ʼಸ್ತ್ರೀಶಕ್ತಿʼ ಮಾದರಿಯಲ್ಲಿ ʼಗೃಹಲಕ್ಷ್ಮಿʼ ಸಂಘ ಸ್ಥಾಪನೆ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌

ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಸ್ತ್ರೀ ಶಕ್ತಿ ಸ್ವಸಹಾಯ ಗುಂಪುಗಳನ್ನು ಆರಂಭಿಸಿ ದೇಶದ ಆರ್ಥಿಕತೆಗೆ ಶಕ್ತಿ ತುಂಬಲಾಯಿತು, ಈಗ ಅದೇ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮೂಲಕ ಗೃಹಲಕ್ಷ್ಮೀ ಯೋಜನೆ ಜಾರಿಗೆ ತಂದಿರುವುದು ನನ್ನ ಪಾಲಿನ ಅದೃಷ್ಟ ಎಂದು ಲಕ್ಷ್ಮಿ ಹೆಬ್ಬಾಳಕರ್‌ ತಿಳಿಸಿದರು.

Update: 2024-11-24 13:26 GMT

ರಾಜ್ಯದಲ್ಲಿ ಸ್ತ್ರಿಶಕ್ತಿ ಸಂಘಗಳಂತೆ ಗೃಹಲಕ್ಷ್ಮಿ ಸಂಘಗಳನ್ನು ಸ್ಥಾಪಿಸುವ ಮಹತ್ವಾಕಾಂಕ್ಷೆಯ ಯೋಜನೆಯಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

ರಾಮನಗರ ಜಿಲ್ಲೆಯ ಕನಕಪುರದಲ್ಲಿ ಕನಕಾಂಬರಿ ಮಹಿಳಾ ಒಕ್ಕೂಟ ಭಾನುವಾರ ಆಯೋಜಿಸಿದ್ದ ಮಹಿಳಾ‌ ಜಾಗೃತಿ ಸಮಾವೇಶದಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಪ್ರತಿ ಅವಧಿಯಲ್ಲೂ ಮಹಿಳಾ ಪರ ಯೋಜನೆಗಳನ್ನು ಜಾರಿಗೆ ತಂದಿದೆ. ಈ ಹಿಂದೆ ಎಸ್. ಎಂ.ಕೃಷ್ಣ ಅವರ ಅವಧಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾಗಿದ್ದ ಮೋಟಮ್ಮ ಅವರು ಸ್ತ್ರೀ ಶಕ್ತಿ ಸ್ವಸಹಾಯ ಗುಂಪುಗಳನ್ನು ಆರಂಭಿಸಿ ದೇಶದ ಆರ್ಥಿಕತೆಗೆ ಶಕ್ತಿ ತುಂಬಿದರು. ಈಗ ಅದೇ ಇಲಾಖೆಯ ಮೂಲಕ ಗೃಹಲಕ್ಷ್ಮೀ ಯೋಜನೆ ಜಾರಿಗೆ ತಂದಿರುವುದು ನನ್ನ ಪಾಲಿನ ಅದೃಷ್ಟ ಎಂದರು.

ಗೃಹಲಕ್ಷ್ಮಿ ಯೋಜನೆ ಮೂಲಕ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿಸುವ ಉದ್ದೇಶ ಸರ್ಕಾರದ್ದು. ಈ ನಿಟ್ಟಿನಲ್ಲಿ ಗೃಹಲಕ್ಷ್ಮೀ ಸಂಘಗಳ ಮೂಲಕ ಮಹಿಳೆಯರಿಗೆ ಮತ್ತಷ್ಟು ಶಕ್ತಿ ತುಂಬಲು ಗೃಹಲಕ್ಷಿ ಸಂಘಗಳನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ ಎಂದು ತಿಳಿಸಿದರು.

ಜನರನ್ನು ಆರ್ಥಿಕವಾಗಿ ಸಬಲರನ್ನಾಗಿಸಲು ರಾಜ್ಯ ಸರ್ಕಾರವು ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿತು. ಇದರ ಫಲವಾಗಿ 1.24 ಕೋಟಿ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆಯ ಹಣ ತಲುಪುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ‌ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಟಿಯ ಫಲವಾಗಿ ರಾಜ್ಯದಲ್ಲಿ ಮಹಿಳೆಯರ ಸಬಲೀಕರಣ ಸಾಧ್ಯವಾಗಿದೆ ಎಂದು ಅಭಿಪ್ರಾಯಪಟ್ಟರು.

ಕೆಪಿಸಿಸಿ ಅಧ್ಯಕ್ಷರಾದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕೇವಲ ಕರ್ನಾಟಕದ ನಾಯಕರಲ್ಲ. ರಾಷ್ಟ ಮಟ್ಟದ ನಾಯಕರು. ಅಭಿವೃದ್ಧಿಗೆ ಮತ್ತೊಂದು ಹೆಸರೇ ಡಿ.ಕೆ.ಶಿವಕುಮಾರ್. ಬೆಂಗಳೂರು ಮಾದರಿಯಲ್ಲಿ ಕನಕಪುರ ಕ್ಷೇತ್ರವನ್ನು ಅಭಿವೃದ್ಧಿಪಡಿಸಿದ್ದಾರೆ ಎಂದು ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಕೋವಿಡ್ ನಂತಹ ಕಷ್ಟದ ಕಾಲದಲ್ಲಿ ಕಾಂಗ್ರೆಸ್ ಪಕ್ಷವನ್ನು ಸಂಘಟಿಸಿ, 136 ಜನ ಶಾಸಕರು ಆಯ್ಕೆಯಾಗಲು ತುಂಬಾ ಶ್ರಮ ಪಟ್ಟಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ತರುವಲ್ಲಿ ಡಿ.ಕೆ.ಶಿವಕುಮಾರ್ ಅವರ ಪಾತ್ರ ದೊಡ್ಡದು ಎಂದು ಹೇಳಿದರು.

Tags:    

Similar News