Bandipur National Park | ಹುಲಿ ಸಂರಕ್ಷಿತ ಪ್ರದೇಶದಲ್ಲಿ ರಾತ್ರಿ ಸಂಚಾರ; ನಿರ್ಬಂಧ ತೆರವಿಗೆ ಪರಿಸವಾದಿಗಳ ಆಕ್ಷೇಪ; ನಾಳೆ ಪಾದಯಾತ್ರೆ

ಬಂಡಿಪುರ ಉಳಿವಿಗಾಗಿ ಸಂಘ ಸಂಸ್ಥೆಗಳು, ಪರಿಸರ ಪ್ರೇಮಿಗಳು ಹಾಗೂ ಸಾರ್ವಜನಿಕರ ಸಹಭಾಗಿತ್ವದಲ್ಲಿ ನಾಳೆ (ಏ.6) ಗುಂಡ್ಲುಪೇಟೆಯಿಂದ ಬಂಡೀಪುರವರೆಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ.;

Update: 2025-04-05 13:33 GMT

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ವಾಹನಗಳ ರಾತ್ರಿ ಸಂಚಾರ ನಿರ್ಬಂಧ ತೆರವುಗೊಳಿಸುವ ರಾಜ್ಯ ಸರ್ಕಾರದ ಪ್ರಸ್ತಾವಕ್ಕೆ ಪರಿಸರವಾದಿಗಳು, ರೈತ ಸಂಘಟನೆಗಳಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಬಂಡಿಪುರ ಉಳಿವಿಗಾಗಿ ಸಂಘ ಸಂಸ್ಥೆಗಳು, ಪರಿಸರ ಪ್ರೇಮಿಗಳು ಹಾಗೂ ಸಾರ್ವಜನಿಕರ ಸಹಭಾಗಿತ್ವದಲ್ಲಿ ನಾಳೆ (ಏ.6) ಗುಂಡ್ಲುಪೇಟೆಯಿಂದ ಬಂಡೀಪುರವರೆಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ.

2004ರಿಂದ 2007ರ ಅವಧಿಯಲ್ಲಿ ಸುಮಾರು 215 ವನ್ಯಜೀವಿಗಳು ರಸ್ತೆ ಅಪಘಾತಗಳಲ್ಲಿ ಮೃತಪಟ್ಟಿದ್ದ ಹಿನ್ನೆಲೆಯಲ್ಲಿ ರಾಜ್ಯ ಹೈಕೋರ್ಟ್ ರಾತ್ರಿ ಸಂಚಾರ ನಿಷೇಧಿಸಿತ್ತು. ಬಳಿಕ ಸುಪ್ರೀಂಕೋರ್ಟ್ ಬಂಡೀಪುರದಲ್ಲಿ ರಾತ್ರಿ 9 ರಿಂದ ಬೆಳಿಗ್ಗೆ 6 ರವರೆಗೆ ವಾಹನ ಸಂಚಾರ ನಿಷೇಧಿಸಿ ಆದೇಶ ಹೊರಡಿಸಿತ್ತು.

ಇದೀಗ ರಾಜಕೀಯ ಒತ್ತಡಗಳಿಗೆ ಮಣಿದು ರಾತ್ರಿ ಸಂಚಾರಕ್ಕೆ ಅನುಮತಿ ನೀಡುವ ಪ್ರಯತ್ನ ಆರಂಭವಾಗಿರುವುದಕ್ಕೆ ಪರಿಸರವಾದಿಗಳು ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸರ್ಕಾರ ನ್ಯಾಯಾಲಯದ ತೀರ್ಪನ್ನು ಗೌರವಿಸಬೇಕು. ಇಲ್ಲವಾದಲ್ಲಿ ಬೃಹತ್‌ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಈಚೆಗೆ ಗುಂಡ್ಲುಪೇಟೆಯಲ್ಲಿ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ರಾತ್ರಿ ಸಂಚಾರ ನಿಷೇಧ ತೆರವು ಮಾಡುವ ಸರ್ಕಾರದ ಪ್ರಸ್ತಾವ ವಿರೋಧಿಸಿ ರೈತ ಸಂಘಟನೆ ಮತ್ತು ಹಸಿರು ಸೇನೆ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದ್ದರು.

ರಾತ್ರಿ ಸಂಚಾರದ ಸಮಯದಲ್ಲಿ ಭಾರೀ ವಾಹನಗಳ ಓಡಾಟದಿಂದ ಹುಲಿ, ಆನೆಯಂತಹ ಪ್ರಾಣಿಗಳು ಅಪಘಾತಗಳಲ್ಲಿ ಸಿಲುಕಿ ಸಾವನ್ನಪ್ಪುತ್ತಿವೆ. ರಾತ್ರಿ ಸಂಚಾರಕ್ಕೆ ಅವಕಾಶ ನೀಡಿದರೆ ವನ್ಯಜೀವಿಗಳ ಮಾರಣಹೋಮಕ್ಕೆ ಕಾರಣವಾಗಿ, ಮಾನವ ಹಾಗೂ ಪ್ರಾಣಿ ಸಂಘರ್ಷ ಹೆಚ್ಚಲಿದೆ ಪರಿಸರವಾದಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ತಜ್ಞರ ಜೊತೆ ಸಮಾಲೋಚಿಸಿ ಕ್ರಮ

ಬಂಡೀಪುರ ಉದ್ಯಾನದಲ್ಲಿ ವಾಹನಗಳ ರಾತ್ರಿ ಸಂಚಾರ ನಿರ್ಬಂಧವು ಅತ್ಯಂತ ಸೂಕ್ಷ್ಮ ವಿಚಾರವಾಗಿದ್ದು, ಮುಖ್ಯಮಂತ್ರಿ ಅವರೊಂದಿಗೆ ಸಮಾಲೋಚಿಸಿ, ಕಾನೂನು ತಜ್ಞರ ಅಭಿಪ್ರಾಯ ಪಡೆದು ನಿರ್ಧಾರ ಕೈಗೊಳ್ಳಲಾಗುವುದು ಎಂದು ಅರಣ್ಯ ಸಚಿವ ಈಶ್ವರ ಬಿ. ಖಂಡ್ರೆ ತಿಳಿಸಿದ್ದಾರೆ.

ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಂಡೀಪುರದ ಉದ್ಯಾನದಲ್ಲಿ ವಾಹನಗಳ ಸಂಚಾರ ನಿರ್ಬಂಧ ಪ್ರಕರಣವು ಸುಪ್ರೀಂಕೋರ್ಟ್‌ನಲ್ಲಿದೆ. ಕೇರಳ ಹಾಗೂ ಕರ್ನಾಟಕದ ಬಾಂಧವ್ಯ ಗಮನದಲ್ಲಿಟ್ಟುಕೊಂಡು, ಎಲ್ಲರೊಂದಿಗೆ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

Tags:    

Similar News