Loksabha Election 2024 | ಮಂಡ್ಯದಿಂದ ಎಚ್‌ಡಿಕೆ ಸ್ಪರ್ಧೆ; ಹಾಸನ ಪ್ರಜ್ವಲ್, ಕೋಲಾರ ಮಲ್ಲೇಶ್ ಬಾಬು
ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಲೋಕಸಭೆ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿದ್ದು, ಜೆಡಿಎಸ್ ಹಾಸನ, ಕೋಲಾರ ಹಾಗೂ ಮಂಡ್ಯ ಲೋಕಸಭಾ ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುತ್ತಿದೆ. ಹಾಸನದಲ್ಲಿ ರೇವಣ್ಣ ಅವರ ಪುತ್ರ ಪ್ರಜ್ವಲ್ ರೇವಣ್ಣ, ಕೋಲಾರದಲ್ಲಿ ಎಂ ಮಲ್ಲೇಶ್ ಬಾಬು ಕಣಕ್ಕೆ ಇಳಿಸುವ ಬಗ್ಗೆ ಮಂಗಳವಾರ ಸಂಜೆ ನಡೆದ ಪಕ್ಷದ ಕೋರ್ ಕಮಿಟಿ ಸಭೆಯಲ್ಲಿ ತೀರ್ಮಾನಿಸಲಾಗಿದೆ;
ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ ಕುಮಾರಸ್ವಾಮಿ ಅವರು ಲೋಕಸಭಾ ಚುನಾವಣಾ ಕಣಕ್ಕೆ ಇಳಿಯುತ್ತಿದ್ದು, ಮಂಡ್ಯದಿಂದಲ್ಲೇ ಸ್ಪರ್ಧಿಸಲಿದ್ದಾರೆ.
ಹಲವು ದಿನಗಳಿಂದ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಯಾರು ಸ್ಪರ್ಧಿಸಲಿದ್ದಾರೆ ಎನ್ನುವುದು ಕುತೂಹಲ ಮೂಡಿಸಿತ್ತು. ಗೃಹ ಸಚಿವ ಹಾಗೂ ಬಿಜೆಪಿ ಮುಖಂಡ ಅಮಿತ್ ಶಾ ಅವರು ಎಚ್.ಡಿ ಕುಮಾರಸ್ವಾಮಿ ಅವರಿಗೆ ಮಂಡ್ಯದಿಂದಲೇ ಸ್ಪರ್ಧೆ ಮಾಡುವಂತೆ ತಿಳಿಸಿದ್ದರು. ಆದರೆ, ಆರೋಗ್ಯ ಸಮಸ್ಯೆ ಇರುವುದರಿಂದ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಕ್ಕೆ ಕುಮಾರಸ್ವಾಮಿ ಅವರು ಹಿಂದೇಟು ಹಾಕಿದ್ದರು ಎನ್ನಲಾಗಿತ್ತು.
ಇದೀಗ ಕುಮಾರಸ್ವಾಮಿ ಅವರು ಮಂಡ್ಯದಿಂದಲೇ ಸ್ಪರ್ಧಿಸುವುದು ಖಚಿತವಾಗುತ್ತಿದ್ದು, ಕುತೂಹಲ ಮೂಡಿಸಿದೆ. ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಲೋಕಸಭೆ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿದ್ದು, ಜೆಡಿಎಸ್ ಹಾಸನ, ಕೋಲಾರ ಹಾಗೂ ಮಂಡ್ಯ ಲೋಕಸಭಾ ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುತ್ತಿದೆ. ಹಾಸನದಲ್ಲಿ ರೇವಣ್ಣ ಅವರ ಪುತ್ರ ಪ್ರಜ್ವಲ್ ರೇವಣ್ಣ, ಕೋಲಾರದಲ್ಲಿ ಎಂ ಮಲ್ಲೇಶ್ ಬಾಬು ಕಣಕ್ಕೆ ಇಳಿಸುವ ಬಗ್ಗೆ ಮಂಗಳವಾರ ಸಂಜೆ ನಡೆದ ಪಕ್ಷದ ಕೋರ್ ಕಮಿಟಿ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.
ಈ ನಡುವೆ, ಬೆಂಗಳೂರಿನಲ್ಲಿ ಕುಮಾರಸ್ವಾಮಿ ಅವರು ಕೋರ್ ಕಮಿಟಿ ಸಭೆ ನಡೆಸುತ್ತಿರುವಾಗಲೇ, ಮತ್ತೊಂದು ಕಡೆ ಹಾಸನದಲ್ಲಿ ಎಚ್ ಡಿ ದೇವೇಗೌಡರು ಮೂರೂ ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಬಹಿರಂಗ ಸಭೆಯಲ್ಲಿಯೇ ಘೋಷಿಸಿದ್ದಾರೆ.
