Lokayuktha Raid | ಆರ್ಟಿಓ ಚೆಕ್ ಪೋಸ್ಟ್ ಮೇಲೆ ಲೋಕಾಯುಕ್ತ ದಾಳಿ, ನಗದು ವಶ
ಆರ್ಟಿಓ ಚೆಕ್‌ಪೋಸ್ಟ್‌ಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ (ಅ.8) ಬೆಳಿಗ್ಗೆ ದಾಳಿ ಮಾಡಿ, ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಎರಡೂ ಚೆಕ್ ಪೋಸ್ಟ್ಗಳಲ್ಲಿ ಸುಮಾರು 20 ಸಾವಿರಕ್ಕೂ ಅಧಿಕ ನಗದು ಪತ್ತೆಯಾಗಿದೆ.;
ಲಂಚ ಆರೋಪ ಕೇಳಿ ಬಂದ ಹಿನ್ನಲೆಯಲ್ಲಿ ರಾಜ್ಯದ ಹಲವು ಆರ್ಟಿಓ ಚೆಕ್ ಪೋಸ್ಟ್ಗಳ ಮೇಲೆ ಮಂಗಳವಾರ(ಅ.8) ಬೆಳ್ಳಂ ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಕೋಲಾರ, ಬೀದರ್, ವಿಜಯಪುರ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿನ ಆರ್ಟಿಓ ಚೆಕ್ ಪೋಸ್ಟ್ಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ, ಪರಿಶೀಲನೆ ನಡೆಸುತ್ತಿದ್ದಾರೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ತಾಡಿಗೋಳ ಕ್ರಾಸ್ ಬಳಿ ಇರುವ ಆರ್ಟಿಓ ಚೆಕ್ ಪೋಸ್ಟ್ ಹಾಗೂ ಮುಳಬಾಗಿಲು ತಾಲೂಕು ನಂಗಲಿ ಆರ್ಟಿಓ ಚೆಕ್ ಪೋಸ್ಟ್ ಮೇಲೆ ಕೋಲಾರ ಲೋಕಾಯುಕ್ತ ಎಸ್ಪಿ ಧನಂಜಯ ನೇತೃತ್ವದ ತಂಡ ದಾಳಿ ಮಾಡಿದೆ.
ಆರ್ಟಿಓ ಚೆಕ್ ಪೋಸ್ಟ್ ಸಿಬ್ಬಂದಿ ವಿರುದ್ಧ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಸೂಮೋಟೋ ಕೇಸ್ ದಾಖಲಿಸಿಕೊಂಡಿದ್ದಾರೆ. ಮಂಗಳವಾರ (ಅ.8) ಬೆಳ್ಳಂ ಬೆಳಗ್ಗೆ ದಾಳಿ ಮಾಡಿ, ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಎರಡೂ ಚೆಕ್ ಪೋಸ್ಟ್ಗಳಲ್ಲಿ ಸುಮಾರು 20 ಸಾವಿರಕ್ಕೂ ಅಧಿಕ ನಗದು ಪತ್ತೆಯಾಗಿದೆ. ಅಧಿಕಾರಿಗಳು ಪರಿಶೀಲನೆ ಮುಂದುವರೆಸಿದ್ದಾರೆ.
ಬೀದರ್ ಜಿಲ್ಲೆಯ ಹುಮ್ನಾಬಾದ್ ಪಟ್ಟಣದಲ್ಲಿರುವ ಆರ್ಟಿಓ ಚೆಕ್ ಪೋಸ್ಟ್ನಲ್ಲಿನ ಸಿಬ್ಬಂದಿ ವಿರುದ್ಧ ಲಂಚ ಪಡೆದ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಮಂಗಳವಾರ ಬೆಳಗಿನ ಜಾವ 4 ಗಂಟೆ ಸುಮಾರಿಗೆ ಬೀದರ್ ಹಾಗೂ ಕಲಬುರಗಿ ಲೋಕಾಯುಕ್ತ ಅಧಿಕಾರಿಗಳು ಏಕಕಾಲಕ್ಕೆ ದಾಳಿ ಮಾಡಿದ್ದಾರೆ. ಲೋಕಾಯುಕ್ತ ಎಸ್ಪಿ ಬಿ.ಕೆ. ಉಮೇಶ್, ಕಲಬುರಗಿ ಲೋಕಾಯುಕ್ತ ಡಿವೈಎಸ್ಪಿ ಗೀತಾ ಬೀದರ್ ಮತ್ತು ಡಿವೈಎಸ್ಪಿ ಹಣುಮಂತರಾಯ ನೇತೃತ್ವದ 4 ತಂಡದಿಂದ ಪರಿಶೀಲನೆ ನಡೆಯುತ್ತಿದೆ.
ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಧೂಳಖೇಡ್ ಬಳಿ ಇರುವ ಆರ್ಟಿಓ ಚೆಕ್ ಪೋಸ್ಟ್ ಮೇಲೆ ಲೋಕಾಯುಕ್ತ ಎಸ್ಪಿ ಮಲ್ಲೇಶ ನೇತೃತ್ವದ ತಂಡ ದಾಳಿ ಮಾಡಿದ್ದು, ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದೆ. ಹಾಗೇ, ಬಳ್ಳಾರಿ ತಾಲೂಕಿನ ಪಿಡಿ ಹಳ್ಳಿ ಸಮೀಪದ ಆರ್ಟಿಓ ಚೆಕ್ ಪೋಸ್ಟ್ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಲೋಕಾಯುಕ್ತ ಎಸ್ಪಿ ಸಿದ್ದರಾಜು ನೇತೃತ್ವದ ತಂಡ ಮಧ್ಯರಾತ್ರಿ 2 ಗಂಟೆ ಸುಮಾರಿಗೆ ದಾಳಿ ಮಾಡಿದೆ. ಅಧಿಕಾರಿಗಳು ಚೆಕ್ ಪೋಸ್ಟ್ನಲ್ಲಿದ್ದ ಹಣವನ್ನು ವಶಪಡಿಸಿಕೊಂಡಿದ್ದು, ಶೋಧ ಕಾರ್ಯ ಮುಂದುವರೆದಿದೆ.