ಬೆಂಗಳೂರಿನಲ್ಲಿ ಮೊಬೈಲ್ ಅಂಗಡಿ ಭಸ್ಮ: ಶಾರ್ಟ್ ಸರ್ಕ್ಯೂಟ್‌ನಿಂದ ಲಕ್ಷಾಂತರ ಮೌಲ್ಯದ ವಸ್ತುಗಳು ನಾಶ

ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಬಾಣಸವಾಡಿ ಪೊಲೀಸರು ದೃಢಪಡಿಸಿದ್ದಾರೆ. ಮುಂಜಾನೆ ಸಮಯವಾದ್ದರಿಂದ ಅಂಗಡಿಯಲ್ಲಿ ಯಾರೂ ಇರಲಿಲ್ಲ, ಹೀಗಾಗಿ ಅನಾಹುತ ತಪ್ಪಿದಂತಾಗಿದೆ.

Update: 2025-11-17 07:26 GMT

ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸಿದರು.

Click the Play button to listen to article

ನಗರದ ಬಾಣಸವಾಡಿ ಸಮೀಪದ ಜಯಂತಿ ಸರ್ಕಲ್‌ನಲ್ಲಿರುವ ಮೊಬೈಲ್ ಅಂಗಡಿಯೊಂದರಲ್ಲಿ ಸೋಮವಾರ ಮುಂಜಾನೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಮುಂಜಾನೆ ಸುಮಾರು 4:30ರ ಸಮಯದಲ್ಲಿ ಈ ದುರ್ಘಟನೆ ನಡೆದಿದ್ದು, ಅಂಗಡಿಯಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಮೊಬೈಲ್‌ಗಳು ಮತ್ತು ಇತರ ಎಲೆಕ್ಟ್ರಾನಿಕ್ ಉಪಕರಣಗಳು ಬೆಂಕಿಗೆ ಆಹುತಿಯಾಗಿವೆ.

ಬೆಂಕಿಯ ಕೆನ್ನಾಲಿಗೆಯನ್ನು ಕಂಡ ಸ್ಥಳೀಯರು ತಕ್ಷಣವೇ ಅಗ್ನಿಶಾಮಕ ದಳ ಮತ್ತು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ, ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸುವಲ್ಲಿ ಯಶಸ್ವಿಯಾದರು. ಅಷ್ಟರಲ್ಲಾಗಲೇ ಅಂಗಡಿಯಲ್ಲಿದ್ದ ಬಹುತೇಕ ವಸ್ತುಗಳು ಸುಟ್ಟು ಕರಕಲಾಗಿದ್ದವು.

ಪ್ರಾಣಾಪಾಯದಿಂದ ಪಾರು

ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಬಾಣಸವಾಡಿ ಪೊಲೀಸರು ದೃಢಪಡಿಸಿದ್ದಾರೆ. ಮುಂಜಾನೆ ಸಮಯವಾದ್ದರಿಂದ ಅಂಗಡಿಯಲ್ಲಿ ಯಾರೂ ಇರಲಿಲ್ಲ, ಹೀಗಾಗಿ ಅನಾಹುತ ತಪ್ಪಿದಂತಾಗಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಅವಘಡಕ್ಕೆ ನಿಖರ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಈ ಸಂಬಂಧ ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

Tags:    

Similar News