ಕುಮಾರಸ್ವಾಮಿ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿದ ಮೋದಿ; ಭಾವುಕರಾದ ಕುಮಾರಸ್ವಾಮಿ
ಉಕ್ಕು ಮತ್ತು ಭಾರೀ ಕೈಗಾರಿಕೆಗಳಲ್ಲಿ ತಮ್ಮ ಕೆಲಸದ ಮೂಲಕ ಆತ್ಮನಿರ್ಭರತೆಯತ್ತ ನಮ್ಮ ಪ್ರಯತ್ನಗಳನ್ನು ಬಲಪಡಿಸುತ್ತಿದ್ದೀರ. ಸಮಾಜ ಸೇವೆಯಲ್ಲಿ ನಿಮಗೆ ದೀರ್ಘ ಮತ್ತು ಆರೋಗ್ಯಕರ ಜೀವನ ಸಿಗಲಿ ಎಂದು ಮೋದಿ ಕುಮಾರಸ್ವಾಮಿಗೆ ಹಾರೈಸಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಕುಮಾರಸ್ವಾಮಿ ಅವರಿಗೆ ಜನ್ಮದಿನದ ಶುಭಾಶಯ ಕೋರಿದ್ದಾರೆ.
ಕೇಂದ್ರದ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ, ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರು ಇಂದು 66ನೇ ಹುಟ್ಟುಹಬ್ಬ ಆಚರಿಸುತ್ತಿದ್ದು, ಅವರಿಗೆ ಪ್ರಧಾನಿ ನರೇಂದ್ರ ಮೋದಿ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿದಂತೆ ಗಣ್ಯರು ಸಾಮಾಜಿಕ ಮಾಧ್ಯಮಗಳಲ್ಲಿ ಶುಭ ಹಾರೈಸಿದ್ದಾರೆ.
ಕುಮಾರಸ್ವಾಮಿ ಹುಟ್ಟುಬ್ಬಕ್ಕೆ ತಮ್ಮ ಎಕ್ಸ್ ಖಾತೆಯಲ್ಲಿ ಶುಭಾಶಯ ಕೋರಿರುವ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರಾದ ಶ್ರೀ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ಉಕ್ಕು ಮತ್ತು ಭಾರೀ ಕೈಗಾರಿಕೆಗಳಲ್ಲಿ ತಮ್ಮ ಕೆಲಸದ ಮೂಲಕ ಆತ್ಮನಿರ್ಭರತೆಯತ್ತ ನಮ್ಮ ಪ್ರಯತ್ನಗಳನ್ನು ಬಲಪಡಿಸುತ್ತಿದ್ದೀರ. ಸಮಾಜ ಸೇವೆಯಲ್ಲಿ ನಿಮಗೆ ದೀರ್ಘ ಮತ್ತು ಆರೋಗ್ಯಕರ ಜೀವನ ಸಿಗಲಿ ಎಂದು ಹಾರೈಸಿದ್ದಾರೆ.
ಮೋದಿಯ ಹಾರೈಕೆಗೆ ಭಾವುಕಾರ ಕುಮಾರಸ್ವಾಮಿ, ಪ್ರಧಾನಿಯವರ ಶುಭಾಶೀರ್ವಾದದಿಂದ ನಾನು ಭಾವುಕನಾಗಿದ್ದೇನೆ . ಅವರ ಪಿತೃವಾತ್ಸಲ್ಯಕ್ಕೆ ನಾನು ಧನ್ಯನಾಗಿದ್ದೇನೆ. ಮಾನ್ಯ ಪ್ರಧಾನಿಗಳ ಚಿಂತನಶೀಲ ಮಾರ್ಗದರ್ಶನ, ಪ್ರೋತ್ಸಾಹ ಮತ್ತು ನನ್ನ ಮೇಲಿನ ನಂಬಿಕೆಗೆ ನಾನು ಚಿರಋಣಿ ಎಂದು ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ಈ ಶುಭಾಶಯವು ತಮ್ಮಲ್ಲಿ ಹೊಸ ಸ್ಫೂರ್ತಿ ತುಂಬಿದೆ. ಪ್ರಧಾನಮಂತ್ರಿಗಳ ಶುಭಾಶೀರ್ವಾದ ಮತ್ತು ಸಂದೇಶವು ಸಾರ್ವಜನಿಕ ಸೇವೆಯು ಕೇವಲ ಒಂದು ಜವಾಬ್ದಾರಿಯಲ್ಲ, ಬದಲಿಗೆ ರಾಷ್ಟ್ರ, ಸಮಾಜ ಮತ್ತು ಸಾರ್ವಜನಿಕರ ಕಲ್ಯಾಣಕ್ಕಾಗಿ ಜೀವಮಾನದ ಅನನ್ಯ ಸಮರ್ಪಣೆಯಾಗಿದೆ ಎಂಬುದನ್ನು ನೆನಪಿಸುತ್ತದೆ ಎಂದು ಅವರು ತಮ್ಮ ಎಕ್ಸ್ ಖಾತೆಯಲ್ಲಿ ತಿಳಿಸಿದ್ದಾರೆ.
