Loksabha Election 2024 | ರಾಜ್ಯದಲ್ಲಿ ಮೊದಲ ಹಂತ: ಇಂದಿನಿಂದ ನಾಮಪತ್ರಿಕೆ ಸಲ್ಲಿಕೆ

ರಾಜ್ಯದಲ್ಲಿ ಮೊದಲ ಹಂತದ ಚುನಾವಣೆಗೆ ಇಂದಿನಿಂದ(ಮಾ. 28) ನಾಮಪತ್ರ ಸಲ್ಲಿಕೆ ಆರಂಭವಾಗಿದ್ದು, ಏ.5ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಏ.8ರಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನ. ಹಾಗಾಗಿ ಏ.8ರಂದು ಸಂಜೆ ಮೊದಲ ಹಂತದ ಚುನಾವಣೆ ನಡೆಯಲಿರುವ 14 ಲೋಕಸಭಾ ಕ್ಷೇತ್ರದ ಹಣಾಹಣಿಯ ಸ್ಪಷ್ಟ ಚಿತ್ರಣ ದೊರೆಯಲಿದೆ.

Update: 2024-03-28 07:36 GMT
Click the Play button to listen to article

ಬೆಂಗಳೂರು: ರಾಜ್ಯದಲ್ಲಿ ಮೊದಲ ಹಂತದಲ್ಲಿ ಏ.26 ರಂದು ಮತದಾನ ನಡೆಯಲಿರುವ 14 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆಯ ಅಧಿಕೃತ ಪ್ರಕ್ರಿಯೆಗಳು ಇಂದಿನಿಂದ (ಮಾ.28 ) ಆರಂಭವಾಗಿವೆ. 

ರಾಷ್ಟ್ರಮಟ್ಟದಲ್ಲಿ ಎರಡನೇ ಹಂತ ಮತ್ತು ರಾಜ್ಯದ ಮಟ್ಟಿಗೆ ಮೊದಲ ಹಂತದ ಚುನಾವಣಾ ಪ್ರಕ್ರಿಯೆ ಇದಾಗಿದ್ದು, ರಾಜ್ಯದ ಒಟ್ಟು 28 ಲೋಕಸಭಾ ಕ್ಷೇತ್ರಗಳ ಪೈಕಿ ಅರ್ಧದಷ್ಟು ಕ್ಷೇತ್ರಗಳಲ್ಲಿ ಈ ಹಂತದಲ್ಲಿ ಮತದಾನ ನಡೆಯಲಿದೆ. ದಕ್ಷಿಣ ಕರ್ನಾಟಕದ ಹಳೇ ಮೈಸೂರು ಭಾಗ, ಕರಾವಳಿ, ಮಧ್ಯಕರ್ನಾಟಕದ ಕೆಲವು ಕ್ಷೇತ್ರಗಳಲ್ಲಿ ಮೊಲದ ಹಂತದಲ್ಲಿ ಚುನಾವಣೆ ನಡೆಯಲಿದೆ. 

ಮೊದಲ ಹಂತದ ಚುನಾವಣಾ ವೇಳಾಪಟ್ಟಿಯಂತೆ ಮಾ.28 ರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ಏ.4ರಂದು ನಾಮಪತ್ರ ಸಲ್ಲಿಕೆಗೆ ಕಡೆಯ ದಿನವಾಗಿದೆ. ಏ.5ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಏ.8ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ. ಏ.26ರಂದು ಮತದಾನ ನಡೆಯಲಿದೆ. ಜೂ.4ರಂದು ಫಲಿತಾಂಶ ಹೊರಬೀಳಲಿದೆ.

ಶುಕ್ರವಾರ (ಮಾ. 28) ನಾಮಪತ್ರ ಸಲ್ಲಿಕೆಯಾಗುವ 14 ಕ್ಷೇತ್ರಗಳಲ್ಲಿ ಬಿಜೆಪಿ–ಜೆಡಿಎಸ್‌ ಮೈತ್ರಿ ಕೂಟ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಿದ್ದು, ಒಟ್ಟಾಗಿಯೇ ಚುನಾವಣೆ ಎದುರಿಸಲಿದೆ. ಬಿಜೆಪಿ ಪಾಲಿನ 11 ಕ್ಷೇತ್ರಗಳ ಅಭ್ಯರ್ಥಿಗಳು ಅಂತಿಮಗೊಂಡಿದ್ದು, ತನ್ನ ಪಾಲಿನ ಮೂರು ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಜೆಡಿಎಸ್‌ ಇನ್ನೂ ಅಧಿಕೃತವಾಗಿ ಪ್ರಕಟಿಸಿಲ್ಲ.

ಈ ನಡುವೆ ಚಿಕ್ಕಬಳ್ಳಾಪುರ, ಕೋಲಾರ ಹಾಗೂ ಚಾಮರಾಜನಗರ ಹೊರತುಪಡಿಸಿ ಉಳಿದ 11 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಕಾಂಗ್ರೆಸ್‌ ಘೋಷಿಸಿದೆ.

ಚುನಾವಣೆ ನಡೆಯಲಿರುವ ಕ್ಷೇತ್ರಗಳು

ಮೊದಲ ಹಂತದಲ್ಲಿ ಚುನಾವಣೆ ನಡೆಯಲಿರುವ 14 ಲೋಕಸಭಾ ಕ್ಷೇತ್ರಗಳೆಂದರೆ, ಉಡುಪಿ-ಚಿಕ್ಕಮಗಳೂರು, ಹಾಸನ, ದಕ್ಷಿಣಕನ್ನಡ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಕೇಂದ್ರ, ಚಿಕ್ಕಬಳ್ಳಾಪುರ ಮತ್ತು ಕೋಲಾರ.

