Mysore MUDA case | ಸಿಎಂ ಪತ್ನಿ ವಿಚಾರಣೆ ನಡೆಸಿದ ಲೋಕಾಯುಕ್ತ ಎಸ್ಪಿ

ಮೈಸೂರು ಲೋಕಾಯುಕ್ತ ಎಸ್.ಪಿ. ಉದೇಶ್ ನೇತೃತ್ವದಲ್ಲಿ ಪಾರ್ವತಿ ಅವರನ್ನು ಗೌಪ್ಯ ಸ್ಥಳದಲ್ಲಿ ವಿಚಾರಣೆ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.

Update: 2024-10-25 13:45 GMT

ಮುಡಾ ಪ್ರಕರಣದ ಎರಡನೇ ಆರೋಪಿಯಾಗಿರುವ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ. ಪಾರ್ವತಿ ಅವರನ್ನು ಲೋಕಾಯುಕ್ತ ಪೊಲೀಸರು ಗೌಪ್ಯ ಸ್ಥಳದಲ್ಲಿ ವಿಚಾರಣೆ ನಡೆಸಿದ್ದಾರೆ.

ಮೈಸೂರು ಅಭಿವೃದ್ಧಿ ಪ್ರಾಧಿಕಾರದಿಂದ 50-50 ಅನುಪಾತದಡಿ 14 ನಿವೇಶನ ಪಡೆದಿದ್ದು, ಬಹುಕೋಟಿ ಅವ್ಯವಹಾರ ನಡೆದ ಆರೋಪದ ಮೇಲೆ ಸಿಎಂ ಸಿದ್ದರಾಮಯ್ಯ, ಅವರ ಪತ್ನಿ ಬಿ.ಎಂ. ಪಾರ್ವತಿ, ಮಲ್ಲಿಕಾರ್ಜುನ ಸ್ವಾಮಿ ಹಾಗೂ ದೇವರಾಜು ಎಂಬುವರ ವಿರುದ್ಧ ಲೋಕಾಯುಕ್ತ ಪೊಲೀಸರು ನ್ಯಾಯಾಲಯದ ಸೂಚನೆ ಮೇರೆಗೆ ಪ್ರಕರಣ ದಾಖಲಿಸಿ, ತನಿಖೆ ಆರಂಭಿಸಿದ್ದಾರೆ.

ಮೈಸೂರು ಲೋಕಾಯುಕ್ತ ಎಸ್.ಪಿ. ಉದೇಶ್ ನೇತೃತ್ವದಲ್ಲಿ ಪಾರ್ವತಿ ಅವರನ್ನು ಗೌಪ್ಯ ಸ್ಥಳದಲ್ಲಿ ವಿಚಾರಣೆ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಈವರೆಗೆ ಮುಡಾ ಪ್ರಕರಣದಲ್ಲಿ ಪಾರ್ವತಿ ಅವರು ಎಲ್ಲಿಯೂ ಸಾರ್ವಜನಿಕವಾಗಿ ಕಾಣಿಸಿಕೊಂಡಿಲ್ಲ. ಆರೋಪಗಳಿಂದ ಬೇಸರಗೊಂಡು 14 ನಿವೇಶನಗಳನ್ನು ಹಿಂತಿರುಗಿಸಿದ್ದರು.

ಲೋಕಾಯುಕ್ತ ಪೊಲೀಸರು ಸುಮಾರು ಮೂರು ತಾಸುಗಳ ಕಾಲ ಪಾರ್ವತಿ ಅವರನ್ನು ವಿಚಾರಣೆಗೆ ಒಳಪಡಿಸಿದ್ದು, ಸಾಲು- ಸಾಲು ಪ್ರಶ್ನೆಗಳಿಗೆ ಸಮಾಧಾನದಿಂದ ಉತ್ತರಿಸಿದ್ದಾರೆ ಎನ್ನಲಾಗಿದೆ. ಲೋಕಾಯುಕ್ತ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿ ಸುಮಾರು 20 ಪ್ರಶ್ನೆಗಳನ್ನು ಕೇಳಿದ್ದಾರೆ ಎಂದು ಮೂಲಗಳು ಹೇಳಿವೆ.

ವಿಚಾರಣೆ ವೇಳೆ ಅವರ ಉದ್ಯೋಗ, ಆದಾಯದ ಮೂಲ, ಕೆಸರೆ ಗ್ರಾಮದ ಸರ್ವೆ ನಂಬರ್ 464 ರಲ್ಲಿ 3.14 ಎಕರೆ ಭೂಮಿ ಖರೀದಿ, ದಾನ, ನೋಂದಣಿ ಪ್ರಕ್ರಿಯೆ, ಬದಲಿ ನಿವೇಶನದ ಪ್ರಸ್ತಾಪ ಇಟ್ಟವರು, ನಿವೇಶನ ಕೊಟ್ಟವರ ಕುರಿತಂತೆ ಹಲವು ಪ್ರಶ್ನೆಗಳನ್ನು ಕೇಳಿದ್ದಾರೆ ಎಂದು ತಿಳಿದುಬಂದಿದೆ.

Tags:    

Similar News