Nandi Hills | ಐದು ವರ್ಷ ನಾನೇ ಮುಖ್ಯಮಂತ್ರಿ; ಚಿಕ್ಕಬಳ್ಳಾಪುರದಲ್ಲಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ
ಚಿಕ್ಕಬಳ್ಳಾಪುರ ತಾಲೂಕಿನ ನಂದಿ ಗ್ರಾಮದಲ್ಲಿ ಭೋಗ ನಂದೀಶ್ವರ ದೇವಸ್ಥಾನದಲ್ಲಿ ಬುಧವಾರ ಸಿಎಂ ಬದಲಾವಣೆ ಕುರಿತ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿ, ನಾನೇ ಐದು ವರ್ಷ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತೇನೆ ಎಂದು ಹೇಳಿದ್ದಾರೆ.;
ರಾಜ್ಯದಲ್ಲಿ ನಾನೇ ಐದು ವರ್ಷ ಪೂರ್ಣಾವಧಿ ಮುಖ್ಯಮಂತ್ರಿ ಎಂದು ದೇವರ ಸನ್ನಿಧಿಯಲ್ಲಿ ಸಿಎಂ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ನೀಡಿರುವುದು ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ.
ಚಿಕ್ಕಬಳ್ಳಾಪುರ ತಾಲೂಕಿನ ನಂದಿ ಗ್ರಾಮದ ಭೋಗ ನಂದೀಶ್ವರ ದೇವಸ್ಥಾನದಲ್ಲಿ ಬುಧವಾರ ಪೂಜೆ ಸಲ್ಲಿಸಿದ ಬಳಿಕ ಸಿಎಂ ಬದಲಾವಣೆ ಕುರಿತ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ ಅವರು, ನಾನೇ ಐದು ವರ್ಷ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತೇನೆ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಬದಲಾವಣೆ ಕುರಿತಂತೆ ಸಾಕಷ್ಟು ಊಹಾಪೋಹಗಳು ಎದ್ದಿದ್ದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರ ಹೇಳಿಕೆ ಮಹತ್ವ ಪಡೆದುಕೊಂಡಿದೆ. ಮಂಗಳವಾರವಷ್ಟೇ ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಅವರ ಸಿಎಂ ಬದಲಾವಣೆ ಹೇಳಿಕೆಗೆ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು, ಸಿಎಂ ಬದಲಾವಣೆ ವಿಚಾರವನ್ನು ಹೈಕಮಾಂಡ್ ನೋಡಿಕೊಳ್ಳಲಿದೆ ಎಂದು ಹೇಳಿದ್ದರು. ಸಿಎಂ ಬದಲಾವಣೆ ವಿಚಾರವಾಗಿ ಬಹಿರಂಗ ಹೇಳಿಕೆ ನೀಡಿದ್ದ ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಅವರಿಗೆ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಪಕ್ಷದ ಶಿಸ್ತು ಉಲ್ಲಂಘನೆ ಆರೋಪದ ಮೇಲೆ ಕಾರಣ ಕೇಳಿ ನೋಟಿಸ್ ನೀಡಿದ್ದರು.
ಯಾರೂ ಕೂಡ ಸಿಎಂ ಬದಲಾವಣೆ ವಿಚಾರವಾಗಿ ಮಾತನಾಡಬಾರದು. ಸದ್ಯ ಸಿದ್ದರಾಮಯ್ಯ ಅವರೇ ನಮ್ಮ ಮುಖ್ಯಮಂತ್ರಿಯಾಗಿದ್ದು, ಅವರ ಕೈ ಬಲಪಡಿಸಬೇಕು ಎಂದು ಹೇಳಿದ್ದರು. ಈ ಎಲ್ಲ ಬೆಳವಣಿಗೆಗಳ ಬೆನ್ನಲ್ಲೇ ಚಿಕ್ಕಬಳ್ಳಾಪುರದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಸ್ಫೋಟಕ ಹೇಳಿಕೆ ನೀಡುವುದು ರಾಜ್ಯ ರಾಜಕಾರಣದಲ್ಲಿ ಕುತೂಹಲ ಮೂಡಿಸಿದೆ.
ಕುತೂಹಲ ಕೆರಳಿಸಿದ ಸಿಎಂ ಹೇಳಿಕೆ
ಇದೇ ಮೊದಲ ಬಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾನೇ ಪೂರ್ಣಾವಧಿ ಸಿಎಂ ಎಂದು ಹೇಳಿರುವುದು ಅಚ್ಚರಿ ಮೂಡಿಸಿದೆ.
ನಂದಿ ಬೆಟ್ಟದಲ್ಲಿ ವಿಶೇಷ ಸಚಿವ ಸಂಪುಟ ಸಭೆಗೂ ಮುನ್ನ ನಂದಿಯ ಭೋಗ ನಂದಿಶ್ವರ ಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ನಾವು ಒಟ್ಟಾಗಿದ್ದೇವೆ, 5 ವರ್ಷ ಕಾಂಗ್ರೆಸ್ ಸರ್ಕಾರವೇ ಅಧಿಕಾರದಲ್ಲಿ ಇರಲಿದೆ. 5 ವರ್ಷ ನಾನೇ ಸಿಎಂ ಆಗಿರುತ್ತೇನೆ. ಅದರಲ್ಲಿ ಅನುಮಾನವಿಲ್ಲ ಎಂದು ಹೇಳಿರುವುದು ಮತ್ತೊಂದು ಸುತ್ತಿನ ಬಣ ಬಡಿದಾಟಕ್ಕೆ ಕಾರಣವಾಗುವ ಮುನ್ಸೂಚನೆ ನೀಡಿದೆ.