ಚುನಾವಣಾ ನೀತಿಸಂಹಿತೆ ಜಾರಿ

ಲೋಕಸಭಾ ಚುನಾವಣೆಗೆ ವೇಳಾಪಟ್ಟಿ ಪ್ರಕಟಿಸಿರುವ ಚುನಾವಣಾ ಆಯೋಗವು ರಾಜಕೀಯ ಪಕ್ಷಗಳು ಮತ್ತು ಉಮೇದುವಾರರು ಅನುಸರಿಸಬೇಕಾದ ಚುನಾವಣಾ ನೀತಿಸಂಹಿತೆಯ ನಿಯಮಗಳನ್ನು ಪ್ರಕಟಿಸಿದ್ದು, ಕಡ್ಡಾಯವಾಗಿ ಪಾಲಿಸಬೇಕಿದೆ. ಚುನಾವಣೆ ಘೋಷಣೆಯಾದ ಮಾರ್ಚ್ 16 ರಿಂದಲೇ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದೆ.

ಮಾರ್ಚ್ 28 ರಿಂದ ಅಂದರೆ ಇಂದಿನಿಂದ ಏಪ್ರಿಲ್ 4 ರವರೆಗೆ ರಜಾ ದಿನಗಳನ್ನು ಹೊರತುಪಡಿಸಿ ನಾಮಪತ್ರಗಳನ್ನು ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು ಚುನಾವಣಾಧಿಕಾರಿಗಳ ಕಚೇರಿಯಲ್ಲಿ ನಾಮಪತ್ರಗಳನ್ನು ಸಲ್ಲಿಸಬೇಕಾಗಿರುತ್ತದೆ.

ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ನಾಮಪತ್ರ ಸಲ್ಲಿಸಬಹುದಾಗಿದೆ.

ಸಾಮಾನ್ಯ ವರ್ಗದ ಅಭ್ಯರ್ಥಿಗಳು 25,000 ರೂಪಾಯಿ ಮತ್ತು ಎಸ್ ಸಿ ಮತ್ತು ಎಸ್ ಟಿ ಅಭ್ಯರ್ಥಿಗಳು 12,500 ರೂಪಾಯಿ ಠೇವಣಿ ಇರಿಸಬೇಕಾಗುತ್ತದೆ. ನಾಮಪತ್ರಗಳನ್ನು ಸಲ್ಲಿಸುವ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕಚೇರಿ ಪ್ರವೇಶಿಸಲು ಅಭ್ಯರ್ಥಿಯೂ ಸೇರಿ 5 ಮಂದಿಗೆ ಮಾತ್ರ ಅನುಮತಿ ನೀಡಲಾಗುತ್ತದೆ.

ಚುನಾವಣಾಧಿಕಾರಿಗಳ ಕಚೇರಿಯ ಆವರಣದ ಸುತ್ತ ಸೆಕ್ಷನ್ 144 ಜಾರಿಗೊಳಿಸಿ ನಿಷೇಧಾಜ್ಞೆ ಹೊರಡಿಸಲಾಗುತ್ತದೆ. ಕಾನೂನು ಸುವ್ಯವಸ್ಥೆಯ ಹಿತದೃಷ್ಟಿಯಿಂದ ಅಭ್ಯರ್ಥಿಗಳ ವಾಹನ ಸೇರಿದಂತೆ 3 ವಾಹನಗಳಿಗೆ ಮಾತ್ರ ಕಚೇರಿಯ 100 ಮೀಟರ್ ವರೆಗೆ ಪ್ರವೇಶಿಸಲು ಅನುಮತಿ ನೀಡಲಾಗಿದೆ.

ನಾಮಪತ್ರ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆಯ ದಿನಾಂಕಕ್ಕೆ ಮುನ್ನ ಚುನಾವಣಾ ವೆಚ್ಚಗಳ ಸಂಬಂಧ ಪ್ರತ್ಯೇಕ ಬ್ಯಾಂಕ್ ಖಾತೆ ತೆರೆಯಬೇಕಾಗಿರುತ್ತದೆ. ಈ ಬ್ಯಾಂಕ್ ಖಾತೆಯ ಮಾಹಿತಿಯನ್ನು ಅವರು ನಾಮಪತ್ರದಲ್ಲಿ ನಮೂದಿಸಬೇಕಾಗಿರುತ್ತದೆ. ಪ್ರಸಕ್ತ ಸಾಲಿನದ್ದೂ ಸೇರಿದಂತೆ ಹಿಂದಿನ 5 ವರ್ಷಗಳವರೆಗಿನ ಆದಾಯ ತೆರಿಗೆ ವಿವರಗಳನ್ನು ಸಲ್ಲಿಸಬೇಕಾಗಿರುತ್ತದೆ.

ಗುರುವಾರ ಪ್ರಶಸ್ತ ದಿನ ಎಂದು ಭಾವಿಸಿರುವ ಅನೇಕ ಅಭ್ಯರ್ಥಿಗಳೂ ನಾಮಪತ್ರ ಸಲ್ಲಿಸಲು ಸಿದ್ದತೆಗಳನ್ನು ಮಾಡಿಕೊಂಡಿದ್ದಾರೆ. ಬೆಂಗಳೂರು ಗ್ರಾಮಂತರ ಕ್ಷೇತ್ರದ ಅಭ್ಯರ್ಥಿ ಡಿ ಕೆ. ಸುರೇಶ್ ಸೇರಿದಂತೆ ಕೆಲವು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲಿದ್ದಾರೆ.

Tags:    

Similar News