Mysore MUDA Case | ಇಡಿ ನೋಟಿಸ್‌ ರಾಜಕೀಯ ಪಿತೂರಿ: ಡಿ ಕೆ ಶಿವಕುಮಾರ್‌ ಆರೋಪ

Update: 2025-01-27 08:44 GMT

"ರಾಜಕೀಯ ಪಿತೂರಿಯಿಂದ ಸಿಎಂ ಪತ್ನಿ, ಸಚಿವ ಭೈರತಿ ಸುರೇಶ್ ಅವರಿಗೆ ಇಡಿ ಸಂಸ್ಥೆ ನೋಟಿಸ್ ನೀಡಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಆರೋಪಿಸಿದರು.

ಮುಡಾ ಅಕ್ರಮ ನಿವೇಶನ ಹಂಚಿಕೆ ಪ್ರಕರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ(ಇಡಿ), ಸೋಮವಾರ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಹಾಗೂ ಸಿಎಂ ಆಪ್ತರಾಗಿರುವ ನಗರಾಭಿವೃದ್ಧಿ ಖಾತೆ ಸಚಿವ ಭೈರತಿ ಸುರೇಶ್‌ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ನೋಟಿಸ್‌ ನೀಡಿದೆ. ಬೆಳವಣಿಗೆ ಕುರಿತು ಬೆಂಗಳೂರಿನಲ್ಲಿ ಸೋಮವಾರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರೂ ಆದ ಡಿಕೆ ಶಿವಕುಮಾರ್‌, ಅದೊಂದು ರಾಜಕೀಯ ಪಿತೂರಿ ಎಂದು ಗಂಭೀರ ಆರೋಪ ಮಾಡಿದ್ದಾರೆ. 

ಸಿಎಂ ಪತ್ನಿ, ಸಚಿವ ಭೈರತಿ ಸುರೇಶ್ ಅವರಿಗೆ ಇಡಿ ಸಂಸ್ಥೆ ನೋಟಿಸ್ ನೀಡಿದೆ ಎಂದು ಕೇಳಿದಾಗ, "ನನ್ನ ವಿರುದ್ಧದ ಪ್ರಕರಣದಲ್ಲೂ ಹೀಗೆ ಆಗಿತ್ತು. ಒಂದು ಪ್ರಕರಣವನ್ನು ಒಂದೇ ಸಮಯದಲ್ಲಿ ಎರಡು ಸಂಸ್ಥೆಗಳು ತನಿಖೆ ನಡೆಸಲು ಸಾಧ್ಯವಿಲ್ಲ. ಲೋಕಾಯುಕ್ತ ಸಂಸ್ಥೆ ಈಗಾಗಲೇ ತನಿಖೆ ಮಾಡುತ್ತಿದೆ. ಲೋಕಾಯುಕ್ತ ತನಿಖೆ ನಡೆಸುತ್ತಿರುವಾಗ ಬೇರೆ ಸಂಸ್ಥೆಗಳು ತನಿಖೆ ನಡೆಸಲು ಆಗುವುದಿಲ್ಲ ಎಂದು ನ್ಯಾಯಾಲಯಗಳು ಅನೇಕ ತೀರ್ಪು ನೀಡಿವೆ. ಈ ವಿಚಾರವಾಗಿ ಸಂಪೂರ್ಣ ಮಾಹಿತಿ ಪಡೆದ ನಂತರ ನಾನು ಮಾತನಾಡುತ್ತೇನೆ" ಎಂದು ತಿಳಿಸಿದರು.

ಮುಡಾ ಪ್ರಕರಣ ಸಿಬಿಐ ತನಿಖೆ ನೀಡಬೇಕು ಎಂಬ ವಿಚಾರವಾಗಿ ಕೇಳಿದಾಗ, "ನನ್ನ ಪ್ರಕರಣದಲ್ಲೂ ಸಿಬಿಐ ಹಾಗೂ ಇಡಿ ಒಟ್ಟಿಗೆ ತನಿಖೆ ಮಾಡುತ್ತಿದ್ದವು. ಯಾವುದೇ ಸಂಸ್ಥೆಗಳಾಗಲಿ ಒಟ್ಟಿಗೆ ಒಂದೇ ಪ್ರಕರಣವನ್ನು ಎರಡು ಸಂಸ್ಥೆಗಳು ತನಿಖೆ ಮಾಡುವಂತಿಲ್ಲ. ಈ ಕುರಿತಾಗಿ ಬಂದಿರುವ ನ್ಯಾಯಾಲಯದ ತೀರ್ಪುಗಳನ್ನು ನನ್ನ ಪ್ರಕರಣದಲ್ಲಿ ನ್ಯಾಯಾಲಯದ ಮುಂದೆ ಪ್ರಸ್ತಾಪ ಮಾಡಿದ್ದೇನೆ" ಎಂದು ತಿಳಿಸಿದರು.

ಸರ್ಕಾರ ಸುಭದ್ರವಾಗಿದೆ

ಸಿಎಂ ಹುದ್ದೆ ವಿಚಾರವಾಗಿ ಸಚಿವರ ಹೇಳಿಕೆ ಬಗ್ಗೆ ಕೇಳಿದಾಗ, "ಆ ರೀತಿಯಾಗಿ ಯಾರೂ ಏನೂ ಮಾತನಾಡಿಲ್ಲ. ಸರ್ಕಾರ ಸುಭದ್ರವಾಗಿದೆ. ನಾವೆಲ್ಲರೂ ಸಿಎಂ ಅವರ ಕೆಳಗೆ ಕೆಲಸ ಮಾಡುತ್ತಿದ್ದೇವೆ" ಎಂದು ತಿಳಿಸಿದರು.

Tags:    

Similar News