ಮುಡಾ ಪ್ರಕರಣ ತೀರ್ಪು | ಸಿಎಂ ರಾಜೀನಾಮೆಗೆ ಆಗ್ರಹಿಸಿ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ
ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನನ್‌ಗೆ ನೀಡಿದ್ದ ಅನುಮತಿ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ ಬೆನ್ನಲ್ಲೆ ಬಿಜೆಪಿ ಸಿಎಂ ರಾಜೀನಾಮಗೆ ಒತ್ತಾಯಿಸಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದೆ.;
ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನನ್‌ಗೆ ನೀಡಿದ್ದ ಅನುಮತಿ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಇದರ ಬೆನ್ನಲ್ಲೆ ಸಿಎಂ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದೆ.
ಬೆಂಗಳೂರು ಮತ್ತು ವಿವಿಧ ಜಿಲ್ಲಾ ಕೇಂದ್ರಗಳಲ್ಲಿ ಬಿಜೆಪಿ ನಡೆಸಿದ ಪ್ರತಿಭಟನೆಯಲ್ಲಿ ಕೇಂದ್ರ ಸಚಿವರು, ಸಂಸದರು ಸೇರಿದಂತೆ ವಿವಿಧ ನಾಯಕರು ಭಾಗವಹಿಸಿದ್ದರು.
ಹುಬ್ಬಳ್ಳಿಯಲ್ಲಿ ಪ್ರತಿಭಟನೆ
ಮುಡಾದಲ್ಲಿ ಅಕ್ರಮವಾಗಿ ಸೈಟು ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ವಿರುದ್ಧ ಹೈಕೋರ್ಟ್ ರಾಜ್ಯಪಾಲರ ನಿರ್ಧಾರ ಎತ್ತಿ ಹಿಡಿದಿದೆ. ಇದರಿಂದ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ನೀಡಿರುವ ಅನುಮತಿ ನಿರ್ಧಾರ ಸರಿಯಾಗಿದೆ ಎಂದು ತಿಳಿಸಿದೆ. ಆ ಹಿನ್ನೆಲೆಯಲ್ಲಿ ಪ್ರಕರಣದ ನಿಷ್ಪಕ್ಷಪಾತ ತನಿಖೆಗೆ ಅವಕಾಶ ನೀಡಲು ಮುಖ್ಯಮಂತ್ರಿ ಸ್ಥಾನದಲ್ಲಿರುವ ಸಿಎಂ ಸಿದ್ದರಾಮಯ್ಯ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಹುಬ್ಬಳ್ಳಿಯಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಶಾಸಕ ಅರವಿಂದ್ ಬೆಲ್ಲದ್ ನೇತೃತ್ವದಲ್ಲಿ ಮಂಗಳವಾರ ಮಧ್ಯಾಹ್ನ ಪ್ರತಿಭಟನೆ ನಡೆಯಿತು.
ಮೈಸೂರಿನಲ್ಲಿ ಪ್ರತಿಭಟನೆ
ತನಿಖೆಗೆ ಹೈಕೋರ್ಟ್ ಅನುಮತಿ ನೀಡಿದ ಹಿನ್ನೆಲೆ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ನೇತೃತ್ವದಲ್ಲಿ ಮೈಸೂರು ಬಿಜೆಪಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು.
ಈ ವೇಳೆ ಮಾತನಾಡಿದ ನಾರಾಯಣ ಸ್ವಾಮಿ, ‘ಸಿದ್ದರಾಮಯ್ಯ ಕೂಡಲೇ ರಾಜೀನಾಮೆ ನೀಡಬೇಕು. ಕೋರ್ಟಿಗೆ ಹೋಗಿ ನಿರ್ದೋಷಿ ಎಂದು ತೀರ್ಪು ಬಂದ ಮೇಲೆ ಮತ್ತೆ ಅಧಿಕಾರಕ್ಕೆ ಬನ್ನಿ. ಮೊದಲು ನ್ಯಾಯಾಲಯದ ತೀರ್ಪು ಎತ್ತಿ ಹಿಡಿಯುವ ಕೆಲಸ ಮಾಡಿ ಎಂದಿದ್ದಾರೆ. ಪ್ರತಿಭಟನೆಯಲ್ಲಿ ಶಾಸಕ ಶ್ರೀವತ್ಸ, ಜಿಲ್ಲಾಧ್ಯಕ್ಷರಾದ ಎಲ್.ನಾಗೇಂದ್ರ ಹಾಗೂ ಎಲ್ಆರ್. ಮಹದೇವಸ್ವಾಮಿ, ಮಾಜಿ ಸಚಿವ ಎನ್.ಮಹೇಶ್, ಮಾಜಿ ಶಾಸಕ ನಿರಂಜನ್ ಸೇರಿ ನೂರಾರು ಕಾರ್ಯಕರ್ತರು ಭಾಗಿಯಾಗಿದ್ದರು.