ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಸಚಿವರನ್ನು ಸಮಾರಂಭಕ್ಕೆ ಆಹ್ವಾಸಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ತಿಳಿಸಿದ್ದಾರೆ.;

Update: 2025-05-12 11:01 GMT

ಸಚಿವೆ ಲಕ್ಷೀ ಹೆಬ್ಬಾಳ್ಕರ್‌ 

ಮುಂಬರುವ ಅಕ್ಟೋಬರ್‌ ತಿಂಗಳಿಗೆ ಕರ್ನಾಟಕದಲ್ಲಿ ಅಂಗನವಾಡಿ ಆರಂಭಗೊಂಡು 50 ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಅದ್ದೂರಿಯಾಗಿ ಸುವರ್ಣ ಮಹೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌  ತಿಳಿಸಿದರು. 

ಅವರು ಸೋಮವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಬೆಂಗಳೂರು ಮತ್ತು ಮೈಸೂರು ವಿಭಾಗದ ಸಮಗ್ರ ಶಿಶು ಅಭಿವೃದ್ಧಿ ಯೋಜನೆ (ಐ.ಸಿ.ಡಿ.ಎಸ್) ಶಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. 

1 ಲಕ್ಷ ಜನರ ಸಮ್ಮುಖದಲ್ಲಿ ಕಾರ್ಯಕ್ರಮ

ಸುವರ್ಣ ಮಹೋತ್ಸವ ಕಾರ್ಯಕ್ರಮ ಆಯೋಜಿಸುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೊತೆ ಈಗಾಗಲೇ ಒಂದು ಸುತ್ತಿನ ಮಾತುಕತೆ ನಡೆಸಲಾಗಿದೆ. ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಸಚಿವರನ್ನು ಸಮಾರಂಭಕ್ಕೆ ಆಹ್ವಾಸಲಾಗುವುದು. ಎಲ್ಲಾ ಅಂಗನವಾಡಿ ಕಾರ್ಯಕರ್ತರು, ಸಹಾಯಕಿಯರು ಸೇರಿದಂತೆ ಇಲಾಖೆಯ ಎಲ್ಲಾ ಸಿಬ್ಬಂದಿ ವರ್ಗ ಸೇರಿಕೊಂಡು 1 ಲಕ್ಷ ಜನರ ಸಮ್ಮುಖದಲ್ಲಿ ಕಾರ್ಯಕ್ರಮ ಆಯೋಜಿಸುವ ಕನಸಿದೆ ಎಂದು ಹೇಳಿದರು.

ಅಧಿಕಾರಿ ಹಾಗೂ ಸಿಬ್ಬಂದಿ ವರ್ಗದವರು ಜವಾಬ್ದಾರಿಯುತವಾಗಿ ಕೆಲಸ ಮಾಡುವ ಮೂಲಕ ಇಲಾಖೆಯ ಪ್ರಗತಿಗೆ ಶ್ರಮಿಸಬೇಕು. ಇಲಾಖೆಯ ಯೋಜನೆಗಳನ್ನು ಸೂಕ್ತ ರೀತಿಯಲ್ಲಿ ನಿರ್ವಹಿಸಬೇಕು ಎಂದರು.

ಕಳೆದ ಬಜೆಟ್‌ನಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಗೌರವಧನವನ್ನು 1 ಸಾವಿರ ರೂಪಾಯಿ ಹೆಚ್ಚಿಸಲಾಗಿದೆ. ಇಡೀ ದೇಶದಲ್ಲಿ ಕರ್ನಾಟಕಕ್ಕೆ ಅತಿಹೆಚ್ಚು ಅಂದರೆ 3800 ಮಿನಿ ಅಂಗನವಾಡಿಗಳಿಗೆ ಕೇಂದ್ರ ಸರ್ಕಾರ ಮಾನ್ಯತೆ ಕೊಟ್ಟಿದೆ. ಕೇಂದ್ರ ಸರ್ಕಾರದ ಮನವೊಲಿಸಿದ ಪರಿಣಾಮ ಇಷ್ಟು ಮಿನಿ ಅಂಗನವಾಡಿ ಕೇಂದ್ರಗಳು ಸಿಕ್ಕಿವೆ ಎಂದು ಎಂದು ಅವರು ತಿಳಿಸಿದರು. 

ನ್ಯಾಯಮೂರ್ತಿ ವೇಣುಗೋಪಾಲ್‌ ಗೌಡ ಸಮಿತಿ ಕೂಡ ನಮ್ಮ ಇಲಾಖೆಯ ಕಾರ್ಯನಿರ್ವಹಣೆಗೆ ಪ್ರಶಂಸೆ ವ್ಯಕ್ತಪಡಿಸಿದೆ. ಇನ್ನು ಮುಂದೆ ವಿಭಾಗದ ಮಟ್ಟದಲ್ಲಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಲಾಗುವುದು ಎಂದು ಅವರು ತಿಳಿಸಿದರು. 

