Modi 3.0 Budget | ರಾಜ್ಯಕ್ಕೆ ಚೊಂಬು ನೀಡಿದ ನಿರ್ಮಲಾ ಸೀತಾರಾಮನ್- ಸಿಎಂ ವ್ಯಂಗ್ಯ
ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ರಾಜ್ಯದ ಯಾವುದೇ ಬೇಡಿಕೆಗಳಿಗೂ ಮನ್ನಣೆ ನೀಡದೆ ಅತ್ಯಂತ ನಿರಾಶಾದಾಯಕ ಬಜೆಟ್ ಮಂಡಿಸಿದ್ದಾರೆ ಎಂದು ಸಿ.ಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ.;
ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ರಾಜ್ಯದ ಯಾವುದೇ ಬೇಡಿಕೆಗಳಿಗೂ ಮನ್ನಣೆ ನೀಡದೆ ಅತ್ಯಂತ ನಿರಾಶಾದಾಯಕ ಬಜೆಟ್ ಮಂಡಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ.
ಅವರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಿರ್ಮಲಾ ಸೀತಾರಾಮನ್ ಅವರು ರಾಜ್ಯದ ಹಿತವನ್ನು ಸಂಪೂರ್ಣವಾಗಿ ನಿರ್ಲಕ್ಷಿಸುವ ಮೂಲಕ ರಾಜ್ಯದ ಜನತೆಯ ಕೈಗೆ ಚೊಂಬು ಕೊಟ್ಟಿದ್ದಾರೆ. ಪ್ರಧಾನ ಮಂತ್ರಿಗಳು ತಮ್ಮ ಅಧಿಕಾರ ಉಳಿಸಿಕೊಳ್ಳುವ ಉದ್ದೇಶದಿಂದ ಆಂಧ್ರಪ್ರದೇಶ ಮತ್ತು ಬಿಹಾರ ರಾಜ್ಯಗಳಿಗೆ ವಿಶೇಷ ಅನುದಾನ ಒದಗಿಸಿದ್ದು, ಇತರ ರಾಜ್ಯಗಳನ್ನು ಕಡೆಗಣಿಸಿದ್ದಾರೆ ಎಂದು ಕೇಂದ್ರ ಬಜೆಟ್ ಕುರಿತು ಕಟು ವ್ಯಂಗ್ಯದ ಪ್ರತಿಕ್ರಿಯೆ ನೀಡಿದರು.
ಬಜೆಟ್ ಪೂರ್ವ ಸಭೆಯಲ್ಲಿ ರಾಜ್ಯ ಸರ್ಕಾರ ಹಲವಾರು ಮನವಿಗಳನ್ನು ಮುಂದಿರಿಸಿತ್ತು. ಆದರೆ ಯಾವುದೇ ಬೇಡಿಕೆಗಳಿಗೂ ಕೇಂದ್ರ ಹಣಕಾಸು ಸಚಿವರು ಸ್ಪಂದಿಸಿಲ್ಲ. ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ರೂ. ಅನುದಾನ ಒದಗಿಸುವುದಾಗಿ ಹಿಂದಿನ ಬಜೆಟ್‌ನಲ್ಲಿ ನಿರ್ಮಲಾ ಸೀತಾರಾಮ್ ಅವರೇ ಘೋಷಿಸಿದ್ದರು. ಆದರೆ ಈ ಯೋಜನೆಗೆ ನಯಾ ಪೈಸೆ ಒದಗಿಸಿಲ್ಲ. ಈ ಆಯವ್ಯಯದಲ್ಲಿ ಒದಗಿಸುವಂತೆ ಕೋರಲಾಗಿತ್ತು. ಕಲ್ಯಾಣ ಕರ್ನಾಟಕ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಈ ವರ್ಷ ಐದು ಸಾವಿರ ಕೋಟಿ ರೂ. ಅನುದಾನ ಒದಗಿಸುತ್ತಿದೆ. ಆದರೆ ಇದಕ್ಕೆ ಪೂರಕವಾಗಿ ಹಿಂದುಳಿದ ತಾಲ್ಲೂಕುಗಳಿಗೆ ಅನುದಾನ ಒದಗಿಸುವಂತೆ ಮನವಿ ಮಾಡಲಾಗಿತ್ತು. ಇದೇ ರೀತಿ ಮಹಾದಾಯಿ ಯೋಜನೆ, ಮೇಕೆದಾಟು ಯೋಜನೆ, ಕೃಷ್ಣಾ ಮೇಲ್ದಂಡೆ ಯೋಜನೆಗಳ ಕುರಿತು ಬಜೆಟ್‌ನಲ್ಲಿ ಯಾವುದೇ ಪ್ರಸ್ತಾಪ ಮಾಡದೆ ರೈತರಿಗೆ ಮೋಸ ಮಾಡಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
15 ನೇ ಹಣಕಾಸು ಆಯೋಗದ ಶಿಫಾರಸಿನಂತೆ ಬೆಂಗಳೂರು ಪೆರಿಫೆರಲ್ ರಸ್ತೆ ನಿರ್ಮಾಣ, ಕೆರೆಗಳ ಅಭಿವೃದ್ಧಿ, ಬೆಂಗಳೂರು ನಗರಾಭಿವೃದ್ಧಿ ಯೋಜನೆಗಳಿಗೆ ಒಟ್ಟು 11,485 ಕೋಟಿ ರೂ. ಅನುದಾನವನ್ನು ನೀಡುವಂತೆ ಕೋರಲಾಗಿತ್ತು. ಜೊತೆಗೆ ಹಲವಾರು ವರ್ಷಗಳಿಂದ ರಾಯಚೂರಿನಲ್ಲಿ ಏಮ್ಸ್ ಸ್ಥಾಪಿಸುವಂತೆ ಬೇಡಿಕೆಯಿದ್ದು, ಬಜೆಟ್ ಪೂರ್ವಭಾವಿ ಸಭೆಯಲ್ಲಿಯೂ ಈ ಕುರಿತು ಬೇಡಿಕೆ ಸಲ್ಲಿಸಲಾಗಿತ್ತು. ಈ ಯಾವ ಮನವಿಗಳಿಗೂ ಕೇಂದ್ರ ಸರ್ಕಾರ ಮನ್ನಣೆ ನೀಡಿಲ್ಲ. ಈ ಹಿಂದಿನ ಬಜೆಟ್‌ನಲ್ಲಿ ರಾಜ್ಯಕ್ಕೆ ಘೋಷಿಸಿದ್ದ ಯೋಜನೆಗಳಿಗೇ ಕೇಂದ್ರ ಸರ್ಕಾರ ಇನ್ನೂ ಯಾವುದೇ ಅನುದಾನ ಒದಗಿಸಿಲ್ಲ. ಹೀಗಾಗಿ ಈ ಬಾರಿ ಕೈಗಾರಿಕಾ ಕಾರಿಡಾರ್ ಬಗ್ಗೆ ಪ್ರಸ್ತಾಪಿಸಿರುವುದು ಕೇವಲ ಘೋಷಣೆಯಾಗಿ ಮಾತ್ರ ಉಳಿಯಲಿದೆ ಎಂದರು.
ಈ ಬಜೆಟ್ ಜನವಿರೋಧಿಯಾಗಿದ್ದು, ವಿಶೇಷವಾಗಿ ಬಡವರು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದೆ. ಈ ಬಜೆಟ್ ನಲ್ಲಿ ರೈತರಿಗೆ ದೊಡ್ಡ ಅನ್ಯಾಯ ಮಾಡಿದ್ದಾರೆ. ರೈತರು 5 ವರ್ಷಗಳಿಂದ ಕನಿಷ್ಠ ಬೆಂಬಲ ಬೆಲೆ ಕಾಯ್ದೆ ರಚಿಸಬೇಕೆಂದು ಒತ್ತಾಯ ಮಾಡುತ್ತಿದ್ದಾರೆ. ಆದರೆ ಈ ಬಗ್ಗೆ ಬಜೆಟ್ ನಲ್ಲಿ ಚಕಾರವನ್ನೇ ಎತ್ತಿಲ್ಲ. ಸ್ವಾಮಿನಾಥನ್ ಆಯೋಗದ ಶಿಫಾರಸು ಜಾರಿ ಬಗ್ಗೆಯೂ ಯಾವುದೇ ಮಾತು ಆಡದೆ ರೈತರಿಗೆ ಪಂಗನಾಮ ಹಾಕಲಾಗಿದೆ ಎಂದು ಹೇಳಿದರು.
ಕೇಂದ್ರ ಸಂಪುಟದಲ್ಲಿ ರಾಜ್ಯದ ಐದು ಜನ ಸಚಿವರಾಗಿದ್ದರೂ, ರಾಜ್ಯಕ್ಕೆ ಯಾವುದೇ ಪ್ರಯೋಜನವಾಗಿಲ್ಲ, ಈ ಐದೂ ಮಂದಿ ರಾಜ್ಯಕ್ಕೆ ಅನುಕೂಲ ಮಾಡಿಸುವಲ್ಲಿ ವಿಫಲರಾಗಿದ್ದಾರೆ ಎಂದು ಬಿಜೆಪಿಯ ಸಚಿವರ ವಿರುದ್ಧ ಕಿಡಿಕಾರಿದ ಸಿಎಂ, ಆರೋಗ್ಯ, ರಕ್ಷಣೆ, ಆರೋಗ್ಯ, ಐಟಿ ಮತ್ತು ಸಂವಹನ ಕ್ಷೇತ್ರಗಳಿಗೆ ಕಳೆದ ಫೆಬ್ರವರಿಯಲ್ಲಿ ಮಂಡಿಸಲಾಗಿದ್ದ ಮಧ್ಯಂತರ ಬಜೆಟ್‌ನಲ್ಲಿ ಘೋಷಿಸಿದ್ದ ಅನುದಾನವನ್ನು ಈಗ ಕಡಿತಗೊಳಿಸಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಅಲ್ಪಸಂಖ್ಯಾತ ಅಭಿವೃದ್ಧಿಗೆ ಅನುದಾನದಲ್ಲೂ ಗಣನೀಯವಾಗಿ ಕಡಿತಗೊಳಿಸಿರುವುದು ಈ ಸಮುದಾಯಗಳಿಗೆ ಎಸಗಿರುವ ದ್ರೋಹವಾಗಿದೆ ಎಂದು ಹೇಳಿದ್ದಾರೆ.
ರಾಜ್ಯಕ್ಕೆ 16ನೇ ಹಣಕಾಸು ಆಯೋಗ ಭೇಟಿ
ಕೇಂದ್ರದ 16 ನೇ ಹಣಕಾಸು ಆಯೋಗವು ಆಗಸ್ಟ್ 28 ರಂದು ರಾಜ್ಯಕ್ಕೆ ಭೇಟಿ ನೀಡಲಿದ್ದು, ಈ ಸಂದರ್ಭದಲ್ಲಿ ಹಿಂದಿನ ಬಾರಿ ರಾಜ್ಯಕ್ಕೆ ಆಗಿರುವ ಅನ್ಯಾಯ ಸರಿಪಡಿಸುವಂತೆ ಮನವಿ ಮಾಡಲಾಗುವುದು. ಈ ಕುರಿತು ಸಮರ್ಥವಾಗಿ ವಿಷಯ ಮಂಡಿಸಲು ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿಗಳು ಇದೇ ಸಂದರ್ಭದಲ್ಲಿ ಮಾಹಿತಿ ನೀಡಿದರು.
ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾದ ಬಸವರಾಜ ರಾಯರೆಡ್ಡಿ, ಸರ್ಕಾರದ ಅಪರ ಮುಖ್ಯಕಾರ್ಯದರ್ಶಿ ಎಲ್.ಕೆ.ಅತೀಕ್, ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು, ನಸೀರ್ ಅಹಮದ್ ಉಪಸ್ಥಿತರಿದ್ದರು.