ್‌ಗೆ ಅನುಮೋದನೆ ಪಡೆಯಲಾಗುತ್ತಿತ್ತು. ಈ ಬಾರಿ ಪೂರ್ಣ ಬಜೆಟ್ ಅನುಮೋದನೆ ಆಗಿರುವ ಹಿನ್ನೆಲೆಯಲ್ಲಿ ವಿರೋಧ ಪಕ್ಷದವರು ಈ ಅಧಿವೇಶನವನ್ನು ವಿವಿಧ ಆರೋಪ ಮಾಡುವ ಕುರಿತು ಬಳಸಿಕೊಳ್ಳುವ ಸಾಧ್ಯತೆ ಇದೆ. ಇದಕ್ಕೆ ಸೂಕ್ತ ಉತ್ತರ ನೀಡಲು ಅಧಿಕಾರಿಗಳು ಸಿದ್ಧರಾಗಿರಬೇಕುʼʼ ಎಂದು ಸೂಚಿಸಿದರು.
ವಿವಿಧ ಇಲಾಖೆಗಳಲ್ಲಿ ಚರ್ಚೆಗೆ ಬರುವ ಸಾಧ್ಯತೆ ಇರುವ ವಿಷಯಗಳ ಕುರಿತು ಇಲಾಖಾ ಕಾರ್ಯದರ್ಶಿಗಳಿಂದ ಮುಖ್ಯಮಂತ್ರಿಗಳು ಸವಿಸ್ತಾರವಾಗಿ ಮಾಹಿತಿ ಪಡೆದರು. ಚರ್ಚೆಯ ಸಾಧ್ಯತೆ ಇರುವ ವಿಷಯಗಳ ಕುರಿತು ದತ್ತಾಂಶಗಳನ್ನು ಸಂಗ್ರಹಿಸಲು ಸಹ ಸೂಚನೆ ನೀಡಿದರು. ಎಲ್ಲ ಕಾರ್ಯದರ್ಶಿಗಳೂ, ಇಲಾಖಾ ಮುಖ್ಯಸ್ಥರು ಅಧಿವೇಶನದಲ್ಲಿ ಹಾಜರಿರಬೇಕು. ಸಚಿವರಿಗೆ ಸಮರ್ಪಕವಾಗಿ ಮಾಹಿತಿ ನೀಡಬೇಕು. ಆಯಾ ಇಲಾಖಾ ಸಚಿವರು ಚರ್ಚೆಯ ವಿಷಯಗಳಿಗೆ ಉತ್ತರಿಸಬೇಕು. ಅಗತ್ಯವಿದ್ದರೆ ತಾವು ಮಧ್ಯಪ್ರವೇಶಿಸುತ್ತೇವೆ ಎಂದು ತಿಳಿಸಿದ್ದಾರೆ.
ನಿಮ್ಮ ಇಲಾಖೆಯ ವಿಷಯ ಇದ್ದಾಗ ಕಾರ್ಯದರ್ಶಿಗಳು ಖುದ್ದು ಹಾಜರಿದ್ದು, ಸಚಿವರಿಗೆ ಸಹಕಾರ ನೀಡಬೇಕು. ಕೇವಲ ಅಧೀನ ಅಧಿಕಾರಿಗಳನ್ನು ಕಳುಹಿಸಿ ಗೈರು ಹಾಜರಾಗುವಂತಿಲ್ಲ ಎಂದು ಖಡಕ್ ಸೂಚನೆ ನೀಡಿದರು.
ಈ ಸಭೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯೆಲ್, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್ ಹಾಗೂ ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.