ಯೋಜನೆಗಳ ಬಗ್ಗೆ ವಿಸ್ತೃತ ಚರ್ಚೆ

ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು ಪ್ರಾರಂಭಿಸುವ ಬಗ್ಗೆ, ವಿಭಾಗ ಮಟ್ಟದಲ್ಲಿ ಐ.ಸಿ.ಡಿ.ಎಸ್‌ ಶಾಖೆಯ ವ್ಯಾಪ್ತಿಗೆ ಬರುವ ಪೋಷಣ್‌ ಟ್ರ್ಯಾಕರ್‌ ಅನ್ವಯ ವಿವಿಧ ಸೂಚ್ಯಂಕಗಳ ಪ್ರಗತಿ ಪರಿಶೀಲನೆ, ಐಸಿಡಿಎಸ್‌ ಯೋಜನೆಯ ವಿವಿಧ ಲೆಕ್ಕಶೀರ್ಷಿಕೆಯಡಿ ಬಿಡುಗಡೆಯಾದ ಅನುದಾನ ಮತ್ತು ವೆಚ್ಚದ ವಿವಿರ, ಅಂಗನವಾಡಿ ಕಟ್ಟಡಗಳ ಪ್ರಗತಿ ಪರಿಶೀಲನೆ, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ನೇಮಕಾತಿ ವಿವರ, ಎನ್‌.ಪಿ.ಎಸ್‌ ರೀಕನ್ಸಿಲೇಷನ್‌ ಪ್ರಕ್ರಿಯೆ ಬಾಕಿ ವಿವರ ಹಾಗೂ ಆಯುಷ್ಮಾನ್‌ ಭಾರತ್‌ ಆರೋಗ್ಯ ಕಾರ್ಡ್‌ ಕುರಿತು ಸಚಿವರು ಸಭೆಯಲ್ಲಿ ಮಾಹಿತಿ, ಪಡೆದು ಚರ್ಚೆ ನಡೆಸಿದರು.

ಎಲ್‌ಕೆಜಿ, ಯುಕೆಜಿ ಆರಂಭಕ್ಕೆ ಒತ್ತು

ಪೂರ್ವ ಪ್ರಾಥಮಿಕ ತರಗತಿಗಳನ್ನು (ಎಲ್‌ಕೆಜಿ, ಯುಕೆಜಿ) ಆರಂಭಿಸಲು ಉಪ ನಿರ್ದೇಶಕರು, ಸಿಡಿಪಿಒಗಳು ಸೇರಿದಂತೆ ಇಲಾಖೆಯ ಎಲ್ಲಾ ಅಧಿಕಾರಿಗಳು ಮುತುವರ್ಜಿ ವಹಿಸಬೇಕು. ಪೂರ್ವ ಪ್ರಾಥಮಿಕ ತರಗತಿಗಳನ್ನು ಆರಂಭಿಸುವುದು ಇಲಾಖೆ ಪಾಲಿಗೆ ಪ್ರತಿಷ್ಠೆಯ ಪ್ರಶ್ನೆಯಾಗಿದೆ. ಇಲಾಖೆಗೆ ಉಳಿವಿಗೂ ಎಲ್‌ಕೆಜಿ, ಯುಕೆಜಿ ಸಹಕಾರಿಯಾಗಲಿದೆ ಎಂದು ಅವರು ತಿಳಿಸಿದರು. 

ಸಭೆಯಲ್ಲಿ ಇಲಾಖೆಯ ಕಾರ್ಯದರ್ಶಿ ಡಾ.ಶಾಮ್ಲಾ‌ ಇಕ್ಬಾಲ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರ್ದೇಶಕರಾದ ರಾಘವೇಂದ್ರ, ಸಚಿವರ ಆಪ್ತ ಕಾರ್ಯದರ್ಶಿ ಡಾ.ಟಿ.ಎಚ್.ವಿಶ್ವನಾಥ್, ಸಚಿವರ ವಿಶೇಷ ಕರ್ತವ್ಯಾಧಿಕಾರಿ ಹಾಗೂ ಇಲಾಖೆಯ ಜಂಟಿ ನಿರ್ದೇಶಕ ಬಿ.ಎಚ್.ನಿಶ್ಚಲ್ ಉಪಸ್ಥಿತರಿದ್ದರು.

Tags:    

Similar News