ಸಿಎಂ ಬದಲಾವಣೆ ವಿಚಾರವಾಗಿ ಬಿಜೆಪಿಯವರು ಹಗಲು ಕನಸು ಕಾಣುತ್ತಿದ್ದಾರೆ. ಅಧಿಕಾರದಲ್ಲಿದ್ದಾಗ ಬಿಜೆಪಿಯವರು ಏನೂ ಮಾಡಿಲ್ಲ. ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು ಎಂದು ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ.
ಪ್ರತಿಪಕ್ಷ ನಾಯಕ ಆರ್. ಅಶೋಕ್ ಸೇರಿದಂ ಹಲವು ಬಿಜೆಪಿ ನಾಯಕರು ಸಿಎಂ ಬದಲಾವಣೆ ಕುರಿತು ಭವಿಷ್ಯ ನುಡಿದಿದ್ದರು. ಸೆಪ್ಟೆಂಬರ್- ನವೆಂಬರ್ ಒಳಗೆ ರಾಜ್ಯ ರಾಜಕಾರಣದಲ್ಲಿ ದೊಡ್ಡ ಬೆಳವಣಿಗೆಯಾಗಲಿದೆ. ಸಿದ್ದರಾಮಯ್ಯ ಅವರು ಮುಖ್ಯ ಮಂತ್ರಿ ಸ್ಥಾನ ಕಳೆದುಕೊಳ್ಳಲಿದ್ದಾರೆ ಎಂದು ಹೇಳಿದ್ದರು. ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರು ಕೂಡ ಸೆಪ್ಟೆಂಬರ್ ತಿಂಗಳಲ್ಲಿ ರಾಜಕೀಯ ಬದಲಾವಣೆ ಆಗಲಿದೆ ಎಂದು ಹೇಳುವ ಮೂಲಕ ಕುತೂಹಲ ಮೂಡಿಸಿದ್ದರು.
ಸಿಎಂ ಸ್ಥಾನ ಬದಲಾವಣೆ ಕುರಿತಂತೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಂದ ಆರಂಭವಾದ ಚರ್ಚೆ ಕಾಂಗ್ರೆಸ್ ನೇತೃತ್ವದ ಸರ್ಕಾರದಲ್ಲೇ ಬಣ ಸೃಷ್ಟಿಸಿತ್ತು. ಡಿ.ಕೆ. ಶಿವಕುಮಾರ್ ಅವರ ಪರ ಒಂದು ಬಣ ಸಿಎಂ ಬದಲಾವಣೆಗೆ ಪಟ್ಟು ಹಿಡಿದಿದ್ದರೆ, ಸಿದ್ದರಾಮಯ್ಯ ನೇತೃತ್ವದ ಬಣ ಯಾವುದೇ ಕಾರಣಕ್ಕೂ ಸಿಎಂ ಸ್ಥಾನ ಬಿಟ್ಟುಕೊಡಬಾರದು ಎಂದು ಹೇಳಿದ್ದರು. ಅಲ್ಲದೇ ಹೈಕಮಾಂಡ್ ಬಳಿಗೂ ಈ ವಿಷಯವನ್ನು ತೆಗೆದುಕೊಂಡು ಹೋಗಿದ್ದರು. ಸಿಎಂ ಬದಲಾವಣೆ ಚರ್ಚೆ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬದಲಾವಣೆ ವಿಚಾರವನ್ನು ಮುನ್ನೆಲೆಗೆ ತಂದಿದ್ದರು.
ಈ ಎಲ್ಲಾ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸಿದ್ದ ಹೈಕಮಾಂಡ್ ನಾಯಕರು ಸದ್ಯ ಸಿಎಂ ಬದಲಾವಣೆ ಹಾಗೂ ಕೆಪಿಸಿಸಿ ಅಧ್ಯಕ್ಷ ಬದಲಾವಣೆ ಇಲ್ಲ. ಯಾರೂ ಕೂಡ ಬಹಿರಂಗವಾಗಿ ಹೇಳಿಕೆ ನೀಡಬಾರದು ಎಂದು ಎಚ್ಚರಿಕೆ ರವಾನಿಸಿತ್ತು.
ಡಿಕೆಶಿಗೆ ಸೆಡ್ಡುಹೊಡೆದ ಸಿದ್ದರಾಮಯ್ಯ
ಮುಂದಿನ ಮುಖ್ಯಮಂತ್ರಿ ಕನಸು ಕಾಣುತ್ತಿದ್ದ ಡಿಸಿಎಂ ಡಿಕೆ ಶಿವಕುಮಾರ್ ಗೆ ಸಿದ್ದರಾಮಯ್ಯ ಹೇಳಿಕೆ ಸೆಡ್ಡುಹೊಡೆದಂತಿದೆ
ಅದರ ಜತೆಗೆ ಡಿಕೆಶಿ ಬೆಂಬಲಿಗರಿಗೂ ಸಹಾ ಸಂದೇಶ ಹೋಗಿದೆ. ಇದೇ ಮೊದಲಬಾರಿಗೆ ನಾನೇ 5 ವರ್ಷ ಸಿಎಂ ಎನ್ನುವ ಮೂಲಕ ತಮ್ಮ ವಿರೋಧಿ ಬಣ ಹಾಗು ಸಿಎಂ ಸ್ಥಾನದ ಆಕಾಂಕ್ಷಿಗಳಿಗೆ ನೇರ ಸಂದೇಶ ನೀಡಿದ್ದಾರೆ.