ಪ್ರಜ್ವಲ್ ಪೆನ್‌ಡ್ರೈವ್ ಪ್ರಕರಣ | ಕಠಿಣ ಸೆಕ್ಷನ್‌ಗಳ ಅಡಿಯಲ್ಲಿ ನಾಲ್ಕನೇ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲು
ಮನೆಯ ಕೆಲಸದ ಮಹಿಳೆಗೆ ಲೈಂಗಿಕ ದೌರ್ಜನ್ಯ, ಕಿರುಕುಳ ನೀಡಿದ ಆರೋಪದ ಮೇರೆಗೆ ಹೊಳೆನರಸೀಪುರ ಠಾಣೆಯಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಮತ್ತು ಮಾಜಿ ಸಚಿವ ಹೆಚ್.ಡಿ ರೇವಣ್ಣ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಇದೀಗ ನಾಲ್ಕನೇ ದೂರು ದಾಖಲಾಗಿರುವುದು ಪ್ರಜ್ವಲ್ ರೇವಣ್ಣಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ.;
ಲೈಂಗಿಕ ದೌರ್ಜನ್ಯ, ಕಿರುಕುಳ ಆರೋಪ ಎದುರಿಸುತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಬಂಧನ ಭೀತಿಯಿಂದ ದೇಶ ಬಿಟ್ಟು ಪರಾರಿಯಾಗಿದ್ದಾರೆ. ಅವರ ವಿರುದ್ಧ ಇದೀಗ ಮತ್ತೊಂದು ಅತ್ಯಾಚಾರ ಪ್ರಕರಣ ದಾಖಲಾಗಿದ್ದು, ಮತ್ತಷ್ಟು ಸಂಕಷ್ಟ ಎದುರಾಗಿದೆ.
ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾಗಿರುವ ಅಶ್ಲೀಲ ವಿಡಿಯೋ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿ ಅಧಿಕಾರಿಗಳು, ವಿಡಿಯೋದಲ್ಲಿದ್ದ ಕೆಲ ಮಹಿಳೆಯರನ್ನು ಸಂಪರ್ಕಿಸಿ ದೂರು ನೀಡುವಂತೆ ಹೇಳಿದ್ದರು. ಈ ಪೈಕಿ ಮಹಿಳೆಯೊಬ್ಬರು ಎಸ್ಐಟಿ ಅಧಿಕಾರಿಗಳ ಬಳಿ ಹೇಳಿಕೆ ನೀಡಿದ್ದಾರೆಂದು ತಿಳಿದುಬಂದಿದೆ.
ಸಂತ್ರಸ್ತ ಮಹಿಳೆಯ ಹೇಳಿಕೆ ಆಧರಿಸಿ ಅಧಿಕಾರಿಗಳು ಈಗಾಗಲೇ ಲೈಂಗಿಕ ದೌರ್ಜನ್ಯ ಆರೋಪದಡಿ ದಾಖಲಾಗಿದ್ದ ಎಫ್ಐಆರ್ಗೆ ಹೊಸದಾಗಿ ಐಪಿಸಿ ಸೆಕ್ಷನ್ 376 ಅನ್ನು ಸೇರ್ಪಡೆಗೊಳಿಸುವ ಮೂಲಕ ಅತ್ಯಾಚಾರ ಪ್ರಕರಣ ದಾಖಲಿಸಿಕೊಂಡಿದ್ದಾರೆಂದು ವರದಿಗಳು ತಿಳಿಸಿವೆ.
ಇದೀಗ ಪ್ರಜ್ವಲ್ ರೇವಣ್ಣ ಮೇಲೆ ದಾಖಲಾಗಿರುವ ಎಫ್‌ಐಆರ್‌ಗಳಲ್ಲಿ ಐಪಿಸಿ 376, 2k, (ನಿರಂತರ ಅತ್ಯಾಚಾರ) 2n, (ಒಪ್ಪಿತವಿಲ್ಲದ ಲೈಂಗಿಕತೆಗೆ ಬಳಸಿಕೊಂಡಿರುವುದು) 354a, (ಮಹಿಳೆಯ ಇಚ್ಛೆಗೆ ವಿರುದ್ಧವಾಗಿ ಅಶ್ಲೀಲತೆಯನ್ನು ತೋರಿಸುವುದು ಮತ್ತು ಲೈಂಗಿಕ ಟೀಕೆಗಳನ್ನು ಮಾಡುವುದು ಸೇರಿದಂತೆ ವಿವಿಧ ರೀತಿಯ ಅನಪೇಕ್ಷಿತ ಲೈಂಗಿಕ ನಡವಳಿಕೆಯನ್ನು ಒಳಗೊಳ್ಳುತ್ತದೆ.) 4c, (ಮಹಿಳೆಯ ಸಮ್ಮತಿಯಿಲ್ಲದೆ ಖಾಸಗಿ ಅಂಗಗಳನ್ನು ಸೆರೆಹಿಡಿಯುವದು) 506 (ಬೆದರಿಕೆಯೊಡ್ಡುವುದು) ಸೆಕ್ಷನ್‌ಗಳನ್ನು ಸೇರಿಸಲಾಗಿದೆ. ಇವೆಲ್ಲವೂ ಪ್ರಜ್ವಲ್ ಕಾನೂನು ಕುಣಿಕೆಯಿಂದ ತಪ್ಪಿಸಿಕೊಳ್ಳಲು ಪರದಾಟ ಮಾಡಬೇಕಾದ ಭಾರತೀಯ ದಂಡಸಂಹಿತೆ ಸೆಕ್ಷನ್‌ಗಳಾಗಿವೆ.
ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದ ಆರೋಪದಡಿಯಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಹೊಸದಾಗಿ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಇದು ಪ್ರಜ್ವಲ್ ರೇವಣ್ಣ ಅವರ ವಿರುದ್ಧ ದಾಖಲಾದ ನಾಲ್ಕನೇ ಅತ್ಯಾಚಾರ ಪ್ರಕರಣವಾಗಿದೆ.
ಮನೆಯ ಕೆಲಸದ ಮಹಿಳೆಗೆ ಲೈಂಗಿಕ ದೌರ್ಜನ್ಯ, ಕಿರುಕುಳ ನೀಡಿದ ಆರೋಪದ ಮೇರೆಗೆ ಹೊಳೆನರಸೀಪುರ ಠಾಣೆಯಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಮತ್ತು ಮಾಜಿ ಸಚಿವ ಹೆಚ್.ಡಿ ರೇವಣ್ಣ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಈ ಪ್ರಕರಣದ ವಿಚಾರಣೆಗೆ ಹಾಜರಾಗುವಂತೆ ತಂದೆ-ಮಗನಿಗೆ ಎಸ್ಐಟಿ ನೋಟಿಸ್ ನೀಡಿದೆ. ಆದರೆ ಎಸ್ಐಟಿ ವಿಚಾರಣೆಗೆ ಹಾಜರಾಗದೆ ಕಾಲಾವಕಾಶ ಕೋರಿದ್ದಾರೆ. ಈ ಬೆಳವಣಿಗೆ ಬೆನ್ನಲ್ಲೇ ಮತ್ತೊಂದು ದೂರು ದಾಖಲಾಗಿರುವುದು ಪ್ರಜ್ವಲ್ ರೇವಣ್ಣಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ.