ಮೇ 31ರಂದು ರಾಜ್ಯಕ್ಕೆ ಮುಂಗಾರು ಪ್ರವೇಶ: ಹವಾಮಾನ ಇಲಾಖೆ ಮುನ್ಸೂಚನೆ
ರಾಜ್ಯದ ಹಲವು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂಗಾರು ಪೂರ್ವ ಮಳೆ ಅಬ್ಬರಿಸುತ್ತಿದ್ದು, ಮೇ 31ಕ್ಕೆ ರಾಜ್ಯಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ನೈರುತ್ಯ ಮುಂಗಾರು ಮಳೆ ಕೇರಳದ ಮೂಲಕ ರಾಜ್ಯ ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದ್ದು, ಈ ಬಾರಿ ಉತ್ತಮವಾದ ಮುಂಗಾರು ಮಳೆಯಾಗುವ ನಿರೀಕ್ಷೆ ಇದೆ. ಈ ಹಿನ್ನೆಲೆಯಲ್ಲಿ ಮುಂಗಾರು ಮಳೆ ಕೃಷಿ ಚಟುವಟಿಕೆಗಳನ್ನು ನಿರ್ಧರಿಸುವುದರಿಂದ ಸಹಜವಾಗಿಯೇ ರೈತರಲ್ಲಿ ಸಂತಸ ಮನೆ ಮಾಡಿದೆ.
ಇದೇ ಮೇ 31ರಂದು ನೈರುತ್ಯ ಮುಂಗಾರು ಮಳೆ ಕೇರಳದ ಮೂಲಕ ರಾಜ್ಯ ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಈ ಬಾರಿ ಉತ್ತಮವಾದ ಮುಂಗಾರು ಮಳೆಯಾಗುವ ನಿರೀಕ್ಷೆಯಿದ್ದು, ರಾಜ್ಯದ ಜನತೆಗೆ ನಿಟ್ಟುಸಿರು ಬಿಟ್ಟಂತಾಗಿದೆ. ರಾಜ್ಯದಲ್ಲಿ ಇನ್ನೂ 4 ದಿನ ಮಳೆಯಾಗುವ ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕರಾವಳಿಯ ದಕ್ಷಿಣ ಕನ್ನಡ, ಉಡುಪಿಯಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಮಳೆಯಾಗುವ ಸಂಭವವಿದೆ. ಮಲೆನಾಡು, ದಕ್ಷಿಣ ಕರ್ನಾಟಕ ಭಾಗದಲ್ಲಿ ಮಳೆ ಪ್ರಮಾಣ ಕಡಿಮೆ ಇದೆ.
ಮೇ 31ಕ್ಕೆ ನೈರುತ್ಯ ಮುಂಗಾರು ಕೇರಳ ಕರಾವಳಿಗೆ ಆಗಮಿಸುವ ನಿರೀಕ್ಷೆ ಇದೆ. ಅಲ್ಲಿಂದ ಕರ್ನಾಟಕ ಕರಾವಳಿಗೆ ಜೂನ್ 1 ಅಥವಾ 2ರಂದು ಪ್ರವೇಶಿಸಬಹುದು. ಕರಾವಳಿಯಿಂದ ಕ್ರಮೇಣ ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಪ್ರದೇಶಗಳಿಗೆ ವ್ಯಾಪಿಸಲಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.
2023ರಲ್ಲಿ ಜೂನ್‌ನಿಂದ ಸೆಪ್ಟೆಂಬರ್‌ವರೆಗೆ ಸಾಮಾನ್ಯವಾಗಿ 831.8 ಮಿಮೀ ಮಳೆಯಾಗಬೇಕಿತ್ತು. ಆದರೆ, 678.4 ಮಿಮೀ ಮಳೆಯಾಗಿದೆ. ಇದರೊಂದಿಗೆ 18%ರಷ್ಟು ಮಳೆ ಕೊರತೆಯಾಗಿತ್ತು ಎಂದು IMD ತಿಳಿಸಿದೆ. ಇನ್ನು ಈಗಾಗಲೇ ಈವರ್ಷ ಮಾರ್ಚ್ 1 ರಿಂದ ಮೇ 24 ರವರೆಗೆ ರಾಜ್ಯದಲ್ಲಿ 120.7 ಮಿ.ಮೀ ಮಳೆಯಾಗಿದ್ದು, ವಾಡಿಕೆಗಿಂತ (94 ಮಿ.ಮೀ) ಹೆಚ್ಚಾಗಿದೆ. ಪೂರ್ವ ಮುಂಗಾರು ಚುರುಕುಗೊಂಡಿದ್ದರಿಂದ ಈ ಬಾರಿ ಉತ್ತಮ ಮುಂಗಾರು ಮಳೆಯಾಗುವ ಸಾಧ್ಯತೆಗಳಿವೆ.
ಮೇ 31ರವರೆಗೆ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಗಂಟೆಗೆ 40-50 ಕಿಮೀ ವೇಗದಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು IMD ಮುನ್ಸೂಚನೆ ನೀಡಿದೆ. ಅಲ್ಲದೇ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆಯನ್ನು ನೀಡಿದೆ.