ರೇಣುಕಾಸ್ವಾಮಿ ಕೊಲೆ ಪ್ರಕರಣ | ನಟ ದರ್ಶನ್‌ ವಿಚಾರಣೆ ಖಚಿತಪಡಿಸಿದ ಕಮೀಷನರ್‌ ದಯಾನಂದ್

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಬಂಧನದ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಬೆಂಗಳೂರು ಪೊಲೀಸ್ ಕಮೀಷನರ್ ಬಿ ದಯಾನಂದ್ ಅವರು, ಪ್ರಕರಣದಲ್ಲಿ ಒಟ್ಟು ಹತ್ತು ಮಂದಿಯನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದು, ಆ ಪೈಕಿ ಕನ್ನಡದ ನಟರೊಬ್ಬರೂ ಇದ್ದಾರೆ ಎಂದು ಹೇಳಿದ್ದಾರೆ.;

Update: 2024-06-11 06:50 GMT

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಬಂಧನದ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಬೆಂಗಳೂರು ಪೊಲೀಸ್ ಕಮೀಷನರ್ ಬಿ ದಯಾನಂದ್ ಅವರು, ಪ್ರಕರಣದಲ್ಲಿ ಒಟ್ಟು ಹತ್ತು ಮಂದಿಯನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದು, ಆ ಪೈಕಿ ಕನ್ನಡದ ನಟರೊಬ್ಬರೂ ಇದ್ದಾರೆ ಎಂದು ಹೇಳಿದ್ದಾರೆ.

ನಟ ದರ್ಶನ್ ಬಂಧನ ಸುದ್ದಿ ಹರಡುತ್ತಿದ್ದಂತೆ ಮಂಗಳವಾರ ಬೆಳಿಗ್ಗೆ ಮಾಧ್ಯಮಗೋಷ್ಠಿ ನಡೆಸಿದ ಬೆಂಗಳೂರು ಪೊಲೀಸ್ ಆಯುಕ್ತರು, ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜೂನ್ 9ರಂದು ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕನ್ನಡ ಚಿತ್ರನಟರೊಬ್ಬರು ಸೇರಿದಂತೆ ಹತ್ತು ಜನರನ್ನು ವಿಚಾರಣೆ ನಡೆಸಲಾಗುತ್ತಿದೆ. ನಟರು ಕೃತ್ಯದಲ್ಲಿ ಭಾಗಿಯಾಗಿರುವ ಬಗ್ಗೆ ಹೆಚ್ಚಿನ ವಿವರಗಳು ಇನ್ನಷ್ಟೇ ತಿಳಿದುಬರಬೇಕಿದೆ. ಪ್ರಕರಣದ ತನಿಖೆ ಪ್ರಗತಿಯಲ್ಲಿದೆ ಎಂದು ಹೇಳಿದ್ದಾರೆ.

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ (33) ಎಂಬುವರ ಮೃತ ದೇಹ ಕಾಮಾಕ್ಷಿಪಾಳ್ಯ ವ್ಯಾಪ್ತಿಯಲ್ಲಿ ಜೂನ್ 9ರಂದು ಪತ್ತೆಯಾಗಿತ್ತು. ನಾಯಿಗಳು ಶವವನ್ನು ಎಳೆದಾಡುತ್ತಿರುವುದನ್ನು ಕಂಡ ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ಕಾಮಾಕ್ಷಿಪಾಳ್ಯ ಪೊಲೀಸರು ಶವ ಪತ್ತೆ ಕುರಿತು ತನಿಖೆ ಆರಂಭಿಸಿದ್ದರು. ಬಳಿಕ ಅದು ಕೊಲೆ ಎಂದು ತಿಳಿದುಬಂದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಅಭಿಮಾನಿಗಳ ಸಂಘದವರು ಎನ್ನಲಾದ ಕೆಲವರನ್ನು ವಶಕ್ಕೆ ಪಡೆಯಲಾಗಿತ್ತು.

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹತ್ತು ಮಂದಿಯನ್ನು ವಿಚಾರಣೆಗೊಳಪಡಿಸಲಾಗಿದೆ. ತನಿಖೆ ಪ್ರಕ್ರಿಯೆಗಳು ನಡೆಯುತ್ತಿರುವುದರಿಂದ ಈ ಹಂತದಲ್ಲಿ ವಿವರಗಳನ್ನು ಬಹಿರಂಗಪಡಿಸಲಾಗದು. ಮುಂದಿನ ದಿನಗಳಲ್ಲಿ ಹೆಚ್ಚಿನ ಮಾಹಿತಿ ನೀಡಲಾಗುವುದು ಎಂದು ಆಯುಕ್ತ ಬಿ ದಯಾನಂದ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ದರ್ಶನ್ ಆಪ್ತೆ ಪವಿತ್ರಾ ಗೌಡ ಅವರಿಗೆ ಅಶ್ಲೀಲ ಮೆಸೇಜ್ ಮಾಡಿದ ಆರೋಪದ ಮೇಲೆ ರೇಣುಕಾಸ್ವಾಮಿ ಅವರನ್ನು ಕೆಲವರು ಹತ್ಯೆ ಮಾಡಿ ಶವವನ್ನು ಕಾಮಾಕ್ಷಿ ಪಾಳ್ಯದಲ್ಲಿ ಎಸೆದುಹೋಗಿದ್ದರು. ಶವ ಪರೀಕ್ಷೆ ನಡೆಸಿದ ಬಳಿಕ ಅದು ಕೊಲೆ ಎಂಬುದು ಗೊತ್ತಾಗಿತ್ತು. ಕೊಲೆಯ ಜಾಡು ಹಿಡಿದು ಹೋದ ಕಾಮಾಕ್ಷಿ ಪಾಳ್ಯ ಪೊಲೀಸರು ಇದೀಗ ನಟ ದರ್ಶನ್ ಮತ್ತು ಅವರ ಆಪ್ತೆ ಪವಿತ್ರಾ ಗೌಡ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ವಿಚಾರಣೆಯ ವೇಳೆ ಮೇಲ್ನೋಟಕ್ಕೆ ನಟ ಮತ್ತು ಆತನ ಆಪ್ತೆ ಕೊಲೆ ಕೃತ್ಯದಲ್ಲಿ ಭಾಗಿಯಾಗಿರುವುದು ಅಥವಾ ಕುಮ್ಮಕ್ಕು ನೀಡಿರುವುದು ಕಂಡುಬಂದಲ್ಲಿ ಇಬ್ಬರನ್ನೂ ಅಧಿಕೃತವಾಗಿ ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಲು ಪೊಲೀಸರು ಸಿದ್ಧತೆ ಮಾಡಿಕೊಂಡಿದ್ದಾರೆ.

Tags:    

Similar News