Muniratna Case | ಮುನಿರತ್ನ ವಿರುದ್ಧ 590 ಪುಟಗಳ ಚಾರ್ಜ್‌ ಶೀಟ್‌: ಮತ್ತೊಂದು ಎಫ್‌ಐಆರ್‌

ಕೊಲೆ ಯತ್ನ, ಸುಪಾರಿ ಕುರಿತು ಮಹಾನಗರ ಪಾಲಿಕೆ ಮಾಜಿ ಸದಸ್ಯೆ ಮಂಜುಳಾ ಪತಿ ಲಗ್ಗೆರೆ ನಾರಾಯಣಸ್ವಾಮಿ ನೀಡಿದ ದೂರಿನ ಮೇರೆಗೆ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಮುನಿರತ್ನ ಹಾಗೂ ಇತರರ ವಿರುದ್ಧ ಹೊಸ ಪ್ರಕರಣ ದಾಖಲಾಗಿದೆ.

Update: 2024-11-30 13:18 GMT

ಬಿಬಿಎಂಪಿ ಗುತ್ತಿಗೆದಾರನಿಗೆ ಜಾತಿ ನಿಂದನೆ, ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಷರತ್ತುಬದ್ಧ ಜಾಮೀನಿನ ಮೇಲೆ ಹೊರಗಿರುವ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲಾಗಿದೆ.

ಕೊಲೆ ಯತ್ನ, ಸುಪಾರಿ ಕುರಿತು ಮಹಾನಗರ ಪಾಲಿಕೆ ಮಾಜಿ ಸದಸ್ಯೆ ಮಂಜುಳಾ ಪತಿ ಲಗ್ಗೆರೆ ನಾರಾಯಣಸ್ವಾಮಿ ನೀಡಿದ ದೂರಿನ ಮೇರೆಗೆ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಮುನಿರತ್ನ ಹಾಗೂ ಇತರರ ವಿರುದ್ಧ ಹೊಸ ಪ್ರಕರಣ ದಾಖಲಾಗಿದೆ. ಈ ಸಂಬಂಧ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಲಗ್ಗೆರೆ ನಾರಾಯಣಸ್ವಾಮಿ ಕಳೆದ ವರ್ಷ ಬಿಜೆಪಿ ತೊರೆದು ಕಾಂಗ್ರೆಸ್‌ ಸೇರ್ಪಡೆಯಾಗಿದ್ದರು. 

ದೋಷಾರೋಪ ಪಟ್ಟಿ ಸಲ್ಲಿಕೆ

ಬಿಜೆಪಿ ಶಾಸಕರಿಗೆ ಸಂಬಂಧಿಸಿದ ಸರಣಿ ಪ್ರಕರಣಗಳಿಗೆ ಸಂಬಂಧಿಸಿದಂತೆ ಮತ್ತೊಂದು ಬೆಳವಣಿಗೆಯಲ್ಲಿ ಬಿಬಿಎಂಪಿ ಗುತ್ತಿಗೆದಾರನಿಗೆ ಜಾತಿ ನಿಂದನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು 590 ಪುಟಗಳ ದೋಷಾರೋಪ ಪಟ್ಟಿಯನ್ನು ಶನಿವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.

ಜಾತಿ ನಿಂದನೆ ಪ್ರಕರಣದ ಆಡಿಯೋ ಕುರಿತ ವಿಧಿವಿಜ್ಞಾನ ಪ್ರಯೋಗಾಲಯದ ವರದಿ ಬಂದಿದ್ದು, ಆಡಿಯೋದಲ್ಲಿರುವ ಧ್ವನಿ ಶಾಸಕ ಮುನಿರತ್ನ ಅವರದ್ದೇ ಎಂಬುದು ದೃಢಪಟ್ಟಿದೆ. ಆ ಮೂಲಕ ಮುನಿರತ್ನ ವಿರುದ್ಧದ ಪ್ರಕರಣದಲ್ಲಿ ಕಾನೂನು ಕುಣಿಕೆ ಇನ್ನಷ್ಟು ಬಿಗಿಯಾಗಿದೆ.

