ನೇಹಾ ಹತ್ಯೆ ಪ್ರಕರಣ: ಸಿಐಡಿ ತನಿಖೆ ಆರಂಭ
ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ (23) ಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಸಿಐಡಿಯ ಎಸ್‌ಪಿ ವೆಂಕಟೇಶ್ ನೇತೃತ್ವದಲ್ಲಿ ತನಿಖೆ ಆರಂಭವಾಗಿದೆ.
ಬೆಂಗಳೂರು: ಹುಬ್ಬಳ್ಳಿಯ ಬಿವಿಬಿ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ (23) ಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಸಿಐಡಿಯ ಎಸ್‌ಪಿ ವೆಂಕಟೇಶ್ ನೇತೃತ್ವದಲ್ಲಿ ತನಿಖೆ ಆರಂಭವಾಗಿದೆ.
ಹುಬ್ಬಳ್ಳಿಯ ಬಿವಿಬಿ ಕಾಲೇಜು ಕ್ಯಾಂಪಸ್‌ನಲ್ಲಿ ನೇಹಾ ಹಿರೇಮಠ ಅವರನ್ನು ಏಪ್ರಿಲ್ 18ರಂದು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಆರೋಪಿ ಫಯಾಜ್ ಬಾಬಾಸಾಹೇಬ ಬೊಂಡಾನಾಯಕ್‌ನನ್ನು ಹುಬ್ಬಳ್ಳಿ ವಿದ್ಯಾನಗರ ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ಇದೀಗ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ.
'ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣದ ತನಿಖೆಗಾಗಿ ಎಸ್‌ಪಿ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿದೆ. ತಂಡದ ಅಧಿಕಾರಿಗಳು ಹುಬ್ಬಳ್ಳಿಗೆ ಹೋಗಿದ್ದಾರೆ. ಘಟನೆ ನಡೆದ ಸ್ಥಳ ಪರಿಶೀಲನೆ ನಡೆಸಲಿದ್ದಾರೆ. ಪ್ರಕರಣದ ಇತರೆ ಮಾಹಿತಿ ಕಲೆಹಾಕಿ, ತನಿಖೆ ಮುಂದುವರಿಸಲಿದ್ದಾರೆ' ಎಂದು ಸಿಐಡಿ ಡಿಜಿಪಿ ಎಂ.ಎ. ಸಲೀಂ ಹೇಳಿದ್ದಾರೆ.
'ಪ್ರಕರಣದ ಆರೋಪಿ ಫಯಾಜ್‌ನನ್ನು ನ್ಯಾಯಾಲಯದ ಅನುಮತಿ ಪಡೆದು ಸಿಐಡಿ ಅಧಿಕಾರಿಗಳು ಕಸ್ಟಡಿಗೆ ಪಡೆಯುವ ಸಾಧ್ಯತೆ ಇದೆ. ಇದಕ್ಕೆ ಸಂಬಂಧಪಟ್ಟಂತೆ ಕಾನೂನು ಪ್ರಕ್ರಿಯೆ ಶುರುವಾಗಿದೆ' ಎಂದು ಮೂಲಗಳು ಹೇಳಿವೆ.