Loksabha Election 2024 | ಕೈ ತಪ್ಪಿದ ಟಿಕೆಟ್; ಬಿಜೆಪಿಗೆ ಶಾಕ್ ಕೊಟ್ಟ ತೇಜಸ್ವಿನಿ ಗೌಡ
ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ಬಿಜೆಪಿ ನಾಯಕಿ ತೇಜಸ್ವಿನಿ ಗೌಡ ಅವರು ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.;
ಬಿಜೆಪಿ ನಾಯಕಿ ತೇಜಸ್ವಿನಿ ಗೌಡ ಅವರು ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ತೇಜಸ್ವಿನಿ ಗೌಡ ಅವರು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಬೆಂಗಳೂರು ಗ್ರಾಮಾಂತರ ಅಥವಾ ಮೈಸೂರು – ಕೊಡಗು ಲೋಕಸಭಾ ಕ್ಷೇತ್ರದಿಂದ ಟಿಕೆಟ್ ನಿರೀಕ್ಷಿಸಿದ್ದರು. ಆದರೆ, ಅವರಿಗೆ ಬಿಜೆಪಿಯಿಂದ ಟಿಕೆಟ್ ಕೈತಪ್ಪಿದ್ದು, ವಿಧಾನಪರಿಷತ್ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ವಿಧಾನ ಪರಿಷತ್ ಸ್ಪೀಕರ್ ಬಸವರಾಜ ಹೊರಟ್ಟಿ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.
ತಮಗೆ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ತೇಜಸ್ವಿನಿ ಗೌಡ ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ, ಬಿಜೆಪಿ ತೊರೆಯಲಿದ್ದಾರೆ ಎಂಬ ಚರ್ಚೆ ರಾಜಕೀಯ ವಲಯದಲ್ಲಿ ಕೇಳಿಬರುತ್ತಿತ್ತು.
ತೇಜಸ್ವಿನಿ ಅವರ ಪರಿಷತ್ ಸದಸ್ಯ ಸ್ಥಾನದ ಅವಧಿಯು ಜೂನ್‌ನಲ್ಲಿ ಮುಕ್ತಾಯವಾಗಲಿದೆ. ಆದರೆ, ಮೂರು ತಿಂಗಳು ಮುಂಚೆಯೇ ಅವರು ಪರಿಷತ್ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಬಿಜೆಪಿ – ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಸಹ ತೇಜಸ್ವಿನಿ ಅವರಿಗೆ ಟಿಕೆಟ್ ಕೈತಪ್ಪುವುದಕ್ಕೆ ಕಾರಣವಾಗಿದೆ. ಬೆಂಗಳೂರು ಗ್ರಾಮಾಂತರ ಹಾಗೂ ಮೈಸೂರು - ಕೊಡಗು ಲೋಕಸಭಾ ಕ್ಷೇತ್ರದ ಟಿಕೆಟ್ ನಿರೀಕ್ಷೆಯಲ್ಲಿದ್ದ ತೇಜಸ್ವಿನಿ ಅವರಿಗೆ ಬಿಜೆಪಿ ಮಣೆ ಹಾಕದೇ ಇರುವುದು ನಿರಾಸೆ ಮೂಡಿತ್ತು.
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಡಾ ಸಿ.ಎನ್ ಮಂಜುನಾಥ್ ಹಾಗೂ ಮೈಸೂರು - ಕೊಡಗು ಲೋಕಸಭಾ ಕ್ಷೇತ್ರದಿಂದ ಯದುವೀರ್ ಒಡೆಯರ್‌ಗೆ ಟಿಕೆಟ್ ನೀಡಲಾಗಿದೆ. ತೇಜಸ್ವಿನಿ ಅವರು ನಿರೀಕ್ಷಿಸಿದ್ದ ಲೋಕಸಭಾ ಕ್ಷೇತ್ರಗಳಲ್ಲಿ ಒಂದರಿಂದಲೂ ಟಿಕೆಟ್ ಸಿಗದೆ ಇರುವುದರಿಂದ ಅಸಮಾಧಾನಗೊಂಡಿರುವ ಅವರು, ಬಿಜೆಪಿ ಪಕ್ಷ ತೊರೆಯಲು ಮುಂದಾಗಿದ್ದಾರೆ. ಇದರ ಭಾಗವಾಗಿ ಅವರ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.
ಪತ್ರಕರ್ತೆಯಾಗಿದ್ದ ತೇಜಸ್ವಿನಿ, ಕಾಂಗ್ರೆಸ್ ಪಕ್ಷದ ಮೂಲಕ ರಾಜಕೀಯ ಪ್ರವೇಶಿಸಿ ಡಿ ಕೆ ಶಿವಕುಮಾರ್ ಅವರ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದರು. 2004 ರ ಲೋಕಸಭಾ ಚುನಾವಣೆಯಲ್ಲಿ ಕನಕಪುರ ಕ್ಷೇತ್ರದಿಂದ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದು ಒಂದು ಲಕ್ಷ ಮತಗಳ ಅಂತರದ ಜಯಗಳಿಸಿದ್ದ ಅವರು, 2009 ರ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಕಾಂಗ್ರೆಸ್ ನಿಂದ ಕಣಕ್ಕಿಳಿದು ಸೋಲು ಕಂಡಿದ್ದರು. 2014 ರಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರು.