Muniratna Case | ಬಿಜೆಪಿ ಶಾಸಕ ಮುನಿರತ್ನಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ

ಅತ್ಯಾಚಾರ ಪ್ರಕರಣದಲ್ಲಿ ಹೆಚ್ಚಿನ ವಿಚಾರಣೆ ಅಗತ್ಯವಿದೆ ಎಂದು ಎಸ್ಐಟಿ ಅಧಿಕಾರಿಗಳು ಸಲ್ಲಿಸಿದ ಮನವಿ ಪರಿಗಣಿಸಿ ನ್ಯಾಯಾಲಯ ಅ.19 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.;

Update: 2024-10-05 09:52 GMT

ಅತ್ಯಾಚಾರ ಹಾಗೂ ಬ್ಲ್ಯಾಕ್‌ಮೇಲ್ ಪ್ರಕರಣದಲ್ಲಿ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಮತ್ತೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ನೀಡಿದೆ.

ವಿಶೇಷ ತನಿಖಾ ತಂಡದ( ಎಸ್ಐಟಿ) ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ಆರೋಪಿ ಮುನಿರತ್ನಅವರನ್ನು ಶನಿವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು.

ಅತ್ಯಾಚಾರ ಪ್ರಕರಣದಲ್ಲಿ ಹೆಚ್ಚಿನ ವಿಚಾರಣೆ ಅಗತ್ಯವಿದೆ ಎಂದು ಎಸ್ಐಟಿ ಅಧಿಕಾರಿಗಳು ಸಲ್ಲಿಸಿದ ಮನವಿ ಪರಿಗಣಿಸಿ ನ್ಯಾಯಾಲಯ ಅ.19 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಸೆ.13 ರಂದು ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಶಾಸಕ ಮುನಿರತ್ನ ಅವರನ್ನು ಕಗ್ಗಲಿಪುರ ಠಾಣೆ ಪೊಲೀಸರು ಬಂಧಿಸಿದ್ದರು. ಸೆ.22 ರಂದು ವಿಶೇಷ ತನಿಖಾ ತಂಡ ಮುನಿರತ್ನ ಅವರನ್ನು ತನ್ನ ಸುಪರ್ದಿಗೆ ಪಡೆದು ಅ.5ರವರೆಗೆ ಕಸ್ಟಡಿಗೆ ಪಡೆದುಕೊಂಡಿತ್ತು. ಇದಕ್ಕೂ ಮುನ್ನ ಶಾಸಕ ಮುನಿರತ್ನ ಅವರನ್ನು ಗುತ್ತಿಗೆದಾರನಿಗೆ ಬೆದರಿಕೆ ಹಾಗೂ ಜಾತಿ ನಿಂದನೆ ಪ್ರಕರಣದಲ್ಲಿ ಬಂಧಿಸಿ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲಾಗಿತ್ತು.

ಈ ಮಧ್ಯೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮುನಿರತ್ನಗೆ 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸುತ್ತಿದ್ದಂತೆ ಅವರ ಪರ ವಕೀಲರು ಮನೆಯ ಊಟಕ್ಕೆ ಅವಕಾಶ ನೀಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಾಲಯ, ನೀವು ಮೊದಲು ಜೈಲು ಅಧಿಕಾರಿಗಳಿಗೆ ಮನವಿ ಸಲ್ಲಿಸಿ, ಒಂದು ವೇಳೆ ಅನುಮತಿ ನೀಡದಿದ್ದರೆ ನ್ಯಾಯಾಲಯದಲ್ಲಿ ಅರ್ಜಿ ಹಾಕಿ ಎಂದು ಹೇಳಿತು.

ಕಗ್ಗಲಿಪುರ ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ರೆಸಾರ್ಟ್ನಲ್ಲಿ ತಮ್ಮ ಮೇಲೆ ಮುನಿರತ್ನ ಹಾಗೂ ಅವರ ಸಹಚರರು ಅತ್ಯಾಚಾರ ನಡೆಸಿದ್ದರು ಎಂದು ಆರೋಪಿಸಿ 40 ವರ್ಷದ ಮಹಿಳೆಯೊಬ್ಬರು ನೀಡಿದ್ದ ದೂರಿನ ಆಧಾರದ ಮೇಲೆ ರಾಜರಾಜೇಶ್ವರಿ ನಗರ ಬಿಜೆಪಿ ಶಾಸಕನನ್ನು ಬಂಧಿಸಲಾಗಿದೆ.

Tags:    

Similar News