Namma Metro Fare Hike | ಪ್ರಯಾಣ ದರ ಹೆಚ್ಚಳ: ಬಿಎಂಆರ್‌ಸಿಎಲ್‌ ವಿರುದ್ಧ ಭುಗಿಲೆದ್ದ ಆಕ್ರೋಶ

ಬೆಂಗಳೂರಿನ ವಿವಿಧ ಮೆಟ್ರೋ ನಿಲ್ದಾಣಗಳ ಮುಂದೆ ಜಮಾಯಿಸಿದ ಕಾಂಗ್ರೆಸ್‌ ಕಾರ್ಯಕರ್ತರು ಮೆಟ್ರೋ ಪ್ರಯಾಣ ದರ ಏರಿಕೆ ಮಾಡಿದ ಕೇಂದ್ರ ಸರ್ಕಾರ ಹಾಗೂ ಬಿಎಂಆರ್‌ಸಿಎಲ್‌ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.;

Update: 2025-02-12 11:17 GMT
ಬೆಂಗಳೂರಿನ ರಾಜಾಜಿನಗರ ಮೆಟ್ರೋ ನಿಲ್ದಾಣದಲ್ಲಿ ಕಾಂಗ್ರೆಸ್‌ ಮಹಿಳಾ ಕಾರ್ಯಕರ್ತರು ಪ್ರಯಾಣ ದರ ಏರಿಕೆ ಖಂಡಿಸಿ ಪ್ರತಿಭಟನೆ ನಡೆಸಿದರು

ಬೆಂಗಳೂರಿನಲ್ಲಿ ʼನಮ್ಮ ಮೆಟ್ರೋʼ ಪ್ರಯಾಣ ದರ ಏರಿಕೆಗೆ ಮತ್ತಷ್ಟು ವಿರೋಧ ವ್ಯಕ್ತವಾಗುತ್ತಿದೆ. ಏಕಾಏಕಿ ಶೇ 50-100ರಷ್ಟು ಏರಿಕೆ ಮಾಡಿರುವ ಪ್ರಯಾಣ ದರವನ್ನು ಕೂಡಲೇ ಹಿಂಪಡೆಯಬೇಕು ಎಂದು ಕಾಂಗ್ರೆಸ್ ಕಾರ್ಯಕರ್ತರು ಬುಧವಾರ ಪ್ರತಿಭಟನೆ ನಡೆಸಿದರು.

ಬೆಂಗಳೂರಿನ ವಿವಿಧ ಮೆಟ್ರೋ ನಿಲ್ದಾಣಗಳ ಮುಂದೆ ಜಮಾಯಿಸಿದ ಕಾರ್ಯಕರ್ತರು ಕೇಂದ್ರ ಸರ್ಕಾರ ಹಾಗೂ ಬಿಎಂಆರ್ಸಿಎಲ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರ ಬೆಲೆ ಏರಿಕೆ ಧೋರಣೆಯನ್ನು ಮುಂದುವರೆಸಿದೆ. ಬೆಂಗಳೂರಿನಲ್ಲಿ ಜನಸಾಮಾನ್ಯರು ಸಂಚರಿಸುವ ʼನಮ್ಮ ಮೆಟ್ರೋʼ ಪ್ರಯಾಣ ದರವನ್ನು ದುಪ್ಪಟ್ಟು ಮಾಡಿದ್ದು, ಇದರಿಂದ ನಾಗರಿಕರು ತೊಂದರೆ ಅನುಭವಿಸುವಂತಾಗಿದೆ. ಬಿಜೆಪಿ ನಾಯಕರು ಅತ್ಯ ಅರಿಯದೇ ರಾಜ್ಯ ಸರ್ಕಾರದ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ಮೆಟ್ರೋ ಪ್ರಯಾಣ ದರ ಏರಿಕೆಗೆ ಕಾರಣ ಯಾರು ಎಂಬುದನ್ನು ಸಿಎಂ ಸಿದ್ದರಾಮಯ್ಯ ಅವರು ವಿವರಿಸಿದ್ದಾರೆ. ಹೀಗಿರುವಾಗ ಬಿಜೆಪಿ ನಾಯಕರು ನಾಚಿಕೆಯಿಲ್ಲದೇ ಪ್ರತಿಭಟನೆ ನಡೆಸುತ್ತಿದ್ದಾರೆ. ರಾಜ್ಯದ ಹಿತಾಸಕ್ತಿಯ ಬಗ್ಗೆ ಕಿಂಚಿತ್ತು ಕಾಳಜಿ ಇದ್ದರೆ ರಾಜ್ಯದ ಬಿಜೆಪಿ ಸಂಸದರು ಕೂಡಲೇ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಿ ಪ್ರಯಾಣ ದರ ಇಳಿಕೆ ಮಾಡಲಿ ಎಂದು ಆಗ್ರಹಿಸಿದರು.