ಪ್ರಧಾನಿಯವರು ಸಮರ್ಪಣೆ, ಪರಿಶ್ರಮ ಮತ್ತು ನಿಸ್ವಾರ್ಥ ಸೇವೆಯ ಬಗ್ಗೆ ವ್ಯಕ್ತಪಡಿಸಿದ ಮೆಚ್ಚುಗೆಯು ತಮ್ಮನ್ನು ಮತ್ತಷ್ಟು ಉತ್ತೇಜಿಸಿದೆ ಹಾಗೂ ರಾಷ್ಟ್ರಸೇವೆಗೆ ಸಂಪೂರ್ಣವಾಗಿ ಸಮರ್ಪಿಸಿಕೊಳ್ಳಲು ಪ್ರೇರೇಪಣೆ ನೀಡಿದೆ ಎಂದು ಅವರು ಹೇಳಿದ್ದಾರೆ. ತಮ್ಮನ್ನು ಹರಸಿ ಆಶೀರ್ವದಿಸಿದ ಮಾನ್ಯ ಪ್ರಧಾನಿಗಳಿಗೆ ಹೃದಯಪೂರ್ವಕ ವಿನಮ್ರ ಧನ್ಯವಾದಗಳನ್ನು ಅರ್ಪಿಸಿದ ಅವರು, ತಮ್ಮ ಮೇಲೆ ಪ್ರಧಾನಿಯವರು ಇರಿಸಿರುವ ನಂಬಿಕೆಗೆ ಸದಾ ಋಣಿಯಾಗಿರುವುದಾಗಿ ತಿಳಿಸಿದ್ದಾರೆ.
ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಅವರು ತಮ್ಮ ಮಗನ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿದ್ದು,ʻʻನನ್ನ ಮಗ ಮತ್ತು ಕೇಂದ್ರ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ಅವರಿಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯ ಸಿಗಲೆಂದು ನಾನು ಪ್ರಾರ್ಥಿಸುತ್ತೇನೆ. ಕರ್ನಾಟಕ ಮತ್ತು ಭಾರತದ ಧೈಯಕ್ಕಾಗಿ ಹೆಚ್ಚಿನ ಸಮರ್ಪಣಾಭಾವದಿಂದ ಸೇವೆ ಸಲ್ಲಿಸಲು ಅವರಲ್ಲಿ ತಾಳ್ಮೆ ಮತ್ತು ಶಕ್ತಿ ಹೆಚ್ಚಾಗಲಿ' ಎಂದು ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ 'ಎಕ್ಸ್'ನಲ್ಲಿ ಪೋಸ್ಟ್ ಮಾಡಿದ್ದಾರೆ.
'ಕೇಂದ್ರ ಸಚಿವರು, ಮಾಜಿ ಮುಖ್ಯಮಂತ್ರಿಗಳಾದ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಜನ್ಮದಿನದ ಶುಭಾಶಯಗಳು. ಇನ್ನೂ ಹೆಚ್ಚಿನ ಜನಸೇವೆ ಮಾಡಲು ದೇವರು ಅವರಿಗೆ ಉತ್ತಮ ಆರೋಗ್ಯ ಕರುಣಿಸಲಿ ಎಂದು ಹಾರೈಸುತ್ತೇನೆ' ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ ಅವರು ತಮ್ಮ ಎಕ್ಸ್ ಖಾತೆಯಲ್ಲಿ ತಿಳಿಸಿದ್ದಾರೆ.