ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅಗ್ನಿ ಅವಘಡ; ಡೀನ್ ನೀಡಿದ ಮಾಹಿತಿಯೇನು?

26 ರೋಗಿಗಳನ್ನು ತಕ್ಷಣವೇ ವಿಕ್ಟೋರಿಯಾ ಆಸ್ಪತ್ರೆಯ ಎಚ್ ಬ್ಲಾಕ್‌ಗೆ ಸುರಕ್ಷಿತವಾಗಿ ಸ್ಥಳಾಂತರಿಸಿದೆ ಎಂದು ಅವರು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿ ಮಾಹಿತಿ ನೀಡಲಾಗಿದೆ.;

Update: 2025-07-01 07:51 GMT

ವಿಕ್ಟೋರಿಯಾ ಆಸ್ಪತ್ರೆಯ ಬರ್ನ್ಸ್ ಬ್ಲಾಕ್‌ನ (ಸುಟ್ಟಗಾಯಗಳ ವಿಭಾಗ) ಸೆಮಿನಾರ್ ಕೊಠಡಿಯಲ್ಲಿ ಮಂಗಳವಾರ ಬೆಳಗಿನ ಜಾವ 3 ಗಂಟೆ ಸುಮಾರಿಗೆ ಸ್ವಿಚ್‌ಬೋರ್ಡ್‌ನ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಸಣ್ಣ ಪ್ರಮಾಣದ ಬೆಂಕಿ ಕಾಣಿಸಿಕೊಂಡಿತ್ತು. ಆದರೆ, ಆಸ್ಪತ್ರೆ ಸಿಬ್ಬಂದಿ ಮತ್ತು ಅಗ್ನಿಶಾಮಕ ದಳದವರ ಸಕಾಲಿಕ ಕಾರ್ಯಾಚರಣೆಯಿಂದಾಗಿ ಯಾವುದೇ ದೊಡ್ಡ ಅನಾಹುತ ಸಂಭವಿಸಿಲ್ಲ ಎಂದು ಬಿಎಂಸಿಆರ್‌ಐನ ಡೀನ್ ಮತ್ತು ನಿರ್ದೇಶಕ ಡಾ. ರಮೇಶ್ ಕೃಷ್ಣ ಕೆ. ಮಾಹಿತಿ ನೀಡಿದ್ದಾರೆ. 

ಬೆಂಕಿ ಕಾಣಿಸಿಕೊಂಡ ಕೂಡಲೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಗಿದ್ದು, ಅವರು ತಕ್ಷಣವೇ ಸ್ಥಳಕ್ಕಾಗಮಿಸಿ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಿದ್ದಾರೆ. ಈ ವಾರ್ಡ್‌ನಲ್ಲಿ ಒಟ್ಟು 26 ಸುಟ್ಟಗಾಯಗಳ ರೋಗಿಗಳಿದ್ದರು (14 ಪುರುಷರು, 5 ಮಹಿಳೆಯರು, 7 ಮಕ್ಕಳು), ಅವರಲ್ಲಿ 5 ರೋಗಿಗಳು ತೀವ್ರ ನಿಗಾ ಘಟಕದಲ್ಲಿ (ICU) ಚಿಕಿತ್ಸೆ ಪಡೆಯುತ್ತಿದ್ದರು ಎಂದು ಅವರು ಮಾಹಿತಿ ನೀಡಿದ್ದಾರೆ. 

ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಆಸ್ಪತ್ರೆ ಆಡಳಿತ ಮಂಡಳಿ, ಹೊಗೆಯಿಂದ ಯಾವುದೇ ರೀತಿಯ ಉಸಿರಾಟದ ಸಮಸ್ಯೆಗಳು ಅಥವಾ ಇತರೆ ಅಪಾಯಗಳುಂಟಾಗುವುದನ್ನು ತಡೆಗಟ್ಟುವ ಸಲುವಾಗಿ, ಎಲ್ಲ 26 ರೋಗಿಗಳನ್ನು ತಕ್ಷಣವೇ ವಿಕ್ಟೋರಿಯಾ ಆಸ್ಪತ್ರೆಯ ಎಚ್ ಬ್ಲಾಕ್‌ಗೆ ಸುರಕ್ಷಿತವಾಗಿ ಸ್ಥಳಾಂತರಿಸಿದೆ ಎಂದು ಅವರು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿ ಮಾಹಿತಿ ನೀಡಲಾಗಿದೆ.

ಘಟನೆ ನಡೆದ ಸ್ಥಳದಲ್ಲಿ ಬಿಎಂಸಿಆರ್‌ಐನ ಡೀನ್ ಮತ್ತು ನಿರ್ದೇಶಕರಾದ ಡಾ. ರಮೇಶ್ ಕೃಷ್ಣ ಕೆ., ವಿಕ್ಟೋರಿಯಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ದೀಪಕ್, ಎಚ್‌ಒಡಿ ಡಾ. ಯೋಗೇಶ್ವರಪ್ಪ, ಮತ್ತು ಪ್ಲಾಸ್ಟಿಕ್ ಸರ್ಜರಿ ವಿಭಾಗದ ಪ್ರೊಫೆಸರ್ ಡಾ. ಸ್ಮಿತಾ ಸೇರಿದಂತೆ ಹಿರಿಯ ವೈದ್ಯಕೀಯ ಸಿಬ್ಬಂದಿ ಹಾಜರಿದ್ದು, ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದಾರೆ.

ಎಲ್ಲಾ ರೋಗಿಗಳು, ಅವರ ಸಹಾಯಕರು, ವೈದ್ಯರು ಮತ್ತು ಆಸ್ಪತ್ರೆಯ ಸಿಬ್ಬಂದಿ ಸುರಕ್ಷಿತವಾಗಿದ್ದಾರೆ ಎಂದು ದೃಢಪಡಿಸಿದ್ದಾರೆ. ಪ್ರಸ್ತುತ ಪರಿಸ್ಥಿತಿಯು ಸಂಪೂರ್ಣವಾಗಿ ನಿಯಂತ್ರಣದಲ್ಲಿದೆ ಎಂದು ಡಾ. ರಮೇಶ್ ಕೃಷ್ಣ ಕೆ ಅವರು ಮಾಹಿತಿ ನೀಡಿದ್ದಾರೆ. 

Tags:    

Similar News