ಮೆಟ್ರೋ ಪ್ರಯಾಣ ದರ ಹೆಚ್ಚಳದ ವಿರುದ್ಧ ಪ್ರಧಾನಿ ಮೋದಿಯವರ ಮುಖವಾಡ ಧರಿಸಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್‌ ಕಾರ್ಯಕರ್ತರು

ಪ್ರಧಾನಿ ಮೋದಿ ಮುಖವಾಡ ಧರಿಸಿ ಪ್ರತಿಭಟನೆ

ರಾಜಾಜಿನಗರ ಮೆಟ್ರೋ ನಿಲ್ದಾಣದಿಂದ ಮಂತ್ರಿ ಮಾಲ್‌ ಮೆಟ್ರೋವರೆಗೆ ಕಾಂಗ್ರೆಸ್‌ ಕಾರ್ಯಕರ್ತರು ವಿಭಿನ್ನವಾಗಿ ಪ್ರತಿಭಟನೆ ನಡೆಸಿದರು. ಕಾರ್ಯಕರ್ತರೊಬ್ಬರು ಪ್ರಧಾನಿ ಅವರಂತೆ ವೇಷ ಹಾಗೂ ಮುಖವಾಡ ಧರಿಸಿದರೆ, ಉಳಿದವರು ಕಿವಿಯ ಮೇಲೆ ಹೂವು ಇಟ್ಟುಕೊಂಡು ಪ್ರತಿಭಟನೆ ನಡೆಸಿದರು. 

ಮೆಟ್ರೋ ಪ್ರಯಾಣ ದರ ಏರಿಕೆಗೆ ಕೇಂದ್ರ ಸರ್ಕಾರವೇ ಕಾರಣ ಎಂದು ಆರೋಪಿಸಿ ಬೆಂಗಳೂರು ಉತ್ತರ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಮಹಾಲಕ್ಷ್ಮಿ ಮೆಟ್ರೋ ನಿಲ್ದಾಣದ ಮುಂದೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಪ್ರಯಾಣಿಕರಿಗೆ ಗುಲಾಬಿ ಹೂವು ನೀಡಿ ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು.

ಬೆಂಗಳೂರಿನ ಮೆಟ್ರೋ ರೈಲಿನಲ್ಲಿ ಪ್ರಯಾಣಿಕರೊಬ್ಬರು ಪ್ರಯಾಣ ದರ ಇಳಿಕೆಗೆ ಒತ್ತಾಯಿಸಿ ಭಿತ್ತಿಪತ್ರ  ಪ್ರದರ್ಶಿಸಿದರು

ರೈಲು ಪ್ರಯಾಣಿಕರೊಬ್ಬರು ಪ್ರಯಾಣ ದರ ಇಳಿಸುವಂತೆ ಭಿತ್ತಿಪತ್ರ ಹಿಡಿದು ಮೆಟ್ರೋ ರೈಲಿನ ಒಳಗೆ ಪ್ರತಿಭಟನೆ ದಾಖಲಿಸಿರುವ ಫೋಟೊ ವೈರಲ್‌ ಆಗಿದೆ. ಮೆಟ್ರೋ ರೈಲು ಪ್ರಯಾಣಿಕರು ಭಿತ್ತಿಪತ್ರ ಹಿಡಿದು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಇನ್ನು ಹಲವು ಪ್ರಯಾಣಿಕರು ಸಾಮಾಜಿಕ ಜಾಲತಾಣದಲ್ಲಿ ಪ್ರಯಾಣ ದರ ಏರಿಕೆಗೆ ಆಕ್ರೋಶ ಹೊರ ಹಾಕುತ್ತಿದ್ದಾರೆ. ಇಷ್ಟೆಲ್ಲಾ ಪ್ರತಿಭಟನೆಗಳು, ವಿರೋಧ ವ್ಯಕ್ತವಾಗುತ್ತಿದ್ದರೂ ಬಿಎಂಆರ್‌ಸಿಎಲ್‌ ಅಧಿಕಾರಿಗಳು ಜಾಣಕುರುಡು ಪ್ರದರ್ಶಿಸುತ್ತಿರುವುದು ಪ್ರಯಾಣಿಕರನ್ನು ಕೆರಳಿಸುತ್ತಿದೆ.

