Mysore MUDA Scam | ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ
ಮೂಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಪೊಲೀಸ್ ತನಿಖೆಗೆ ವಿಶೇಷ ನ್ಯಾಯಾಲಯ ಆದೇಶಿಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಪ್ರತಿಪಕ್ಷ ಬಿಜೆಪಿ ಗುರುವಾರ ಪ್ರತಿಭಟನೆ ನಡೆಸಿತು.;
ಮೂಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಪೊಲೀಸ್ ತನಿಖೆಗೆ ವಿಶೇಷ ನ್ಯಾಯಾಲಯ ಆದೇಶಿಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಪ್ರತಿಪಕ್ಷ ಬಿಜೆಪಿ ಗುರುವಾರ ಪ್ರತಿಭಟನೆ ನಡೆಸಿತು.
ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಹಾಗೂ ವಿಧಾನಪರಿಷತ್ ಚಲವಾದಿ ನಾರಾಯಣ ಸ್ವಾಮಿ ನೇತೃತ್ವದಲ್ಲಿ ಬೆಂಗಳೂರಿನ ವಿಧಾನಸೌಧದ ಮಹಾತ್ಮಗಾಂಧಿ ಪ್ರತಿಮೆ ಎದುರು ನಡೆದ ಪ್ರತಿಭಟನೆಯಲ್ಲಿ ಪಕ್ಷದ ಹಲವು ಶಾಸಕರು, ಮುಖಂಡರು ಪಾಲ್ಗೊಂಡಿದ್ದರು. ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಘೋಷಣಾ ಫಲಕಗಳನ್ನು ಹಿಡಿದು ಘೋಷಣೆಗಳನ್ನು ಕೂಗುತ್ತಾ ಪ್ರತಿಭಟನೆ ನಡೆಸಿದರು.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಪೊಲೀಸರ ತನಿಖೆಗೆ ಇಲ್ಲಿನ ವಿಶೇಷ ನ್ಯಾಯಾಲಯ ಬುಧವಾರ ಆದೇಶಿಸಿದ್ದು, ಅವರ ವಿರುದ್ಧ ಎಫ್‌ಐಆರ್ ದಾಖಲಿಸಲು ಸಜ್ಜಾಗಿದೆ.
ಸಿದ್ದರಾಮಯ್ಯ ಅವರ ಪತ್ನಿ ಬಿಎಂ ಪಾರ್ವತಿ ಅವರಿಗೆ ಮುಡಾ ಮೂಲಕ 14 ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಮೇಲೆ ತನಿಖೆ ನಡೆಸಲು ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ನೀಡಿದ್ದ ಅನುಮತಿಯನ್ನು ಹೈಕೋರ್ಟ್ ಎತ್ತಿ ಹಿಡಿದ ಮರುದಿನವೇ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್ ಆದೇಶ ಹೊರಡಿಸಿದ್ದಾರೆ. ಹೈಕೋರ್ಟ್ ಆದೇಶ ಹೊರಬೀಳುತ್ತಿದ್ದಂತೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದು, ವಿಶೇಷ ನ್ಯಾಯಾಲಯದ ತೀರ್ಪಿನ ಬಳಿಕ ಬುಧವಾರ ಸಿಎಂ ತನಿಖೆ ಎದುರಿಸಲು ಸಿದ್ಧ ಎಂದು ಹೇಳಿದ್ದರು.
ಸಿ.ಎಂ ರಾಜೀನಾಮೆಗೆ ಬಿಜೆಪಿ ಒತ್ತಾಯ
ಆದೇಶ ಹೊರಬೀಳುತ್ತಿದ್ದಂತೆ ಪ್ರತಿಪಕ್ಷಗಳು ಸಿ.ಎಂ ರಾಜೀನಾಮೆಗೆ ಒತ್ತಾಯಿಸಿದ್ದು, ತನಿಖೆಯನ್ನು ಸಿಬಿಐಗೆ ವಹಿಸಿ, ಮುಕ್ತ ಮತ್ತು ನಿಷ್ಪಕ್ಷಪಾತ ತನಿಖೆಗಾಗಿ ಆಗ್ರಹಿಸಿದ್ದಾರೆ. ಮೂಡಾ ಹಗರಣದ ರೂವಾರಿ ಭ್ರಷ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗೆ ನ್ಯಾಯಾಲಯ ಆದೇಶಿಸಿದರೂ ಇದುವರೆಗೆ ರಾಜೀನಾಮೆ ನೀಡದೆ ಭಂಡತನ ಮೆರೆಯುತ್ತಿದ್ದಾರೆ ಎಂದಿರುವ ಬಿಜೆಪಿ, ಸಿದ್ದರಾಮಯ್ಯ ಅವರ ರಾಜೀನಾಮೆಗೆ ಆಗ್ರಹಿಸಿ ಗುರುವಾರ ವಿಧಾನಸೌಧದ ಗಾಂಧಿಪ್ರತಿಮೆಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿತು.