Mysore MUDA Scam | ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ
ಮೈಸೂರು ನಗಾರಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಅಕ್ರಮ ಆರೋಪ ಪ್ರಕರಣದಲ್ಲಿ ಆರೋಪಿಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಎಫ್‌ಐಆರ್ ದಾಖಲಿಸಲು ಮೈಸೂರಿನ ಲೋಕಾಯುಕ್ತ ಪೊಲೀಸರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.;
ಮೈಸೂರು ನಗಾರಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಅಕ್ರಮ ಆರೋಪ ಪ್ರಕರಣದಲ್ಲಿ ಆರೋಪಿಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಎಫ್‌ಐಆರ್ ದಾಖಲಿಸಲು ಮೈಸೂರಿನ ಲೋಕಾಯುಕ್ತ ಪೊಲೀಸರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.
ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನ ಸ್ನೇಹಮಯಿ ಕೃಷ್ಣ ದಾಖಲಿಸಿದ್ದ ಖಾಸಗಿ ಕ್ರಿಮಿನಲ್ ದೂರು ಪ್ರಕರಣದಲ್ಲಿ ಬಾಕಿ ಉಳಿದಿದ್ದ ತೀರ್ಪನ್ನು ಬುಧವಾರ 'ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯʼದ ನ್ಯಾಯಾಧೀಶ ಸಂತೋಷ ಗಜಾನನ ಭಟ್ ಪ್ರಕಟಿಸಿದರು.
ಮುಖ್ಯಮಂತ್ರಿ ವಿರುದ್ಧ ಎಫ್‌ಐಆರ್ ದಾಖಲಿಸಿ, ತನಿಖೆ ನಡೆಸಿ, ಮೂರು ತಿಂಗಳ ಒಳಗಾಗಿ ಅಂತಿಮ ತನಿಖಾ ವರದಿಯನ್ನು ವಿಚಾರಣಾ ನ್ಯಾಯಾಲಯಕ್ಕೆ ಸಲ್ಲಿಸಲು ನ್ಯಾಯಾಧೀಶರು ನಿರ್ದೇಶಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ರಾಜ್ಯಪಾಲರು ನೀಡಿದ್ದ ಆದೇಶಕ್ಕೆ ಹೈಕೋರ್ಟ್ ನಿನ್ನೆಯಷ್ಟೇ (ಸೆ.23) ಅಸ್ತು ಎಂದಿತ್ತು. ಭ್ರಷ್ಟಾಚಾರ ನಿಗ್ರಹ ಕಾಯ್ದೆ-9188ರ ಕಲಂ 17 ಎ ಅಡಿಯಲ್ಲಿ ತನಿಖೆಗೆ ಅನುಮತಿ ನೀಡಿದ್ದ ರಾಜ್ಯಪಾಲರ ಆದೇಶವನ್ನು ಪ್ರಶ್ನಿಸಿ ಸಿದ್ದರಾಮಯ್ಯ ಹೈಕೋರ್ಟ್ ನಲ್ಲಿ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ವಜಾಗೊಳಿಸಿತ್ತು.
ಈ ಹಿನ್ನೆಲೆಯಲ್ಲಿ ಫಿರ್ಯಾದುದಾರ ಮೈಸೂರಿನ ಸ್ನೇಹಮಯಿ ಕೃಷ್ಣ ಬುಧವಾರ ಬೆಳಿಗ್ಗೆ ತಮ್ಮ ವಕೀಲರಾದ ಲಕ್ಷ್ಮಿ ಅಯ್ಯಂಗಾರ್ ಅವರ ಮುಖಾಂತರ ಹೈಕೋರ್ಟ್ ತೀರ್ಪಿನ ಪ್ರತಿಯನ್ನು ನ್ಯಾಯಾಧೀಶ ಸಂತೋಷ ಗಜಾನನ ಭಟ್ ಅವರಿಗೆ ಸಲ್ಲಿಸಿದರು. ಕೆಲಕಾಲ ಸಂಕ್ಷಿಪ್ತ ವಿಚಾರಣೆ ಆಲಿಸಿದ ನ್ಯಾಯಾಧೀಶರು, ಖಾಸಗಿ ದೂರಿನ ಅನುಸಾರ ಕ್ರಿಮಿನಲ್ ಪ್ರಕರಣದ ಆರೋಪಿಯಾಗಿ ಸಿದ್ದರಾಮಯ್ಯ ವಿರುದ್ದ ಅಪರಾಧ ದಂಡ ಪ್ರಕ್ರಿಯಾ ಸಂಹಿತೆ ಅಡಿಯಲ್ಲಿ ಸಕ್ಷಮ ಪ್ರಾಧಿಕಾರವು ಎಫ್‌ಐ ಆರ್ ದಾಖಲಿಸಿ ತನಿಖೆ ನಡೆಸುವಂತೆ ಪೊಲೀಸರಿಗೆ ಆದೇಶಿಸಿದರು.