ನರ್ಸಿಂಗ್ ಕೋರ್ಸ್ ಶುಲ್ಕ ಹೆಚ್ಚಳವಿಲ್ಲ: ಡಾ. ಶರಣಪ್ರಕಾಶ್ ಪಾಟೀಲ್ ಸ್ಪಷ್ಟನೆ
ಖಾಸಗಿ ನರ್ಸಿಂಗ್ ಕಾಲೇಜುಗಳ ಬೇಡಿಕೆಯನ್ನು ತಿರಸ್ಕರಿಸಿದ ಸಚಿವರು, ಅಧಿಕ ಶುಲ್ಕ ವಿಧಿಸಿದರೆ ಕಠಿಣ ಕ್ರಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.;
ಈ ವರ್ಷ ನರ್ಸಿಂಗ್ ಕೋರ್ಸ್ ಶುಲ್ಕ ಹೆಚ್ಚಿಸುವುದಿಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಆರ್. ಪಾಟೀಲ್ ಘೋಷಿಸಿದ್ದಾರೆ. ವಿದ್ಯಾರ್ಥಿಗಳು ಮತ್ತು ಪೋಷಕರ ಮೇಲಿನ ಆರ್ಥಿಕ ಹೊರೆ ತಪ್ಪಿಸುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಖಾಸಗಿ ನರ್ಸಿಂಗ್ ಕಾಲೇಜುಗಳ ಬೇಡಿಕೆಯನ್ನು ತಿರಸ್ಕರಿಸಿದ ಸಚಿವರು, ಅಧಿಕ ಶುಲ್ಕ ವಿಧಿಸಿದರೆ ಕಠಿಣ ಕ್ರಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಬೆಂಗಳೂರಿನ ವಿಕಾಸಸೌಧದಲ್ಲಿ ಗುರುವಾರ ನಡೆದ ನರ್ಸಿಂಗ್ ಕಾಲೇಜುಗಳ ಸಂಘದೊಂದಿಗಿನ ಸಭೆಯಲ್ಲಿ ಅವರು ಈ ವಿಷಯವನ್ನು ಸ್ಪಷ್ಟಪಡಿಸಿದರು. ಆರ್ಥಿಕವಾಗಿ ದುರ್ಬಲ ವರ್ಗದ ವಿದ್ಯಾರ್ಥಿಗಳಿಗೆ ಪೂರಕವಾಗುವಂತೆ ನಮ್ಮ ಸರ್ಕಾರ ಕ್ರಮ ಕೈಗೊಂಡಿದೆ ಎಂದು ಸಚಿವರು ಹೇಳಿದರು. ಹೆಚ್ಚಿನ ನರ್ಸಿಂಗ್ ವಿದ್ಯಾರ್ಥಿಗಳು ಗ್ರಾಮೀಣ ಮತ್ತು ಆರ್ಥಿಕವಾಗಿ ಹಿಂದುಳಿದ ಹಿನ್ನೆಲೆಯಿಂದ ಬಂದವರು. ಹೆಚ್ಚುವರಿ ಶುಲ್ಕ ವಿಧಿಸುವುದು ಅನ್ಯಾಯ ಮತ್ತು ಸ್ವೀಕಾರಾರ್ಹವಲ್ಲ ಎಂದು ಸಚಿವರು ತಿಳಿಸಿದರು.
ಈ ವರ್ಷವೂ ಕಳೆದ ವರ್ಷದ ಶುಲ್ಕ ರಚನೆಯೇ ಮುಂದುವರಿಯಲಿದೆ. ಸರ್ಕಾರಿ ಕೋಟಾಗೆ 10,000 ರೂ., ಇತರೆ ಕೋಟಾಗೆ 1 ಲಕ್ಷ ರೂ. ಮತ್ತು ಕರ್ನಾಟಕೇತರ ವಿದ್ಯಾರ್ಥಿಗಳಿಗೆ 1.4 ಲಕ್ಷ ರೂ. ಶುಲ್ಕ ವಿಧಿಸಲಾಗುವುದು. ಅನುಮೋದಿತ ಶುಲ್ಕಕ್ಕಿಂತ ಹೆಚ್ಚಿನ ಶುಲ್ಕವನ್ನು ಯಾವುದೇ ಕಾಲೇಜು ವಿಧಿಸಿದರೆ, ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಮತ್ತು ಅವುಗಳ ಮಾನ್ಯತೆ ರದ್ದುಗೊಳಿಸಲಾಗುವುದು ಎಂದು ಸಚಿವರು ಎಚ್ಚರಿಸಿದರು.
ರಾಜ್ಯದಲ್ಲಿ ಸುಮಾರು 35,000 ಸೀಟುಗಳನ್ನು ಹೊಂದಿರುವ 611 ನರ್ಸಿಂಗ್ ಕಾಲೇಜುಗಳಿವೆ. ಇವುಗಳಲ್ಲಿ ಶೇ. 80ರಷ್ಟು ಸೀಟುಗಳನ್ನು ಆಡಳಿತ ಮಂಡಳಿ ಭರ್ತಿ ಮಾಡುತ್ತದೆ ಮತ್ತು ಶೇ. 20ರಷ್ಟು ಸರ್ಕಾರಿ ಕೋಟಾದಡಿ ಇವೆ ಎಂದು ಮಾಹಿತಿ ನೀಡಿದರು. ಈ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಿರ್ದೇಶಕ ಎಚ್. ಪ್ರಸನ್ನ ಅವರಿಗೆ ಸಚಿವರು ನಿರ್ದೇಶನ ನೀಡಿದರು. ಹಂಚಿಕೆಯಾಗದ ಸೀಟುಗಳನ್ನು ಭರ್ತಿ ಮಾಡುವ ಬಗ್ಗೆ ರಾಜ್ಯ ಸರ್ಕಾರ ಮಾತ್ರ ನಿರ್ಧರಿಸುತ್ತದೆ. ಯಾವುದೇ ಅನಧಿಕೃತ ಬದಲಾವಣೆಗಳಿಗೆ ಅವಕಾಶವಿಲ್ಲ ಎಂದು ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಸ್ಪಷ್ಟಪಡಿಸಿದರು.