ಕನ್ನಡ ಪುಸ್ತಕಗಳ ಸಗಟು ಖರೀದಿಗೆ ಒತ್ತಾಯಿಸಿ ಸಿಎಂಗೆ ಪತ್ರ ಬರೆದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ
ಸಾರ್ವಜನಿಕ ಗ್ರಂಥಾಲಯಗಳಿಗೆ ಕನ್ನಡ ಪುಸ್ತಕಗಳನ್ನು ಸಗಟು ಖರೀದಿ ಮಾಡುವ ಬಗ್ಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.
ಸಾರ್ವಜನಿಕ ಗ್ರಂಥಾಲಯಗಳಿಗೆ ಕನ್ನಡ ಪುಸ್ತಕಗಳನ್ನು ಸಗಟು ಖರೀದಿ ಮಾಡುವ ಬಗ್ಗೆ ಕೇಂದ್ರ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.
ಸಾರ್ವಜನಿಕ ಗ್ರಂಥಾಲಯಗಳಿಗೆ ಕನ್ನಡ ಪುಸ್ತಕಗಳ ಸಗಟು ಖರೀದಿಯನ್ನು ಪುನರಾರಂಭಿಸಬೇಕು ಎಂದು ಪತ್ರದಲ್ಲಿ ಒತ್ತಾಯಿಸಿದ್ದಾರೆ.
ಕಳೆದ ನಾಲ್ಕು–ಐದು ವರ್ಷಗಳಿಂದ ಈ ಖರೀದಿ ಪ್ರಕ್ರಿಯೆ ಸ್ಥಗಿತಗೊಂಡಿರುವ ಬಗ್ಗೆ ಮಾಧ್ಯಮ ವರದಿಗಳಿಂದ ತಿಳಿದಿದೆ. ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಬೆಂಗಳೂರಿನ ಸಪ್ನ ಪುಸ್ತಕ ಮಳಿಗೆಯಲ್ಲಿ ನಡೆದ ಪುಸ್ತಕ ಜಾತ್ರೆಯಲ್ಲಿ ಭಾಗವಹಿಸಿದ್ದ ಪ್ರಕಾಶಕರಿಂದಲೂ ಮಾಹಿತಿ ದೊರೆತಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ನಾಡಿನಲ್ಲಿ ಓದುವ ಸಂಸ್ಕೃತಿ ಬೆಳೆಯಬೇಕು. ಯುವ ಜನರು ಮೊಬೈಲ್ ನಲ್ಲಿ ಕಳೆದುಹೋಗುವ ಬದಲು ಪುಸ್ತಕ ಓದುವ ಹವ್ಯಾಸ ರೂಢಿಸಿಕೊಳ್ಳಬೇಕು. ಓದಿನ ಸಂಸ್ಕೃತಿಯನ್ನು ಉತ್ತೇಜಿಸುವ ಕೆಲಸವನ್ನು ನಾವು ನೀವೆಲ್ಲರೂ ಸೇರಿ ಮಾಡಬೇಕಿದೆ. ವಿಪುಲವಾಗಿ ಬೆಳೆದಿರುವ ಕನ್ನಡ ಸಾಹಿತ್ಯವನ್ನು ಮಾತೃಪ್ರೀತಿಯಿಂದ ನೋಡಬೇಕಾದದ್ದು ನಮ್ಮೆಲ್ಲರ ಕರ್ತವ್ಯ ಎಂದು ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಅವರನ್ನು ಕೋರಿದ್ದಾರೆ.
ಕನ್ನಡ ಸಾಹಿತ್ಯವು ಇಂದು ವ್ಯಾಪಕವಾಗಿ ಬೆಳೆಯುತ್ತಿದೆ. ಈ ಸಾಹಿತ್ಯವನ್ನು ಮಾತೃಭಾಷಾ ಪ್ರೀತಿ ಮತ್ತು ಗೌರವದಿಂದ ಕಾಣುವುದು ನಮ್ಮೆಲ್ಲರ ಕರ್ತವ್ಯ. ಸಾರ್ವಜನಿಕ ಗ್ರಂಥಾಲಯಗಳು ಕೇವಲ ಓದುವ ಸ್ಥಳವಾಗಿರದೆ, ಭಾಷಾಭಿಮಾನ ಬೆಳೆಸುವ ಹಾಗೂ ಸಾಹಿತ್ಯಾಸಕ್ತಿ ಮೂಡಿಸುವ ಕೇಂದ್ರಗಳಾಗಬೇಕು ಎಂದು ತಿಳಿಸಿದ್ದಾರೆ.
ಸಾಮಾನ್ಯರು ಓದುವ ಸಾರ್ವಜನಿಕ ಗ್ರಂಥಾಲಯಗಳಲ್ಲಿ ಭಾಷಾಭಿಮಾನ ಬೆಳೆಸುವ, ಸಾಹಿತ್ಯಾಸಕ್ತಿ ಸೃಷ್ಟಿಸುವ ಕೆಲಸ ಆಗಬೇಕಿದೆ. ಪುಸ್ತಕ ಸಂಸ್ಕೃತಿ ಬೆಳೆದಷ್ಟು ಭಾಷೆ ಸದೃಢವಾಗಿ ಬೆಳೆಯುತ್ತದೆ. ಈ ಹಿನ್ನೆಲೆಯಲ್ಲಿ ತಾವು ತುರ್ತು ಕ್ರಮ ಕೈಗೊಂಡು ಕನ್ನಡ ಪುಸ್ತಕಗಳ ಸಗಟು ಖರೀದಿಗೆ ಕ್ರಮ ಕೈಗೊಳ್ಳಬೇಕು. ಪುಸ್ತಕ ಸಂಸ್ಕೃತಿಯನ್ನು ಬೆಳೆಸಿದಷ್ಟೂ ಭಾಷೆಯ ಅಭಿವೃದ್ಧಿಯೂ ಸಾಧ್ಯ. ಸಾರ್ವಜನಿಕ ಗ್ರಂಥಾಲಯಗಳಲ್ಲಿ ಕನ್ನಡ ಪುಸ್ತಕಗಳ ಸಗಟು ಖರೀದಿಗೆ ತುರ್ತು ಕ್ರಮ ಕೈಗೊಳ್ಳಬೇಕು. ಈ ಮೂಲಕ ಪ್ರಕಾಶಕರಿಗೂ, ಲೇಖಕರಿಗೂ ಪ್ರೋತ್ಸಾಹ ನೀಡಬೇಕು ಎಂದಿದ್ದಾರೆ.
ಕನ್ನಡ ರಾಜ್ಯೋತ್ಸವದ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶುಭಾಶಯ ಕೋರಿ ಪತ್ರವನ್ನು ಮುಕ್ತಾಯಗೊಳಿಸಿದ ಸಚಿವರು ಕನ್ನಡ ಪುಸ್ತಕಗಳ ಖರೀದಿ ಪುನರಾರಂಭವು ಕೇವಲ ಆಡಳಿತಾತ್ಮಕ ಕ್ರಮವಲ್ಲ, ಅದು ಕನ್ನಡ ಸಂಸ್ಕೃತಿಯ ಬುನಾದಿಯನ್ನು ಬಲಪಡಿಸುವ ಹೆಜ್ಜೆಯಾಗಿದೆ ಎಂದು ಹೇಳಿದ್ದಾರೆ.