ಮಹಿಳಾ ಕಾರ್ಯಕರ್ತೆಯರಿಂದ ಭಿತ್ತಿಪತ್ರ ಪ್ರದರ್ಶನ

ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ರಾಜಾಜಿನಗರ ಮೆಟ್ರೋ ನಿಲ್ದಾಣದ ಎದುರು ಭಿತ್ತಿಪತ್ರ ಪ್ರದರ್ಶಿಸಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು. ಪ್ರಯಾಣ ದರವನ್ನು ಹಿಂಪಡೆಯುವಂತೆ ಆಗ್ರಹಿಸಿದರು.

ಮೆಟ್ರೋ ಪ್ರಯಾಣ ದರ ಇಳಿಸುವಂತೆ ಒತ್ತಾಯಿಸಿ ಬೆಂಗಳೂರಿನ ಶಾಂತಿನಗರದಲ್ಲಿರುವ ಬಿಎಂಆರ್‌ಸಿಎಲ್‌ ವ್ಯವಸ್ಥಾಪಕ ನಿರ್ದೇಶಕರಿಗೆ ಕಾಂಗ್ರೆಸ್‌ ಕಾರ್ಯಕರ್ತರು ಮನವಿ ಸಲ್ಲಿಸಿದರು.

ಬಿಎಂಆರ್‌ಸಿಎಲ್‌ಗೆ ಮನವಿ

ಬೆಂಗಳೂರು ಮೆಟ್ರೋ ರೈಲಿನ ಪ್ರಯಾಣ ದರ ಏರಿಕೆ ಮಾಡಿರುವುದನ್ನು ಹಿಂಪಡೆಯುವಂತೆ ಒತ್ತಾಯಿಸಿ ಮಹಿಳಾ ಕಾಂಗ್ರೆಸ್‌ ಕಾರ್ಯಕರ್ತರು ಬಿಎಂಆರ್‌ಸಿಎಲ್‌ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ ಸಲ್ಲಿಸಿದರು.

ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯರೆಡ್ಡಿ ನೇತೃತ್ವದಲ್ಲಿ ಶಾಂತಿನಗರ ಬಿಎಂಆರ್‌ಸಿಎಲ್‌ ಕಚೇರಿಗೆ ಬಂದ ಕಾರ್ಯಕರ್ತರು ಹಾಗೂ ಮುಖಂಡರು ಕೂಡಲೇ ದರ ಏರಿಕೆ ವಾಪಸ್‌ ಪಡೆಯಬೇಕು ಎಂದು ಆಗ್ರಹಿಸಿದರು.

ದುಪ್ಪಟ್ಟು ದರ ಏರಿಕೆಯಿಂದ ಸಾರ್ವಜನಿಕರಿಗೆ ತೊಂದರೆಯಾಗಿದೆ. ರಾಜ್ಯ ಬಿಜೆಪಿ ನಾಯಕರು ಮೆಟ್ರೋ ದರ ಏರಿಕೆಯ ಬಗ್ಗೆ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಅಪಪ್ರಚಾರ ಮಾಡುತ್ತಿದ್ದು, ಈ ಬಗ್ಗೆ ಕೂಡಲೇ ಸ್ಪಷ್ಟನೆ ನೀಡಬೇಕೆಂದು ಬಿಎಂಆರ್‌ಸಿಎಲ್‌ ಅಧಿಕಾರಿಗಳನ್ನು ಒತ್ತಾಯಿಸಿದರು.

Tags:    

Similar News