ಇನ್ನು ಈ ಕುರಿತಂತೆ ಪ್ರತಿಕ್ರಿಯಿಸಿರುವ ದೂರುದಾರ ವೇಲು ನಾಯ್ಕರ್, ಶಾಸಕ ಮುನಿರತ್ನ ರಾಜೀನಾಮೆಗೆ ಆಗ್ರಹಿಸಿದ್ದಾರೆ. ಈ ಹಿಂದೆ ಜಾತಿನಿಂದನೆ ಧ್ವನಿ ನನ್ನದಲ್ಲ ಎಂದು ಮುನಿರತ್ನ ವಾದಿಸಿದ್ದರು. ಧ್ವನಿ ನನ್ನದೆಂದು ಸಾಬೀತಾದರೆ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡುವುದಾಗಿ ಸವಾಲು ಕೂಡ ಹಾಕಿದ್ದರು. ಈಗ ಎಫ್‌ಎಸ್‌ಎಲ್‌ ವರದಿ ಬಂದಿದೆ. ಅವರದ್ದೇ ಧ್ವನಿ ಎಂಬುದು ದೃಢಪಟ್ಟಿದೆ. ಹಾಗಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಬಿಬಿಎಂಪಿ ಗುತ್ತಿಗೆದಾರರಾದ ವೇಲು ನಾಯ್ಕರ್ ಸೆ.13 ರಂದು ವೈಯಾಲಿಕಾವಲ್‌ ಪೊಲೀಸ್‌ ಠಾಣೆಯಲ್ಲಿ ಮುನಿರತ್ನ ವಿರುದ್ಧ ಜಾತಿನಿಂದನೆ ದೂರು ದಾಖಲಿಸಿದ್ದರು. ಸೆ. 14ರಂದು ಕೋಲಾರದ ಸಮೀಪ ಶಾಸಕ ಮುನಿರತ್ನರನ್ನು ಪೊಲೀಸರು ಬಂಧಿಸಿದ್ದರು. ಇದಾದ ಬಳಿಕ ರಾಮನಗರ ಜಿಲ್ಲೆಯ ಕಗ್ಗಲಿಪುರ ಪೊಲೀಸ್‌ ಠಾಣೆಯಲ್ಲಿ ಮಹಿಳೆಯೊಬ್ಬರು ಅತ್ಯಾಚಾರ ದೂರು ದಾಖಲಿಸಿದ್ದರು. ಎರಡೂ ಪ್ರಕರಣಗಳ ತನಿಖೆಗೆ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ(ಎಸ್‌ಐಟಿ) ರಚಿಸಿತ್ತು.

ದೂರುದಾರ ವೇಲು ನಾಯ್ಕರ್‌ ನೀಡಿದ ಮುನಿರತ್ನ ಆಡಿಯೊ ತುಣುಕನ್ನು ಸಿಐಡಿ ಪೊಲೀಸರು ವಿಧಿವಿಜ್ಞಾನ ಪ್ರಯೋಗಾಲಯದ ಪರೀಕ್ಷೆ ಕಳುಹಿಸಿದ್ದರು. ಇದರ ಜೊತೆಗೆ ಅಶೋಕನಗರ ಪೊಲೀಸ್‌ ಠಾಣೆಯಲ್ಲಿ ವಿಚಾರಣೆಯ ಧ್ವನಿಯನ್ನೂ ಒದಗಿಸಿದ್ದರು. ಎರಡೂ ಧ್ವನಿಗಳು ಮುನಿರತ್ನ ಅವರದ್ದೇ ಎಂದು ಎಫ್‌ಎಸ್‌ಎಲ್‌ ವರದಿಯಲ್ಲಿ ಋಜುವಾತಾಗಿದೆ.

Tags:    

Similar News