ಅಂಬಾರಗೋಡ್ಲು- ಕಳಸವಳ್ಳಿ ಹೊಸ ಸೇತುವೆ ಲೋಕಾರ್ಪಣೆಗೆ ಸಿದ್ಧ: ಜುಲೈ 14ರಂದು ನಿತಿನ್ ಗಡ್ಕರಿ ಉದ್ಘಾಟನೆ
ಮಲೆನಾಡಿನ ಪ್ರಸಿದ್ಧ ಯಾತ್ರಾ ಸ್ಥಳವಾದ ಸಿಗಂದೂರುಗೆ ಈ ಸೇತುವೆ ಸಂಪರ್ಕ ಕಲ್ಪಿಸುವುದರಿಂದ, ಇದಕ್ಕೆ 'ಸಿಗಂದೂರು ಶ್ರೀ ಚೌಡೇಶ್ವರಿ ಸೇತುವೆ' ಎಂದು ಹೆಸರಿಡಲು ನಿರ್ಧರಿಸಲಾಗಿದೆ.;
ಸಾಗರ ತಾಲ್ಲೂಕಿನ ಅಂಬಾರಗೋಡ್ಲು ಮತ್ತು ಕಳಸವಳ್ಳಿ ನಡುವೆ ನಿರ್ಮಿಸಲಾಗಿರುವ ನೂತನ ತೂಗು ಸೇತುವೆಯನ್ನು ಜುಲೈ 14ರಂದು ಕೇಂದ್ರದ ಹೆದ್ದಾರಿ ಮತ್ತು ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಲೋಕಾರ್ಪಣೆ ಮಾಡಲಿದ್ದಾರೆ ಎಂದು ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ.
ಶನಿವಾರ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸದರು, 473 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಈ ಸೇತುವೆ 2.44 ಕಿ.ಮೀ. ಉದ್ದವಿದ್ದು, ಇದು ದೇಶದ ಎರಡನೇ ಅತಿ ದೊಡ್ಡ ತೂಗು ಸೇತುವೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದರು.
'ಸಿಗಂದೂರು ಶ್ರೀ ಚೌಡೇಶ್ವರಿ ಸೇತುವೆ' ಎಂದು ನಾಮಕರಣಕ್ಕೆ ನಿರ್ಧಾರ
ಮಲೆನಾಡಿನ ಪ್ರಸಿದ್ಧ ಯಾತ್ರಾ ಸ್ಥಳವಾದ ಸಿಗಂದೂರುಗೆ ಈ ಸೇತುವೆ ಸಂಪರ್ಕ ಕಲ್ಪಿಸುವುದರಿಂದ, ಇದಕ್ಕೆ 'ಸಿಗಂದೂರು ಶ್ರೀ ಚೌಡೇಶ್ವರಿ ಸೇತುವೆ' ಎಂದು ಹೆಸರಿಡಲು ನಿರ್ಧರಿಸಲಾಗಿದೆ. ಈ ಸಂಬಂಧ ರಾಜ್ಯ ಸರ್ಕಾರವು ಕೇಂದ್ರಕ್ಕೆ ನಿರಾಕ್ಷೇಪಣಾ ಪ್ರಮಾಣಪತ್ರ (NOC) ಸಹಿತ ಪ್ರಸ್ತಾವನೆ ಸಲ್ಲಿಸುವಂತೆ ರಾಘವೇಂದ್ರ ಒತ್ತಾಯಿಸಿದರು.
ಸೇತುವೆ ನಿರ್ಮಾಣಕ್ಕೆ ಪಕ್ಷಾತೀತವಾಗಿ ಹಲವು ಹೋರಾಟಗಳು ನಡೆದಿವೆಯಾದರೂ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಕೊಡುಗೆ ಮಹತ್ವದ್ದು ಎಂದು ರಾಘವೇಂದ್ರ ಸ್ಮರಿಸಿದರು. ಆರಂಭದಲ್ಲಿ ಯಡಿಯೂರಪ್ಪ ಈ ಯೋಜನೆಗೆ 100 ಕೋಟಿ ರೂಪಾಯಿ ಅನುದಾನ ನೀಡಿದ್ದರು. ಅಲ್ಲದೆ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಸೇತುವೆ ನಿರ್ಮಾಣಕ್ಕೆ ಮೀಸಲಿಟ್ಟಿದ್ದ ಹಣವನ್ನು ಬೇರೆ ಕಡೆ ವರ್ಗಾಯಿಸಲು ಮುಂದಾದಾಗ, ನಿತಿನ್ ಗಡ್ಕರಿ ಅವರೊಂದಿಗೆ ಮಾತುಕತೆ ನಡೆಸಿ ಆ ಹಣವನ್ನು ಮರಳಿ ತರಿಸುವಲ್ಲಿ ಯಡಿಯೂರಪ್ಪ ಪ್ರಮುಖ ಪಾತ್ರ ವಹಿಸಿದ್ದರು ಎಂದು ಅವರು ತಿಳಿಸಿದರು.
ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸಹ ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಸ್ಥಳ ಮತ್ತು ಸಮಯವನ್ನು ಇನ್ನಷ್ಟೇ ಅಂತಿಮಗೊಳಿಸಬೇಕಿದೆ ಎಂದು ರಾಘವೇಂದ್ರ ಹೇಳಿದರು.
ಸೇತುವೆಯ ಎರಡನೇ ಹಂತದ ಲೋಡ್ ಟೆಸ್ಟ್ ಶನಿವಾರ ಆರಂಭಗೊಂಡಿದ್ದು, ಉಳಿದಿರುವ ಸಣ್ಣಪುಟ್ಟ ಕಾಮಗಾರಿಗಳು ಶೀಘ್ರದಲ್ಲೇ ಪೂರ್ಣಗೊಳ್ಳಲಿವೆ ಎಂದು ಅವರು ಮಾಹಿತಿ ನೀಡಿದರು.
ಈ ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎನ್.ಕೆ.ಜಗದೀಶ್, ಶಾಸಕರಾದ ಆರಗ ಜ್ಞಾನೇಂದ್ರ, ಎಸ್.ಎನ್.ಚನ್ನಬಸಪ್ಪ, ಡಾ.ಧನಂಜಯ ಸರ್ಜಿ, ಮಾಜಿ ಸಚಿವ ಹರತಾಳು ಹಾಲಪ್ಪ, ಮಾಜಿ ಶಾಸಕ ಅಶೋಕ ನಾಯ್ಕ, ಮತ್ತು ಮುಖಂಡ ಎಸ್.ದತ್ತಾತ್ರಿ ಉಪಸ್ಥಿತರಿದ್ದರು.