ಮಂಡ್ಯದಲ್ಲಿ ಸಿ ಎಸ್ ಪುಟ್ಟರಾಜು ಅವರನ್ನು ಕಣಕ್ಕಿಳಿಸಲು ಜೆಡಿಎಸ್ ನಿರ್ಧರಿಸಿತ್ತು. ಆದರೆ, ಬಿಜೆಪಿ ವರಿಷ್ಠ ಅಮಿತ್ ಶಾ ಅವರು ಸ್ವತಃ ಕುಮಾರಸ್ವಾಮಿ ಅವರೇ ಮಂಡ್ಯದಿಂದ ಕಣಕ್ಕಿಳಿಯುವಂತೆ ಒತ್ತಡ ಹೇರಿದ ಹಿನ್ನೆಲೆಯಲ್ಲಿ ಅಳೆದುತೂಗಿ ಅಂತಿಮವಾಗಿ ಕುಮಾರಸ್ವಾಮಿ ಅವರೇ ಕಣಕ್ಕಿಳಿಯಲು ನಿರ್ಧರಿಸಿದರು. ಈ ನಡುವೆ, ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಿಂದ ಕಳೆದ ಚುನಾವಣೆಯಲ್ಲಿ ಆಯ್ಕೆಯಾಗಿರುವ ಕುಮಾರಸ್ವಾಮಿ ಅವರು ಆ ಸ್ಥಾನಕ್ಕೆ ರಾಜೀನಾಮೆ ನೀಡಿ ಮಂಡ್ಯದಲ್ಲಿ ಲೋಕಸಭಾ ಚುನಾವಣಾ ಕಣಕ್ಕೆ ಇಳಿಯಬಾರದು ಎಂದು ಅಲ್ಲಿನ ಕಾರ್ಯಕರ್ತರು ಪಟ್ಟು ಹಿಡಿದಿದ್ದರು. ಕಳೆದ ಮೂರ್ನಾಲ್ಕು ದಿನಗಳಿಂದ ಈ ಸಂಬಂಧ ಮಂಡ್ಯ ಮತ್ತು ಚನ್ನಪಟ್ಟಣ ಜೆಡಿಎಸ್ ಕಾರ್ಯಕರ್ತರ ನಡುವೆ ಸಾಕಷ್ಟು ವಾಗ್ವಾದ, ಜಗಳ, ಕೈ, ಕಾಲು ಕೊಯ್ದುಕೊಳ್ಳುವ ಅತಿರೇಕದ ವರ್ತನೆಗಳೂ ನಡೆದಿದ್ದವು.
ಇದೀಗ ಜೆಡಿಎಸ್ ತನ್ನ ಪಾಲಿನ ಮೂರೂ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಿದ್ದು, ಅಧಿಕೃತವಾಗಿ ಪಟ್ಟಿ ಪ್ರಕಟಣೆಯೊಂದೇ ಬಾಕಿ ಉಳಿದಿದೆ.
ಬಿಜೆಪಿ ನಾಯಕರ ಸರದಿ ಸಾಲು!
ಈ ನಡುವೆ, ಬಿಜೆಪಿ ನಾಯಕರು ತಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ. ಪ್ರಚಾರ ಸಭೆ, ಕಾರ್ಯಕ್ರಮ ಯೋಜನೆ, ವೇದಿಕೆಯ ಪ್ರಮುಖರ ಆಯ್ಕೆಯಂತಹ ವಿಷಯದಲ್ಲಿ ಜೆಡಿಎಸ್ ಸ್ಥಳೀಯ ಮತ್ತು ರಾಜ್ಯ ಮುಖಂಡರೊಂದಿಗೆ ಸಮಾಲೋಚಿಸುತ್ತಿಲ್ಲ ಎಂದು ಜೆಡಿಎಸ್ ನಾಯಕರು ಕಳೆದ ವಾರ ಅಸಮಾಧಾನ ವ್ಯಕ್ತಪಡಿಸಿದ್ದರು. ಎಚ್ ಡಿಕೆ ನೇತೃತ್ವದಲ್ಲಿ ನಡೆದ ರಾಜ್ಯ ಮುಖಂಡರ ಸಭೆಯಲ್ಲಿ ಈ ಬಗ್ಗೆ ಭಾರೀ ದೂರುಗಳು ಮತ್ತು ಅಸಮಾಧಾನ ಕೇಳಿಬಂದಿತ್ತು. ಅದಾದ ಬೆನ್ನಲ್ಲೇ ಕುಮಾರಸ್ವಾಮಿ ಮತ್ತು ದೇವೇಗೌಡರು ಬಿಜೆಪಿಗೆ ʼಮೈತ್ರಿ ಧರ್ಮʼ ನೆನಪಿಸಿದ್ದರು. ಇದೀಗ ರಾಜ್ಯದ ವಿವಿಧ ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳು ಮತ್ತು ಪ್ರಮುಖ ನಾಯಕರು ಎಚ್ ಡಿ ಕುಮಾರಸ್ವಾಮಿ ಅವರ ಮನೆ ಮುಂದೆ ಸರದಿ ಸಾಲಿನಲ್ಲಿ ನಿಂತು ಅವರ ಭೇಟಿ ಮಾಡಿ ಬೆಂಬಲ ಕೋರುತ್ತಿದ್ದಾರೆ.
ಕಳೆದ ಎರಡು ದಿನಗಳಿಂದ ಹತ್ತಾರು ಬಿಜೆಪಿ ಅಭ್ಯರ್ಥಿಗಳು ಮತ್ತು ರಾಜ್ಯ ನಾಯಕರು ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ, ಅವರ ಕುಶಲೋಪರಿ ವಿಚಾರಿಸಿ ಕ್ಷೇತ್ರದಲ್ಲಿ ತಮಗೆ ಸಹಕರಿಸುವಂತೆ ಮನವಿ ಮಾಡುತ್ತಿದ್ದಾರೆ.