ಅನುದಾನಿತ ಶಾಲೆಗಳಿಗೂ ಅತಿಥಿ ಶಿಕ್ಷಕರ ನೇಮಕ: ಸಚಿವ ಮಧು ಬಂಗಾರಪ್ಪ
ಶನಿವಾರ ಶಿವಮೊಗ್ಗದಲ್ಲಿ ಪ್ರೆಸ್ ಟ್ರಸ್ಟ್ ಆಯೋಜಿಸಿದ್ದ ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಅವರು, ಈ ಅತಿಥಿ ಶಿಕ್ಷಕರಿಗೆ ಸರ್ಕಾರದಿಂದಲೇ ಗೌರವಧನ ಪಾವತಿಸಲಾಗುವುದು ಎಂದು ಸ್ಪಷ್ಟಪಡಿಸಿದರು.
ಶಿಕ್ಷಣ ಸಚಿವ ಮಧು ಬಂಗಾರಪ್ಪ
ರಾಜ್ಯದ ಕನ್ನಡ ಮಾಧ್ಯಮ ಅನುದಾನಿತ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸರ್ಕಾರದಿಂದಲೇ ಅತಿಥಿ ಶಿಕ್ಷಕರನ್ನು ನೇಮಿಸಲು ನಿರ್ಧರಿಸಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಶನಿವಾರ ಶಿವಮೊಗ್ಗದಲ್ಲಿ ಪ್ರೆಸ್ ಟ್ರಸ್ಟ್ ಆಯೋಜಿಸಿದ್ದ ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಅವರು, ಈ ಅತಿಥಿ ಶಿಕ್ಷಕರಿಗೆ ಸರ್ಕಾರದಿಂದಲೇ ಗೌರವಧನ ಪಾವತಿಸಲಾಗುವುದು ಎಂದು ಸ್ಪಷ್ಟಪಡಿಸಿದರು. ಕನ್ನಡ ಮಾಧ್ಯಮ ಶಾಲೆಗಳನ್ನು ಉಳಿಸಿ, ಬಲಪಡಿಸುವ ಉದ್ದೇಶದಿಂದ ಸರ್ಕಾರ ಈ ಮಹತ್ವದ ನಿರ್ಧಾರ ಕೈಗೊಂಡಿದೆ ಎಂದು ಅವರು ಹೇಳಿದರು.
18 ಸಾವಿರ ಶಿಕ್ಷಕರ ನೇಮಕಾತಿಗೆ ಶೀಘ್ರ ಅಧಿಸೂಚನೆ
ಅನುದಾನಿತ ಶಾಲೆಗಳಲ್ಲಿನ 6,000 ಮತ್ತು ಸರ್ಕಾರಿ ಶಾಲೆಗಳಲ್ಲಿನ 12,000 ಸೇರಿದಂತೆ ಒಟ್ಟು 18,000 ಶಿಕ್ಷಕರ ನೇಮಕಾತಿಗೆ ಶೀಘ್ರದಲ್ಲೇ ಅಧಿಸೂಚನೆ ಹೊರಡಿಸಲಾಗುವುದು. ಇದರ ಹೊರತಾಗಿಯೂ ಅನುದಾನಿತ ಶಾಲೆಗಳಲ್ಲಿ ಖಾಲಿ ಉಳಿಯುವ ಹುದ್ದೆಗಳಿಗೆ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲು ಆಯಾ ಶಿಕ್ಷಣ ಸಂಸ್ಥೆಗಳಿಗೆ ಅವಕಾಶ ನೀಡಲಾಗುವುದು. ಅಂದಾಜು 4,000 ದಿಂದ 5,000 ಅತಿಥಿ ಶಿಕ್ಷಕರ ಅವಶ್ಯಕತೆ ಇರಬಹುದು ಎಂದು ಸಚಿವರು ಮಾಹಿತಿ ನೀಡಿದರು.
ಇತರ ಪ್ರಮುಖ ನಿರ್ಧಾರಗಳು
1995ರ ನಂತರದ 10 ವರ್ಷಗಳ ಅವಧಿಯಲ್ಲಿ ಆರಂಭವಾದ ಶಾಲೆಗಳನ್ನು ಅನುದಾನಕ್ಕೆ ಒಳಪಡಿಸುವ ಪ್ರಸ್ತಾವನೆ ಸಿದ್ಧವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನುಮೋದನೆ ನೀಡಿದ ತಕ್ಷಣ ಈ ಪ್ರಕ್ರಿಯೆ ಆರಂಭವಾಗಲಿದೆ ಎಂದು ಸಚಿವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಇದಲ್ಲದೆ, ಅಂಗವಿಕಲ ಮಕ್ಕಳಿಗೆ ಚಿಕಿತ್ಸೆ ಮತ್ತು ಶಿಕ್ಷಣವನ್ನು ಒಂದೇ ಕಡೆ ಒದಗಿಸುವ ಸಲುವಾಗಿ ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ಎರಡು ಹೊಸ ವಸತಿಯುತ ಶಾಲೆಗಳನ್ನು ಆರಂಭಿಸಲಾಗುವುದು ಎಂದು ಅವರು ಘೋಷಿಸಿದರು.
ಸಂವಾದದಲ್ಲಿ ಪ್ರೆಸ್ ಟ್ರಸ್ಟ್ ಅಧ್ಯಕ್ಷ ಎನ್. ಮಂಜುನಾಥ್, ಕಾರ್ಯದರ್ಶಿ ನಾಗರಾಜ ನೇರಿಗೆ ಮತ್ತು ಸಂಚಾಲಕ ಚಂದ್ರಶೇಖರ ಹೊನ್ನಾಳಿ ಉಪಸ್ಥಿತರಿದ್ದರು.