Mysore MUDA Scam | ಸಿಎಂ ಸಿದ್ದರಾಮಯ್ಯಗೆ ಭಾರೀ ಹಿನ್ನಡೆ: ರಾಜ್ಯಪಾಲರ ಕ್ರಮ ಎತ್ತಿ ಹಿಡಿದ ಹೈಕೋರ್ಟ್‌

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ(ಮೂಡಾ) ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿ ತಮ್ಮ ವಿರುದ್ಧದ ಕ್ರಿಮಿನಲ್ ಪ್ರಕರಣದ ತನಿಖೆಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ರಿಟ್ ಅರ್ಜಿಯನ್ನು ರಾಜ್ಯ ಹೈಕೋರ್ಟ್‌ ವಜಾ ಮಾಡಿದೆ.

Update: 2024-09-24 06:56 GMT

cm siddaramaiah

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ(ಮೂಡಾ) ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿ ತಮ್ಮ ವಿರುದ್ಧದ ಕ್ರಿಮಿನಲ್ ಪ್ರಕರಣದ ತನಿಖೆಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ರಿಟ್ ಅರ್ಜಿಯನ್ನು ರಾಜ್ಯ ಹೈಕೋರ್ಟ್‌ ವಜಾ ಮಾಡಿದೆ.

ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ಮೇಲಿನ ವಿಚಾರಣೆಯನ್ನು ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿದ್ದ ನ್ಯಾಯಮೂರ್ತಿ ನಾಗಪ್ರಸನ್ನ ನೇತೃತ್ವದ ಏಕಸದಸ್ಯ ಪೀಠ, ಮಂಗಳವಾರ(ಸೆ.24) ತನ್ನ ತೀರ್ಪು ಪ್ರಕಟಿಸಿದ್ದು, ರಾಜಭವನದ ವಿರುದ್ಧದ ಕಾನೂನು ಸಮರದಲ್ಲಿ ಸಿದ್ದರಾಮಯ್ಯ ಅವರಿಗೆ ಭಾರೀ ಹಿನ್ನಡೆ ಉಂಟಾಗಿದೆ. ಆ ಹಿನ್ನೆಲೆಯಲ್ಲಿ ಅವರ ಮುಂದಿನ ನಡೆ ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿದೆ.

ಏಕ ಸದಸ್ಯ ಪೀಠ ಹೇಳಿದ್ದೇನು?

ಮುಖ್ಯಮಂತ್ರಿ ವಿರುದ್ಧ ತನಿಖೆಗಾಗಿ ಖಾಸಗಿ ದೂರುದಾರರೂ ರಾಜ್ಯಪಾಲರ ಅನುಮತಿ ಕೋರಬಹುದು. ಸಂವಿಧಾನದ ವಿಧಿ ‘17 ಎ’ ಅಡಿ ಅನುಮತಿ ಕೋರಿದ್ದು ಸರಿಯಾಗಿದೆ. ಸಚಿವ ಸಂಪುಟದ ಶಿಫಾರಸನ್ನು ರಾಜ್ಯಪಾಲರು ತಿರಸ್ಕರಿಸಿದ್ದು ಕೂಡ ಸರಿಯಾಗಿದೆ. ರಾಜ್ಯಪಾಲರು ವಿವೇಚನೆ ಬಳಸಿದ್ದಾರೆ. ‘17 ಎ’ ಅಡಿಯ ಆದೇಶ ಸಮರ್ಪಕವಾಗಿದೆ ಎಂದು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕ ಸದಸ್ಯ ಪೀಠ, ಸಿದ್ದರಾಮಯ್ಯ ಅರ್ಜಿ ವಜಾಗೊಳಿಸುವ ವೇಳೆ ಹೇಳಿದೆ.

ಸಿಎಂ ಸಿದ್ದರಾಮಯ್ಯ ಕುಟುಂಬಸ್ಥರು ಫಲಾನುಭವಿಗಳಾಗಿದ್ದಾರೆ. ಹೀಗಾಗಿ ರಾಜ್ಯಪಾಲರ ಕ್ರಮ ಸೂಕ್ತವಾಗಿದೆ. ಸಿದ್ದರಾಮಯ್ಯ ಎತ್ತಿದ್ದ ಎಲ್ಲಾ ಕಾನೂನಿನ ಪ್ರಶ್ನೆಗಳನ್ನು ತಿರಸ್ಕರಿಸಲಾಗಿದೆ ಎಂದೂ ಪೀಠ ಹೇಳಿದೆ.

