Mysore MUDA Scam | ಸಿಎಂ ಸಿದ್ದರಾಮಯ್ಯ ವಿರುದ್ಧ ವಿಶೇಷ ನ್ಯಾಯಾಲಯಕ್ಕೆ ದೂರು

Update: 2024-08-08 13:04 GMT

ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಮೈಸೂರಿನ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಎಂಬುವರು ದೂರು ನೀಡಿದ್ದಾರೆ.

ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಮ್ಮ, ಮಲ್ಲಿಕಾರ್ಜುನ , ನಿಂಗಾ (ಜವರ) ಮತ್ತು ಇನ್ನಿತರರ ವಿರುದ್ಧ ಸ್ನೇಹಮಯಿ ಕೃಷ್ಣ ದೂರು ನೀಡಿದ್ದಾರೆ. ನ್ಯಾಯಾಧೀಶ ಸಂತೋಷ ಗಜಾನನ ಭಟ್ ಅವರು ದೂರು ಅರ್ಜಿ ಪರಿಗಣಿಸಿ, ಸಂಬಂಧಿತ ದಾಖಲೆಗಳ ಪರಿಶೀಲನೆಗೆ ನ್ಯಾಯಾಲಯದ ರಿಜಿಸ್ಟ್ರಾರ್‌ ಅವರಿಗೆ ಒಪ್ಪಿಸಿದ್ದಾರೆ.

ಪ್ರಕರಣ ಶುಕ್ರವಾರ (ಆ.9) ವಿಚಾರಣೆಗೆ ಬರುವ ನಿರೀಕ್ಷೆ ಇದೆ. ದೂರುದಾರರ ಪರವಾಗಿ ಹೈಕೋರ್ಟ್‌ ಹಿರಿಯ ವಕೀಲೆ ಲಕ್ಷ್ಮಿ ಅಯ್ಯಂಗಾರ್ ಗುರುವಾರ ಮಧ್ಯಾಹ್ನ 1 ಗಂಟೆಗೆ ದೂರು ನೀಡಿದ್ದಾರೆ. ಹೈಕೋರ್ಟ್‌ ವಕೀಲ ವಸಂತ ಕುಮಾರ್‌ ದೂರುದಾರರ ವಕಾಲತ್ತು ವಹಿಸಿದ್ದಾರೆ.

ಈ ಬಗ್ಗೆ ಮೈಸೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, "ಸುಳ್ಳು ಕೇಸುಗಳನ್ನು ದಾಖಲಿಸಿದರೆ ಉತ್ತರ ಕೊಡಲು ಶಕ್ತಿ ಇದೆ. ಕಾನೂನಿನಲ್ಲಿ ಸುಳ್ಳು ಕೇಸ್‌ಗಳು ನಿಲ್ಲುವುದಿಲ್ಲ" ಎಂದು ಹೇಳಿದ್ದಾರೆ.

ಇದೇ ಮುಡಾ ನಿವೇಶನ ಹಂಚಿಕೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಟಿಐ ಕಾರ್ಯಕರ್ತ ಕೆ ಜೆ ಅಬ್ರಾಹಂ ಎಂಬುವರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ದೂರು ದಾಖಲಿಸಲು ಅನುಮತಿ ಕೋರಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದು, ಆ ಮನವಿಯ ಹಿನ್ನೆಲೆಯಲ್ಲಿ ರಾಜ್ಯಪಾಲರು ಸಿದ್ದರಾಮಯ್ಯ ಅವರಿಗೆ ಕಾರಣ ಕೇಳಿ ನೋಟಿಸ್‌ ನೀಡಿದ್ದರು. ಎರಡು ದಿನಗಳ ಹಿಂದೆ ಸಿದ್ದರಾಮಯ್ಯ ಅವರು ರಾಜ್ಯಪಾಲರಿಗೆ ತಮ್ಮ ಲಿಖಿತ ವಿವರಣೆ ನೀಡಿದ್ದಾರೆ.

Tags:    

Similar News