ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಟಿಹೆಚ್ಒ ಡಾ.ವೆಂಕಟೇಶ್ ಅವರ ಯರಗುಂಟೇಶ್ವರ ಬಡಾವಣೆಯ ಮನೆ ಮೇಲೆ ದಾಳಿ ನಡೆದಿದೆ.;
ಕರ್ನಾಟಕ ಲೋಕಾಯುಕ್ತ
ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಮಂಗಳವಾರ ಮುಂಜಾನೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ಕಡತಗಳ ಪರಿಶೀಲನೆ ನಡೆಸುತ್ತಿದ್ದಾರೆ.
ಸರ್ಕಾರಿ ಅಧಿಕಾರಿಗಳಿಗೆ ಸೇರಿದ ಮನೆ, ಕಚೇರಿ ಹಾಗೂ ಇತರ ಆಸ್ತಿಗಳ ಮೇಲೆ ದಾಳಿ ನಡೆದಿದೆ. ಬೆಂಗಳೂರಿನ ಎರಡು ಕಡೆ ಸೇರಿದಂತೆ, ಚಿಕ್ಕಬಳ್ಳಾಪುರ, ಹಾಸನ, ಚಿತ್ರದುರ್ಗದಲ್ಲಿಯೂ ದಾಳಿ ನಡೆದಿದೆ. ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಓಂ ಪ್ರಕಾಶ್ ಮನೆ, ಕಂದಾಯ ಅಧಿಕಾರಿ ಎನ್.ವೆಂಕಟೇಶ್ ಮನೆಯಲ್ಲಿ ಪರಿಶೀಲನೆ ನಡೆಯುತ್ತಿದೆ.
ಹಾಸನ, ಕೊಡಗು ಜಿಲ್ಲೆಯಲ್ಲಿ ಕೂಡ ಲೋಕಾಯುಕ್ತ ಅಧಿಕಾರಿಗಳ ದಾಳಿ ನಡೆದಿದೆ. ಹಾಸನ ನಗರದ ಚನ್ನಪಟ್ಟಣ ಹೌಸಿಂಗ್ ಬೋರ್ಡ್‌ನಲ್ಲಿರುವ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಕಾರ್ಯಪಾಲಕ ಇಂಜಿನಿಯರ್ ಜಯಣ್ಣ ಮನೆಗಳ ಮೇಲೆ ದಾಳಿ ಮಾಡಲಾಗಿದೆ. ಕೊಡಗು ಜಿಲ್ಲೆ ಕುಶಾಲನಗರದ ಫಾರ್ಮ್‌ಹೌಸ್ ಮೇಲೂ ದಾಳಿ ನಡೆದಿದೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪದ ಹಿನ್ನೆಲೆ ಲೋಕಾಯುಕ್ತ ಎಸ್ಪಿ ಸ್ನೇಹ ನೇತೃತ್ವದಲ್ಲಿ ದಾಳಿ ನಡೆದಿದೆ.
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಟಿಹೆಚ್ಒ ಡಾ.ವೆಂಕಟೇಶ್ ಅವರ ಯರಗುಂಟೇಶ್ವರ ಬಡಾವಣೆಯ ಮನೆ ಮೇಲೆ ದಾಳಿ ನಡೆದಿದೆ. ಆದಿವಾಲ ಗ್ರಾಮದ ಮನೆ, ಕ್ಲಿನಿಕ್ ಮೇಲೆ ದಾಳಿ ಮಾಡಿರುವ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಆದಾಯಕ್ಕೂ ಮೀರಿದ ಆಸ್ತಿ, ಹಣ ಗಳಿಕೆ ಆರೋಪ ಹಿನ್ನೆಲೆ ಲೋಕಾಯುಕ್ತ ಎಸ್ಪಿ ವಾಸುದೇವರಾಮ್, ಡಿವೈಎಸ್ಪಿ ಮೃತ್ಯುಂಜಯ ನೇತೃತ್ವದಲ್ಲಿ ದಾಳಿ ನಡೆದಿದೆ.
ಅಕ್ರಮ ಆಸ್ತಿ ಗಳಿಕೆ ಆರೋಪದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ಇಲಾಖೆ ಇಂಜಿನಿಯರ್ ಎಂ.ಆಂಜನೇಯಮೂರ್ತಿ ಮನೆ, ಸಂಬಂಧಿಕರ ಮನೆಗಳ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಎಂ.ಆಂಜನೇಯಮೂರ್ತಿ ಗೌರಿಬಿದನೂರು ತಾಲೂಕಿನ ಕಿರಿಯ ಇಂಜಿನಿಯರ್ ಆಗಿದ್ದಾರೆ. ಆಂಜನೇಯಮೂರ್ತಿ ಅವರ ಯಲಹಂಕದ ಮನೆ, ಜಕ್ಕೂರು ಕಾಂಪ್ಲೇಕ್ಸ್, ತುಮಕೂರು, ಮಧುಗಿರಿ ಸೇರಿದಂತೆ ಗೌರಿಬಿದನೂರು ಕಚೇರಿಗಳ ಮೇಲೆಯೂ ದಾಳಿ ನಡೆದಿದೆ. ನಾಲ್ಕು ತಂಡಗಳಾಗಿ ಲೋಕಾಯುಕ್ತ ಅಧಿಕಾರಿಳಿಂದ ಕಾರ್ಯಾಚರಣೆ ನಡೆಯುತ್ತಿದೆ. ಚಿಕ್ಕಬಳ್ಳಾಪುರ ಲೋಕಾಯುಕ್ತ ಎಸ್ಪಿ ಜೆಕೆ ಆ್ಯಂಟೊಣಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯುತ್ತಿದೆ.