"ನಮ್ಮ ಮೆಟ್ರೋ"ಗೆ "ಬಸವ ಮೆಟ್ರೋ" ನಾಮಕರಣ; ಕೇಂದ್ರಕ್ಕೆ ಶಿಫಾರಸು ಮಾಡಲು ಸಿಎಂ ನಿರ್ಧಾರ
ನಾನು ಬಸವಣ್ಣನವರ ಅಭಿಮಾನಿ. ಬಸವ ತತ್ವದಲ್ಲಿ ನಂಬಿಕೆ-ಬದ್ದತೆ ಇಟ್ಟುಕೊಂಡಿದ್ದೀನಿ. ಅಂದಿಗಲ್ಲ-ಇಂದಿಗಲ್ಲ-ಮುಂದೆ ಎಂದೆಂದಿಗೂ ಬಸವ ತತ್ವ ಶಾಶ್ವತ ಮತ್ತು ಪ್ರಸ್ತುತ ಎನ್ನುವುದು ನನ್ನ ನಂಬಿಕೆ ಎಂದು ಸಿಎಂ ಹೇಳಿದರು.
ಬೆಂಗಳೂರಿನ ಸಂಚಾರ ದಟ್ಟಣೆ ನಿವಾರಣೆಗೆ ರಾಮಬಾಣದಂತಿರುವ ʼನಮ್ಮ ಮೆಟ್ರೋʼಗೆ ʼಬಸವ ಮೆಟ್ರೋʼ ಎಂದು ನಾಮಕರಣ ಮಾಡುವ ಕುರಿತು ಕೇಂದ್ರಕ್ಕೆ ಶಿಫಾರಸು ಮಾಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.
ಮೆಟ್ರೋ ಸಂಪೂರ್ಣ ರಾಜ್ಯ ಸರ್ಕಾರದ ಯೋಜನೆಯಾಗಿದ್ದರೆ ಇಂದೇ "ಬಸವ ಮೆಟ್ರೋ" ಎಂದು ಘೋಷಣೆ ಮಾಡುತ್ತಿದ್ದೆ. ಆದರೆ, ಯೋಜನೆಯಲ್ಲಿ ಕೇಂದ್ರದ ಪಾಲು ಇರುವುದರಿಂದ ಶಿಫಾರಸು ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದರು.
ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಬಸವ ಸಂಸ್ಕೃತಿ ಅಭಿಯಾನ ಸಮಾರೋಪ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾವೆಲ್ಲರೂ ಶೂದ್ರರು. ಜಾತಿ ಯಾವುದಾದರೂ ಶೂದ್ರರೆಲ್ಲರೂ ಒಂದೇ. ಚಲನೆ ಇಲ್ಲದ ಜಾತಿ ವ್ಯವಸ್ಥೆ ವಿರೋಧಿಸಿ ಬಸವಣ್ಣನವರು ಹೊಸ ಧರ್ಮ ಸ್ಥಾಪಿಸಿದರು ಎಂದು ನುಡಿದರು.
ನಾನು ಬಸವಣ್ಣನವರ ಅಭಿಮಾನಿ. ಬಸವ ತತ್ವದಲ್ಲಿ ನಂಬಿಕೆ-ಬದ್ದತೆ ಇಟ್ಟುಕೊಂಡಿದ್ದೀನಿ. ಅಂದಿಗಲ್ಲ-ಇಂದಿಗಲ್ಲ-ಮುಂದೆ ಎಂದೆಂದಿಗೂ ಬಸವ ತತ್ವ ಶಾಶ್ವತ ಮತ್ತು ಪ್ರಸ್ತುತ ಎನ್ನುವುದು ನನ್ನ ನಂಬಿಕೆ. ಸಹಬಾಳ್ವೆ ಮತ್ತು ಸಹಿಷ್ಣತೆಯನ್ನು ಬಸವಣ್ಣನವರು ಬದುಕಿನುದ್ದಕ್ಕೂ ಸಾರಿದರು. ನಾನೂ ಇದನ್ನು ಪಾಲಿಸುತ್ತೇನೆ ಎಂದರು.
ಬಸವ ಜಯಂತಿಯ ದಿನವೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಾನು ಅದೇ ದಿನ ಎಲ್ಲರಿಗೂ ಬದುಕುವ ಸಮಾನ ಅವಕಾಶ ಕಲ್ಪಿಸುವ ಮೂಲಕ ಬಸವಣ್ಣನವರ ಆಶಯಗಳನ್ನು ಈಡೇರಿಸಿದೆ. ಗ್ಯಾರಂಟಿಗಳ ಮೂಲಕ ಎಲ್ಲಾ ಜಾತಿ, ಎಲ್ಲಾ ಧರ್ಮದ ಬಡವರ ಬದುಕಿಗೆ ಅವಕಾಶ ಒದಗಿಸಲಾಗಿದೆ. ಎಲ್ಲಾ ಸರ್ಕಾರಿ ಕಚೇರಿಗಳಲ್ಲೂ ಬಸವಣ್ಣನವರ ಭಾವಚಿತ್ರ ಇಡುವುದನ್ನು ಕಡ್ಡಾಯ ಮಾಡಿದ್ದು ಇದೇ ಕಾರಣಕ್ಕೆ ಎಂದು ಹೇಳಿದರು.
ಮುಂದಿನ ವರ್ಷದಿಂದ ವಚನ ವಿಶ್ವವಿದ್ಯಾಲಯ ಸ್ಥಾಪನೆ
ವಚನ ವಿಶ್ವ ವಿದ್ಯಾಲಯ ಸ್ಥಾಪಿಸುವ ಬೇಡಿಕೆಗೆ ಸರ್ಕಾರದ ಒಪ್ಪಿಗೆ ಇದ್ದು, ಮುಂದಿನ ವರ್ಷ ವಚನ ವಿವಿ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದರು.
ಜಾತಿಯಿಂದ ಯಾರೂ ಶ್ರೇಷ್ಠರಲ್ಲ. ಹಾಗೆಯೇ ಪ್ರತಿಭೆ, ಜ್ಞಾನ ಕೂಡ ಯಾವುದೇ ಒಂದು ಜಾತಿಯ ಸ್ವತ್ತು ಅಲ್ಲ. ನಾನು ಅರ್ಜಿ ಹಾಕಿಕೊಂಡು ಕುರುಬ ಜಾತಿಯಲ್ಲಿ ಹುಟ್ಟಿಲ್ಲ. ನಾನು ಶೂದ್ರ ಎನ್ನುವ ಕಾರಣಕ್ಕೆ ಶಿಕ್ಷಣ ಪಡೆಯುವ ಅರ್ಹತೆ ಇಲ್ಲ ಎನ್ನುವುದು ಪಟ್ಟಭದ್ರರ ಷಡ್ಯಂತ್ರ ಎಂದು ಕಿಡಿಕಾರಿದರು.
ಜಾತಿ-ವರ್ಗ ರಹಿತ ಮಾನವ ಸಮಾಜದ ನಿರ್ಮಾಣ ಬಸವಣ್ಣನವರ ಕನಸಾಗಿತ್ತು. ನಾವೆಲ್ಲರೂ ಮೊದಲು ಮನುಷ್ಯರು, ಬಳಿಕ ಭಾರತೀಯರು. ಹೀಗಾಗಿ ನಾವು ಮನುಷ್ಯ ನಿರ್ಮಿತ ಜಾತಿ, ಧರ್ಮದ, ಅಸಮಾನತೆಯ ತಾರತಮ್ಯಗಳನ್ನು ಸಹಿಸಬಾರದು, ಆಚರಿಸಬಾರದು ಎಂದು ಕರೆ ನೀಡಿದರು.
ನಾನು ಕಾನೂನು ವಿದ್ಯಾರ್ಥಿ ಆದ ಗಳಿಗೆಯಿಂದ ನಾನು ಬಸವಣ್ಣನವರ ಅನುಯಾಯಿ. ಅಂಬೇಡ್ಕರ್ ಅವರೂ ತಮ್ಮ ಸಂವಿಧಾನದಲ್ಲಿ ಬಸವಣ್ಣನವರ ಆಶಯಗಳನ್ನೇ ಹೇಳಿದ್ದಾರೆ. ಹೀಗಾಗಿ ಸಂವಿಧಾನ ಮತ್ತು ಶರಣ ಸಂಸ್ಕೃತಿ ಒಂದೇ ಆಗಿದೆ. ನಮ್ಮ ಸರ್ಕಾರ ಸಂವಿಧಾನದ ಪೀಠಿಕೆ ಓದಿಸುವುದನ್ನು ಅಭಿಯಾನದ ರೀತಿ ನಡೆಸುತ್ತಿದ್ದೇವೆ ಎಂದರು.