ಸಿದ್ದರಾಮಯ್ಯ ಪರವಾಗಿ ಹಿರಿಯ ಸುಪ್ರೀಂ ಕೋರ್ಟ್ ವಕೀಲ ಅಭಿಷೇಕ್ ಮನು ಸಿಂಘ್ವಿ, ಪ್ರೊ ರವಿವರ್ಮ ಕುಮಾರ್‌ ಸೇರಿದಂತೆ ಹಲವು ಹಿರಿಯ ವಕೀಲರು ವಾದ ಮಂಡಿಸಿದ್ದರು. ಇನ್ನು ರಾಜ್ಯಪಾಲರ ಪರ ಸಾಲಿಸಿಟರ್ ಜನರಲ್ ತುಷಾರ ಮೆಹ್ತಾ ವಾದ ಮಂಡಿಸಿದ್ದರು. ಪ್ರತಿವಾದಿ ರಾಜ್ಯ ಸರ್ಕಾರದ ಪರ ಅಡ್ವೊಕೇಟ್‌ ಜನರಲ್‌ ಶಶಿಕಿರಣ್‌ ಶೆಟ್ಟಿ, ವಾದ ಮಂಡಿಸಿದ್ದರು. ಅಲ್ಲದೇ ದೂರುದಾರರಾದ ಟಿ ಜೆ ಅಬ್ರಾಹಂ, ಸ್ನೇಹಮಯಿ ಕೃಷ್ಣ ಮತ್ತು‌ ಎಸ್‌ ಪಿ ಪ್ರದೀಪ್‌ಕುಮಾರ್ ಪರ ವಕೀಲರು ಸಹ ತಮ್ಮ ವಾದ ಮಂಡಿಸಿದ್ದರು. ಈ ಎಲ್ಲಾ ವಾದ- ಪ್ರತಿವಾದ ಆಲಿಸಿದ್ದ ನ್ಯಾ. ಎಂ.ನಾಗಪ್ರಸನ್ನ ಅವರು ಆದೇಶವನ್ನು ಕಾಯ್ದಿರಿಸಿದ್ದರು.

ಮುಡಾ ಹಗರಣದ ಹಿನ್ನೆಲೆ

ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಸಿದ್ದರಾಮಯ್ಯ ಹೆಸರಿನಲ್ಲಿದ್ದ ಕೆಸರೆ ಗ್ರಾಮದ ಸರ್ವೆ ನಂಬರ್ 464ರ 3.16 ಎಕರೆ ಜಮೀನನ್ನು ದೇವನೂರು ಬಡಾವಣೆ ನಿರ್ಮಾಣಕ್ಕೆ ಮುಡಾ ಭೂಸ್ವಾಧೀನ ಮಾಡಿಕೊಂಡಿತ್ತು. ಈ ಜಾಗವನ್ನು ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರಿಗೆ ದಾನ ಪತ್ರದ ಮೂಲಕ ಅವರ ಸಹೋದರ ಕೊಟ್ಟಿದ್ದರು. ಇದು ಒಟ್ಟು 1,48,104 ಚದರ ಅಡಿ ಜಾಗ ಇತ್ತು. ಅದರ ಬದಲಿಗೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ 2021ರಲ್ಲಿ ಪಾರ್ವತಿ ಅವರಿಗೆ ಮೈಸೂರಿನ ಪ್ರತಿಷ್ಠಿತ ವಿಜಯನಗರ ಬಡಾವಣೆಯಲ್ಲಿ 38,284 ಚದರ ಅಡಿ ಜಾಗ ನೀಡಿತ್ತು. 

ಮುಡಾದ ಈ ಕ್ರಮದ ಹಿಂದೆ ಸಿದ್ದರಾಮಯ್ಯ ಅವರ ಪ್ರಭಾವ ಬಳಸಲಾಗಿದೆ. ಅಧಿಕಾರ ದುರುಪಯೋಗವಾಗಿದೆ ಎಂದು ಆರೋಪಿಸಿ ಮೂವರು ರಾಜ್ಯಪಾಲರಿಗೆ ದೂರು ಸಲ್ಲಿಸಿ, ಅವರ ವಿರುದ್ಧ ತನಿಖೆಗೆ ಅನುಮತಿ ನೀಡುವಂತೆ ಕೋರಿದ್ದರು. ಆ ದೂರುಗಳ ಹಿನ್ನೆಲೆಯಲ್ಲಿ ರಾಜ್ಯಪಾಲರು ತನಿಖೆಗೆ ಅನುಮತಿ ನೀಡಿ ಆದೇಶಿಸಿದ್ದರು. ರಾಜ್ಯಪಾಲರ ಆ ಕ್ರಮವನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯ ಹೈಕೋರ್ಟ್‌ ಮೆಟ್ಟಿಲೇರಿದ್ದರು.

Tags:    

Similar News