Mysore MUDA Scam| ಸಿಎಂ ಸಿದ್ಧರಾಮಯ್ಯ ಸೇರಿ ನಾಲ್ವರ ವಿರುದ್ಧ ಎಫ್‌ಐಆರ್‌ ದಾಖಲು

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ.ಪಾರ್ವತಿ ಅವರಿಗೆ ನೀಡಿದ್ದ 14 ನಿವೇಶನಗಳ ಹಂಚಿಕೆಯಲ್ಲಿ ಅವ್ಯವಹಾರ ನಡೆದಿದೆ ಎಂಬ ಆರೋಪದ ಮೇಲೆ ಸಿಎಂ ವಿರುದ್ಧ ವಿವಿಧ ಸೆಕ್ಷನ್‌ ಗಳಡಿ ಎಫ್‌ಐಆರ್‌ ದಾಖಲಿಸಲಾಗಿದೆ

Update: 2024-09-27 14:04 GMT

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿ ಮೈಸೂರಿನ ಲೋಕಾಯುಕ್ತ ಪೊಲೀಸರು ಸಿಎಂ ಸಿದ್ದರಾಮಯ್ಯ ಹಾಗೂ ಇತರರ ವಿರುದ್ಧ ಶುಕ್ರವಾರ ಸಂಜೆ ಎಫ್‌ಐಆರ್‌ ದಾಖಲು ಮಾಡಿದ್ದಾರೆ.

ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ ಗೆ ರಾಜ್ಯಪಾಲರು ನೀಡಿದ್ದ ಅನುಮತಿಯನ್ನು ಹೈಕೋರ್ಟ್‌ ಏಕಸದಸ್ಯ ಪೀಠ ಎತ್ತಿಹಿಡಿದ ಮರುದಿನವೇ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್‌ ಗಜಾನನ ಭಟ್‌ ಅವರು ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆ ನಡೆಸುವಂತೆ ಮೈಸೂರು ಲೋಕಾಯುಕ್ತ ಪೊಲೀಸರಿಗೆ ಸೂಚಿಸಿದ್ದರು.  ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶದ ಮೇರೆಗೆ ಪ್ರಕರಣ ದಾಖಲಿಲಾಗಿದೆ. 

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ.ಪಾರ್ವತಿ ಅವರಿಗೆ ನೀಡಿದ್ದ 14 ನಿವೇಶನಗಳ ಹಂಚಿಕೆಯಲ್ಲಿ ಅವ್ಯವಹಾರ ನಡೆದಿದೆ ಎಂಬ ಆರೋಪದ ಮೇಲೆ ಸಿಎಂ ವಿರುದ್ಧ ವಿವಿಧ ಸೆಕ್ಷನ್‌ ಗಳಡಿ ಎಫ್‌ಐಆರ್‌ ದಾಖಲಿಸಲಾಗಿದೆ.

ಸಿದ್ದರಾಮಯ್ಯ, ಪಾರ್ವತಿ ಬಿ.ಎಂ, ಮಲ್ಲಿಕಾರ್ಜುನ ಸ್ವಾಮಿ, ದೇವರಾಜು ಜೆ ಹಾಗೂ ಇತರರ ಮೇಲೆ ಸಿಆರ್‌ಪಿಸಿ ಸೆಕ್ಷನ್‌ 156(3) ಅನ್ವಯ ತನಿಖೆ ಕೈಗೊಂಡಿದೆ. ಸಾಮಾಜಿಕ ಹೋರಾಟಗಾರ ಹಾಗೂ ಪತ್ರಕರ್ತ ಸ್ನೇಹಮಯಿ ಕೃಷ್ಣ ಎಂಬುವರು ಮೂಡಾ ನಿವೇಶನ ಹಂಚಿಕೆಯಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ದೂರು ನೀಡಿದ್ದರು.

ಎಫ್‌ಐಆರ್‌ ನಲ್ಲಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 120B, 166, 403, 406, 420, 426, 465, 468, 340, 351, ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆ1988ರ ಸೆಕ್ಷನ್ 9,13, ಬೇನಾಮಿ ಆಸ್ತಿ ವಹಿವಾಟು ತಡೆ ಕಾಯ್ದೆ 1988ರ 3, 53, 54 ಹಾಗೂ ಕರ್ನಾಟಕ ಭೂ ಕಬಳಿಕೆ ನಿಷೇಧ ಕಾಯ್ದೆ 2011ರ ಸೆಕ್ಷನ್‌ 3,4 ರಡಿ ಪ್ರಕರಣ ದಾಖಲಿಸಲಾಗಿದೆ. ಮೈಸೂರು ಲೋಕಾಯುಕ್ತ ಪೊಲೀಸ್‌ ವರಿಷ್ಠಾಧಿಕಾರಿ ಟಿ.ಜೆ.ಉದೇಶ ಅವರು ಪ್ರಕರಣ ದಾಖಲಿಸಿಕೊಂಡು, ತನಿಖೆ ಆರಂಭಿಸಿದ್ದಾರೆ.

Tags:    

Similar News